ಬಿಜೆಪಿ ಹಿರಿಯ ನಾಯಕ ಎಲ್​ಕೆ ಅಡ್ವಾಣಿ ದೆಹಲಿಯ ಆಸ್ಪತ್ರೆಯಿಂದ ಡಿಸ್ಚಾರ್ಜ್

|

Updated on: Jul 04, 2024 | 6:01 PM

LK Advani: ಬುಧವಾರ ರಾತ್ರಿ ಅನಾರೋಗ್ಯದಿಂದ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದ 96 ವರ್ಷದ ಹಿರಿಯ ಬಿಜೆಪಿ ನಾಯಕ ಎಲ್​ಕೆ ಅಡ್ವಾಣಿ ಇಂದು ಸಂಜೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಬಿಜೆಪಿ ಹಿರಿಯ ನಾಯಕ ಎಲ್​ಕೆ ಅಡ್ವಾಣಿ ದೆಹಲಿಯ ಆಸ್ಪತ್ರೆಯಿಂದ ಡಿಸ್ಚಾರ್ಜ್
ಎಲ್​ಕೆ ಅಡ್ವಾಣಿ
Follow us on

ನವದೆಹಲಿ: ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ (ಎಲ್​ಕೆ ಅಡ್ವಾಣಿ) ಬುಧವಾರ ರಾತ್ರಿ ನವದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಅವರನ್ನು ತುರ್ತು ವಿಭಾಗದಲ್ಲಿರಿಸಿ ಚಿಕಿತ್ಸೆ ನೀಡಲಾಗಿತ್ತು. 96 ವರ್ಷದ ಎಲ್​ಕೆ ಅಡ್ವಾಣಿ ಕಳೆದ 2 ವಾರಗಳಲ್ಲಿ ಇದು 2ನೇ ಬಾರಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಇಂದು ಸಂಜೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಮಾಜಿ ಉಪಪ್ರಧಾನಿ ಎಲ್​ಕೆ ಅಡ್ವಾಣಿ ಅವರಿಗೆ ಅಪೋಲೋ ಆಸ್ಪತ್ರೆಯಲ್ಲಿ ಡಾ. ವಿನಿತ್ ಸೂರಿ ಚಿಕಿತ್ಸೆ ನೀಡಿದ್ದರು. ಇದೀಗ ಅವರ ಆರೋಗ್ಯ ಸುಧಾರಿಸಿದ್ದು, ಸ್ಥಿತಿ ಸ್ಥಿರವಾಗಿದೆ ಎಂದು ಅಪೋಲೋ ಆಸ್ಪತ್ರೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಡಿಸ್ಚಾರ್ಜ್ ಮಾಡಿ ಮನೆಗೆ ಕಳುಹಿಸಲಾಗಿದೆ.

ಇದನ್ನೂ ಓದಿ: LK Advani Health: ಬಿಜೆಪಿ ಮುಖಂಡ ಎಲ್​ಕೆ ಅಡ್ವಾಣಿ ಆರೋಗ್ಯದಲ್ಲಿ ಮತ್ತೆ ಏರುಪೇರು; ದೆಹಲಿಯ ಆಸ್ಪತ್ರೆಗೆ ದಾಖಲು

ಹಿರಿಯ ಬಿಜೆಪಿ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ಬುಧವಾರ ರಾತ್ರಿ 9 ಗಂಟೆಗೆ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಅಡ್ವಾಣಿ ಅವರು ಬಳಲುತ್ತಿದ್ದಾರೆ.

ಕಳೆದ ವಾರವೂ ಅನಾರೋಗ್ಯದಿಂದ ಏಮ್ಸ್​ ಆಸ್ಪತ್ರೆಗೆ ದಾಖಲಾಗಿದ್ದ ಎಲ್​ಕೆ ಅಡ್ವಾಣಿ ಅವರನ್ನು ಗುರುವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಡಿಸ್ಚಾರ್ಜ್ ಮಾಡಲಾಗಿತ್ತು. ಆಸ್ಪತ್ರೆ ಮೂಲಗಳ ಪ್ರಕಾರ, ಜೂನ್ 26 ರಂದು ರಾತ್ರಿ 10.30 ರ ಸುಮಾರಿಗೆ ಅಡ್ವಾಣಿ ಅವರನ್ನು ಏಮ್ಸ್‌ಗೆ ದಾಖಲಿಸಲಾಗಿತ್ತು. ಅವರು ಮೂತ್ರಶಾಸ್ತ್ರ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ಸಂಜೆ ಮತ್ತೆ ಅವರ ಆರೋಗ್ಯ ಹದಗೆಟ್ಟಿದ್ದರಿಂದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:00 pm, Thu, 4 July 24