AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ ಕೇರಳ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಜಾಕ್ಕೆ ಆಗ್ರಹಿಸಿ 140 ಸದಸ್ಯ ಬಲದ ಕೇರಳ ವಿಧಾನಸಭೆಯು ಇಂದು ಮಹತ್ವದ ನಿರ್ಣಯವನ್ನು ಅಂಗೀಕರಿಸಿದೆ. ಮತದಾರರ ಪಟ್ಟಿಯಲ್ಲಿ 'ವೋಟ್ ಚೋರಿ' ವಿಚಾರವಾಗಿ ಜ್ಞಾನೇಶ್ ಕುಮಾರ್ ಬಿಜೆಪಿಯೊಂದಿಗೆ ಶಾಮೀಲಾಗಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸುತ್ತಿರುವ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. 16ನೇ ಕೇರಳ ವಿಧಾನಸಭೆಯ 2ನೇ ಅಧಿವೇಶನದ ಮೊದಲ ದಿನದಂದೇ ಈ ನಿರ್ಣಯವನ್ನು ಕೈಗೊಳ್ಳಲಾಗಿದ್ದು, ಭಾರತದ ಚುನಾವಣಾ ಪ್ರಕ್ರಿಯೆಯ ಪಾರದರ್ಶಕತೆ ಮತ್ತು ನಿಷ್ಪಕ್ಷಪಾತತೆಯ ವಿಷಯದಲ್ಲಿ ಯಾವುದೇ ರಾಜಿ ಇಲ್ಲ ಎಂದು ಪ್ರತಿಪಾದಿಸಲಾಗಿದೆ. ಎಸ್​ಐಆರ್ ಪ್ರಕ್ರಿಯೆಯಲ್ಲಿ ಕಂಡುಬಂದಿರುವ ಅಕ್ರಮಗಳನ್ನು ತಕ್ಷಣವೇ ಸರಿಪಡಿಸಬೇಕು ಮತ್ತು ಅಕ್ರಮವಾಗಿ ಪಟ್ಟಿಯಿಂದ ಕೈಬಿಡಲಾದ ಅರ್ಹ ಮತದಾರರ ಹಕ್ಕುಗಳನ್ನು ಪುನಃಸ್ಥಾಪಿಸಬೇಕು ಎಂದು ಆಗ್ರಹಿಸಲಾಗಿದೆ.

ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ ಕೇರಳ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ
Kerala Cm And Gyanesh Kumar
ಸುಷ್ಮಾ ಚಕ್ರೆ
|

Updated on: Oct 12, 2026 | 4:20 PM

Share

ತಿರುವನಂತಪುರಂ, ಅಕ್ಟೋಬರ್ 12: ಭಾರತದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ತಕ್ಷಣವೇ ವಜಾಗೊಳಿಸಬೇಕು ಹಾಗೂ ಮತದಾರರ ಪಟ್ಟಿಯ ಅಕ್ರಮಗಳನ್ನು ಸರಿಪಡಿಸಬೇಕು ಎಂದು ಆಗ್ರಹಿಸಿ 140 ಸದಸ್ಯ ಬಲದ ಕೇರಳ ವಿಧಾನಸಭೆಯು ಇಂದು ಬೃಹತ್ ಬೆಂಬಲದೊಂದಿಗೆ ನಿರ್ಣಯವನ್ನು ಅಂಗೀಕರಿಸಿದೆ. ಕಾಂಗ್ರೆಸ್ ನೇತೃತ್ವದಲ್ಲಿ ‘ವೋಟ್ ಚೋರಿ’ (ಮತಗಳ ಕಳ್ಳತನ) ಹಾಗೂ ಕೇಂದ್ರ ಸರ್ಕಾರದೊಂದಿಗಿನ ಚುನಾವಣಾ ಆಯೋಗದ ಕೈಜೋಡಿಸುವಿಕೆಯ ಕುರಿತು ದೇಶಾದ್ಯಂತ ಪ್ರತಿಭಟನೆಗಳು ತೀವ್ರಗೊಂಡಿರುವ ಹಿನ್ನೆಲೆಯಲ್ಲಿ, ಕೇರಳ ಶಾಸನಸಭೆಯ ಎರಡನೇ ಅಧಿವೇಶನದ ಆರಂಭಿಕ ದಿನದಲ್ಲೇ ಈ ಮಹತ್ವದ ಕ್ರಮ ಕೈಗೊಳ್ಳಲಾಗಿದೆ.

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಕಾರ್ಯವೈಖರಿ ಮತ್ತು ನಿಷ್ಪಕ್ಷಪಾತ ತೀವ್ರ ಸಂಶಯಕ್ಕೆ ಒಳಪಟ್ಟಿದ್ದು, ಚುನಾವಣಾ ಆಯೋಗದ ಮೇಲಿನ ಸಾರ್ವಜನಿಕರ ವಿಶ್ವಾಸವನ್ನು ಮರುಸ್ಥಾಪಿಸಲು ಅವರನ್ನು ತಕ್ಷಣವೇ ವಜಾಗೊಳಿಸಬೇಕು ಎಂದು ನಿರ್ಣಯದಲ್ಲಿ ಸ್ಪಷ್ಟಪಡಿಸಲಾಗಿದೆ.

ಇದನ್ನೂ ಓದಿ: ‘ಪ್ರಜಾಪ್ರಭುತ್ವದ ಕಗ್ಗೊಲೆ, ಕೇಂದ್ರದ್ದು ಸರ್ವಾಧಿಕಾರಿ ಧೋರಣೆ’: ದೆಹಲಿಯಲ್ಲಿ ಬಿಜೆಪಿ ವಿರುದ್ಧ ಅಬ್ಬರಿಸಿದ ರಾಜ್ಯ ಕಾಂಗ್ರೆಸ್​​ ನಾಯಕರು

ಎಸ್‌ಐಆರ್ ಅಕ್ರಮಗಳ ತಿದ್ದುಪಡಿ:

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್​ಐಆರ್) ಹೆಸರಿನಲ್ಲಿ ನಡೆದಿರುವ ಅಕ್ರಮಗಳನ್ನು ತನಿಖೆಗೊಳಪಡಿಸಬೇಕು ಮತ್ತು ಅಕ್ರಮವಾಗಿ ಮತದಾನದ ಹಕ್ಕಿನಿಂದ ವಂಚಿತರಾದ ಪ್ರತಿಯೊಬ್ಬ ಅರ್ಹ ನಾಗರಿಕನ ಹೆಸರನ್ನು ಪುನಃ ಪಟ್ಟಿಗೆ ಸೇರಿಸಬೇಕು. ಚುನಾವಣಾ ಆಯುಕ್ತರ ಆಯ್ಕೆ ಪ್ರಕ್ರಿಯೆಯು ಸಂಪೂರ್ಣವಾಗಿ ಪಾರದರ್ಶಕವಾಗಿರಬೇಕು. ಇದಕ್ಕಾಗಿ ಪ್ರಧಾನಮಂತ್ರಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಭಾರತದ ಮುಖ್ಯ ನ್ಯಾಯಮೂರ್ತಿ ಅವರನ್ನು ಒಳಗೊಂಡ ಆಯ್ಕೆ ಸಮಿತಿಯನ್ನು ತಕ್ಷಣವೇ ಪುನಾರಚಿಸಬೇಕು ಎಂದು ನಿರ್ಣಯ ಅಂಗೀಕರಿಸಲಾಗಿದೆ.

ಇದನ್ನೂ ಓದಿ: ಶಾಂತಿಯುತ ಪ್ರತಿಭಟನೆಯಲ್ಲಿ ಭಾಗವಹಿಸಲು ವಕೀಲರಿಗೂ ಹಕ್ಕಿದೆ; ಸುಪ್ರೀಂ ಕೋರ್ಟ್ ಸ್ಪಷ್ಟನೆ

ಈ ನಿರ್ಣಯ ಅಂಗೀಕಾರದ ಕುರಿತು ಎಕ್ಸ್ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಕೇರಳದ ಮುಖ್ಯಮಂತ್ರಿ ವಿ. ಡಿ. ಸತೀಶನ್, “ಮತದಾನದ ಹಕ್ಕು ನಮ್ಮ ಪ್ರಜಾಪ್ರಭುತ್ವದ ಅಡಿಪಾಯ. ನಾಗರಿಕರ ಸಾಂವಿಧಾನಿಕ ಹಕ್ಕುಗಳನ್ನು ಹತ್ತಿಕ್ಕಲು ಅಥವಾ ಧಕ್ಕೆ ತರಲು ಯಾವುದೇ ಸಂಸ್ಥೆಗೆ ಅವಕಾಶ ನೀಡಲಾಗುವುದಿಲ್ಲ. ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಕೇರಳ ವಿಧಾನಸಭೆಯು ಗಟ್ಟಿಯಾಗಿ ನಿಲ್ಲುತ್ತದೆ” ಎಂದು ತಿಳಿಸಿದ್ದಾರೆ.

ಎಸ್​ಐಆರ್​ನಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ವಿರುದ್ಧ ಸುಪ್ರೀಂ ಕೋರ್ಟ್ ಭೇಟಿಗೆ ಇಂಡಿಯಾ ಒಕ್ಕೂಟ ಹೊರಟಿರುವ ಸಮಯದಲ್ಲೇ ಕೇರಳ ಶಾಸನಸಭೆಯ ಈ ನಿರ್ಣಯವು ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ಮತ್ತಷ್ಟು ರಾಜಕೀಯ ಸವಾಲನ್ನು ತಂದೊಡ್ಡಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More