ನವದೆಹಲಿ: ನವದೆಹಲಿ ಪ್ರವಾಸದಲ್ಲಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ (TMC) ಅಧ್ಯಕ್ಷೆ ಮಮತಾ ಬ್ಯಾನರ್ಜಿ (Mamata Banerjee) ಇಂದು (ಶುಕ್ರವಾರ) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಭೇಟಿ ಮಾಡಿ ತಮ್ಮ ರಾಜ್ಯಕ್ಕೆ MGNREGA ಮತ್ತು ಜಿಎಸ್ಟಿ ಬಾಕಿ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚಿಸಲಿದ್ದಾರೆ. ಇಂದು ಸಂಜೆಯ ವೇಳೆಗೆ ಮಮತಾ ಬ್ಯಾನರ್ಜಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಲಿದ್ದಾರೆ.
ಸಚಿವ ಪಾರ್ಥ ಚಟರ್ಜಿ ಅವರ ಆಪ್ತ ಸಹಾಯಕಿ ಅರ್ಪಿತಾ ಮುಖರ್ಜಿಯ ಫ್ಲಾಟ್‌ಗಳಲ್ಲಿ ಕೋಟ್ಯಂತರ ರೂ. ನಗದು ಮತ್ತು ಚಿನ್ನವನ್ನು ಇಡಿ ಅಧಿಕಾರಿಗಳು ವಶಪಡಿಸಿಕೊಂಡ ನಂತರ ಕಳೆದ ವಾರ ಪಕ್ಷದ ಎಲ್ಲಾ ಹುದ್ದೆಗಳಿಂದ ಪಾರ್ಥ ಚಟರ್ಜಿ ಅವರನ್ನು ತೆಗೆದುಹಾಕಲಾಗಿತ್ತು. ಅದರ ಬೆನ್ನಲ್ಲೇ ಮಮತಾ ಬ್ಯಾನರ್ಜಿ ದೆಹಲಿ ಪ್ರವಾಸ ಕೈಗೊಂಡಿದ್ದಾರೆ.
ನಿನ್ನೆ ನಡೆದ ಟಿಎಂಸಿ ಸಭೆಯಲ್ಲಿ 2024ರ ಲೋಕಸಭೆ ಚುನಾವಣೆಯ ಹಾದಿಯನ್ನು ಸಂಸದರೊಂದಿಗೆ ಮಮತಾ ಬ್ಯಾನರ್ಜಿ ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇತ್ತೀಚೆಗೆ ಘೋಷಿಸಲಾದ ಪಶ್ಚಿಮ ಬಂಗಾಳದ 7 ಹೊಸ ಜಿಲ್ಲೆಗಳಿಗೆ ಯಾವ ಹೆಸರಿಡಬೇಕೆಂಬ ಸಲಹೆಗಳನ್ನು ಕೂಡ ಮಮತಾ ಬ್ಯಾನರ್ಜಿ ತಮ್ಮ ಪಕ್ಷದ ಸಂಸದರಿಂದ ಕೇಳಿದ್ದಾರೆ.
ಇದನ್ನೂ ಓದಿ: ಪಾರ್ಥ ಚಟರ್ಜಿ ವಜಾ ನಂತರ ಬುಧವಾರ ಸಚಿವ ಸಂಪುಟ ಪುನರ್ರಚನೆ ಮಾಡಲಿದ್ದಾರೆ ಮಮತಾ ಬ್ಯಾನರ್ಜಿ
4 ದಿನಗಳ ದೆಹಲಿ ಪ್ರವಾಸದಲ್ಲಿರುವ ಮಮತಾ ಬ್ಯಾನರ್ಜಿ ಆಗಸ್ಟ್ 7ರಂದು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 7ರಂದು ನೀತಿ ಆಯೋಗದ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಲಿದ್ದು, ಅಲ್ಲಿ ಕೃಷಿ, ಆರೋಗ್ಯ ಮತ್ತು ಆರ್ಥಿಕತೆಗೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚಿಸಲಾಗುವುದು. ಕಳೆದ ವರ್ಷದ ಕೌನ್ಸಿಲ್ ಸಭೆಯಲ್ಲಿ ಮಮತಾ ಬ್ಯಾನರ್ಜಿ ಪಾಲ್ಗೊಂಡಿರಲಿಲ್ಲ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ತನಿಖೆ ಎದುರಿಸುತ್ತಿರುವ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಸಹ ದೆಹಲಿಯಲ್ಲಿ ಮಮತಾ ಬ್ಯಾನರ್ಜಿ ಭೇಟಿಯಾಗುವ ನಿರೀಕ್ಷೆಯಿದೆ.