ಅರವಿಂದ್ ಕೇಜ್ರಿವಾಲ್‌ಗೆ ಮತ್ತೊಂದು ಸಂಕಷ್ಟ; ಎನ್ಐಎ ತನಿಖೆಗೆ ಲೆಫ್ಟಿನೆಂಟ್ ಗವರ್ನರ್ ಆದೇಶ
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ವಿರುದ್ಧ ಎನ್ಐಎ ತನಿಖೆ ಕೂಡ ನಡೆಯುವ ಸಾಧ್ಯತೆಯಿದೆ. ನಿಷೇಧಿತ ಭಯೋತ್ಪಾದಕ ಸಂಘಟನೆಯಿಂದ ಆಮ್ ಆದ್ಮಿ ಪಕ್ಷಕ್ಕೆ ರಾಜಕೀಯ ಫಂಡ್ ಪಡೆಯಲಾಗಿದೆ ಎಂಬ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಕೇಜ್ರಿವಾಲ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ನಿಷೇಧಿತ ಭಯೋತ್ಪಾದಕ ಸಂಘಟನೆ “ಸಿಖ್ಸ್ ಫಾರ್ ಜಸ್ಟಿಸ್”ನಿಂದ ಆಮ್ ಆದ್ಮಿ ಪಕ್ಷ (AAP) ರಾಜಕೀಯ ಫಂಡ್ ಪಡೆದಿದೆ ಎಂದು ಆರೋಪಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ NIA (ರಾಷ್ಟ್ರೀಯ ತನಿಖಾ ಸಂಸ್ಥೆ) ತನಿಖೆಗೆ ಶಿಫಾರಸು ಮಾಡಿದ್ದಾರೆ.
ದೇವೇಂದ್ರ ಪಾಲ್ ಭುಲ್ಲರ್ ಬಿಡುಗಡೆಗೆ ಅನುಕೂಲವಾಗುವಂತೆ ಮತ್ತು ಖಲಿಸ್ತಾನಿ ಪರ ಭಾವನೆಗಳನ್ನು ಉತ್ತೇಜಿಸಲು ಭಯೋತ್ಪಾದಕ ಸಂಘಟನೆಯಿಂದ ಈ ಹಣವನ್ನು ಒದಗಿಸಲಾಗಿದೆ ಎಂದು ವರದಿ ಹೇಳಿದೆ. ಇದರ ನಡುವೆ, ಜಾರಿ ನಿರ್ದೇಶನಾಲಯ (ಇಡಿ) ತನ್ನ ಬಂಧನವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಮತ್ತಷ್ಟು ವಿಸ್ತರಿಸಿದರೆ, ನಡೆಯುತ್ತಿರುವ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮೇ 7ರಂದು ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವ ಬಗ್ಗೆ ಯೋಚಿಸಬಹುದು ಎಂದು ಸುಪ್ರೀಂ ಕೋರ್ಟ್ ಮೇ 4ರಂದು ಹೇಳಿತ್ತು.
LG’s letter to NIA recommending NIA probe against Delhi CM Arvind Kejriwal and AAP for allegedly receiving millions of dollars in political funds from banned Khalistani terror organisation. pic.twitter.com/XorTJKqKF8
— Rahul Shivshankar (@RShivshankar) May 6, 2024
ಇದನ್ನೂ ಓದಿ: ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ನಿಂದ ಮಧ್ಯಂತರ ಜಾಮೀನು ಸಾಧ್ಯತೆ
ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಚ್ 21ರಂದು ಅರವಿಂದ್ ಕೇಜ್ರಿವಾಲ್ ಅವರನ್ನು ಇಡಿ ಬಂಧಿಸಿತ್ತು. ಇದಾದ ನಂತರ ಕೇಜ್ರಿವಾಲ್ ಏಪ್ರಿಲ್ 1ರಿಂದ ತಿಹಾರ್ ಜೈಲಿನಲ್ಲಿದ್ದಾರೆ. ಮೇ 7ರವರೆಗೆ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:57 pm, Mon, 6 May 24