ಮಹಾರಾಷ್ಟ್ರದ ಸಿಎಂ ಆಗಿ ದೇವೇಂದ್ರ ಫಡ್ನವಿಸ್ ಜೊತೆ ಇಬ್ಬರು ಉಪ ಮುಖ್ಯಮಂತ್ರಿಗಳು ನಾಳೆ ಪ್ರಮಾಣ ವಚನ ಸ್ವೀಕಾರ
ಮಹಾರಾಷ್ಟ್ರ ಸರ್ಕಾರ ರಚನೆಯ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಮಹಾಯುತಿ ಮೈತ್ರಿಕೂಟವು ಮಹಾರಾಷ್ಟ್ರದಲ್ಲಿ ನಾಳೆ (ಗುರುವಾರ) ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಸರ್ಕಾರ ರಚಿಸಲು ಸಿದ್ಧವಾಗಿದೆ. ಗೃಹ ಸಚಿವಾಲಯದ ವಿಷಯದಲ್ಲಿ ಬಿಜೆಪಿ ರಾಜಿ ಮಾಡಿಕೊಳ್ಳಲು ಸಿದ್ಧವಿಲ್ಲದ ಕಾರಣ ಆ ಖಾತೆಯನ್ನು ತನ್ನಲ್ಲಿಯೇ ಉಳಿಸಿಕೊಳ್ಳುವ ಸಾಧ್ಯತೆಯಿದೆ.
ಮುಂಬೈ: ಮಹಾರಾಷ್ಟ್ರದಲ್ಲಿ ನಾಳೆ (ಡಿಸೆಂಬರ್ 5) ನೂತನ ಸರ್ಕಾರ ರಚನೆಯಾಗಲಿದೆ. ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಹಾಗೂ ಇಬ್ಬರು ಉಪ ಮುಖ್ಯಮಂತ್ರಿಗಳಾಗಿ ಏಕನಾಥ್ ಶಿಂಧೆ, ಅಜಿತ್ ಪವಾರ್ ಗುರುವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಗೃಹ ಸಚಿವಾಲಯ ಬಿಜೆಪಿಯಲ್ಲೇ ಉಳಿಯಲಿದೆ ಎಂದು ಮೂಲಗಳು ತಿಳಿಸಿವೆ. ಮಹಾಯುತಿ ಮೈತ್ರಿಕೂಟದ ಮೂರು ಪಕ್ಷಗಳ ನಡುವೆ ವಿವಿಧ ಇತರ ಸಚಿವಾಲಯಗಳನ್ನು ಹಂಚಲಾಗಿದೆ.
ಶಿವಸೇನೆ ಪ್ರಕಾರ, ಹೊಸ ಸರ್ಕಾರದಲ್ಲಿ ಉಪಮುಖ್ಯಮಂತ್ರಿಗಳಾಗಿ ಅಜಿತ್ ಪವಾರ್ ಜೊತೆಗೆ ಏಕನಾಥ್ ಶಿಂಧೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಗುರುವಾರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮಾತ್ರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೊದಲು ನಿರ್ಧರಿಸಲಾಗಿತ್ತು. ಆದರೆ, ಈಗ ಇಬ್ಬರು ಡಿಸಿಎಂಗಳು ಕೂಡ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಘೋಷಿಸಲಾಗಿದೆ.
ಇದನ್ನೂ ಓದಿ: ಮಹಾರಾಷ್ಟ್ರದ ಸಿಎಂ ಆಗಲಿರುವ ದೇವೇಂದ್ರ ಫಡ್ನವಿಸ್ ಕುರಿತ ಅಚ್ಚರಿಯ ವಿಷಯಗಳಿವು
ಇಂದು ಮುಂಜಾನೆ ಮಹಾರಾಷ್ಟ್ರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆಯಾದ ನಂತರ ದೇವೇಂದ್ರ ಫಡ್ನವೀಸ್ ಅವರು ಮುಖ್ಯಮಂತ್ರಿ ಸ್ಥಾನವನ್ನು ವಹಿಸಿಕೊಳ್ಳಲಿದ್ದಾರೆ. ದೇವೇಂದ್ರ ಫಡ್ನವಿಸ್, ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ಅವರು ಮಹಾಯುತಿ ಸರ್ಕಾರ ರಚಿಸಲು ತಮ್ಮ ಹಕ್ಕು ಮಂಡಿಸಲು ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರನ್ನು ಭೇಟಿಯಾಗಿದ್ದರು.
ನಾಳೆ ಸಂಜೆ 5:30ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಹೊಸ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. 2024ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ಮಹಾಯುತಿ ಮೈತ್ರಿಕೂಟ ಅದ್ಭುತವಾದ ವಿಜಯವನ್ನು ಕಂಡಿತು. ಇದು 288ರಲ್ಲಿ 235 ಸ್ಥಾನಗಳೊಂದಿಗೆ ಪ್ರಚಂಡ ಗೆಲುವು ಸಾಧಿಸಿತು. ಬಿಜೆಪಿ 132 ಸ್ಥಾನಗಳೊಂದಿಗೆ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಹಿನ್ನೆಲೆಯಲ್ಲಿ ಸಿಎಂ ಸ್ಥಾನವನ್ನು ತನ್ನದಾಗಿಸಿಕೊಂಡಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ