Mumbai Rains: ಮಳೆಯ ಆರ್ಭಟದಿಂದ ಮುಂಬೈನಲ್ಲಿ 33 ಜನ ಸಾವು; ಉತ್ತರಾಖಂಡದಲ್ಲಿ ಭಾರೀ ಭೂಕುಸಿತ

|

Updated on: Jul 19, 2021 | 12:47 PM

Weather Today: ಭಾನುವಾರ ಸುರಿದ ಸಿಡಿಲು ಸಹಿತ ಮಳೆಗೆ ಮುಂಬೈನಲ್ಲಿ 33 ಜನರು ಬಲಿಯಾಗಿದ್ದಾರೆ. ಮುಂಬೈ ಸುತ್ತಮುತ್ತ ಭಾರೀ ಭೂಕುಸಿತವಾಗುತ್ತಿದೆ.

Mumbai Rains: ಮಳೆಯ ಆರ್ಭಟದಿಂದ ಮುಂಬೈನಲ್ಲಿ 33 ಜನ ಸಾವು; ಉತ್ತರಾಖಂಡದಲ್ಲಿ ಭಾರೀ ಭೂಕುಸಿತ
ಉತ್ತರಾಖಂಡದಲ್ಲಿ ಭೂಕುಸಿತ
Follow us on

ಮುಂಬೈ: ಭಾರತದ ಹಲವು ರಾಜ್ಯಗಳಲ್ಲಿ ಕಳೆದ ನಾಲ್ಕೈದು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಮಹಾರಾಷ್ಟ್ರದ ಮುಂಬೈ, ರಾಷ್ಟ್ರ ರಾಜಧಾನಿ ದೆಹಲಿ, ಗುಜರಾತ್, ಕೇರಳ, ಕರ್ನಾಟಕ (Karnataka Rain), ಉತ್ತರಾಖಂಡ ಸೇರಿದಂತೆ ಅನೇಕ ರಾಜ್ಯಗಳಲ್ಲಿ ವರುಣನ ಆರ್ಭಟ ಜೋರಾಗಿದೆ. ಭಾರೀ ಮಳೆಯಿಂದ ಮುಂಬೈನಲ್ಲಿ 33 ಜನರು ಸಾವನ್ನಪ್ಪಿದ್ದು, ಉತ್ತರಾಖಂಡದಲ್ಲಿ 3 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ದೆಹಲಿಯಲ್ಲೂ ಇಂದು ಮಳೆ ಮುಂದುವರೆದಿದ್ದು, ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದಲ್ಲೂ ಇನ್ನು ಮೂರು ದಿನ ಮಳೆ ಹೆಚ್ಚಾಗಲಿದೆ. ಜುಲೈ 21ರವರೆಗೆ ಮಲೆನಾಡು, ಕರಾವಳಿ, ಕೊಡಗು ಸೇರಿದಂತೆ ಬಹುತೇಕ ಕಡೆ ಮಳೆಯಾಗಲಿದೆ.

ಮುಂಬೈನಲ್ಲಿ ನಾಲ್ಕೈದು ದಿನಗಳಿಂದ ಬಿಡದೆ ಮಳೆಯಾಗುತ್ತಿದ್ದು, ರಸ್ತೆಗಳೆಲ್ಲ ಕೆರೆಯಂತಾಗಿವೆ. ರೈಲು, ಬಸ್​ ಸಂಚಾರಕ್ಕೆ ತೊಂದರೆಯಾಗಿದ್ದು, ಮಾರ್ಗವನ್ನು ಬದಲಿಸಲಾಗಿದೆ. ಭಾನುವಾರ ಸುರಿದ ಸಿಡಿಲು ಸಹಿತ ಮಳೆಗೆ ಮುಂಬೈನಲ್ಲಿ 33 ಜನರು ಬಲಿಯಾಗಿದ್ದಾರೆ. ಮುಂಬೈ ಸುತ್ತಮುತ್ತ ಭಾರೀ ಭೂಕುಸಿತವಾಗುತ್ತಿದೆ. ಇನ್ನೂ 24 ಗಂಟೆಗಳ ಕಾಲ ಮುಂಬೈ ಸುತ್ತಮುತ್ತಲ ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಹಾರಾಷ್ಟ್ರದಲ್ಲಿ ಮಳೆಯಿಂದ ಉಂಟಾಗಿರುವ ಪರಿಸ್ಥಿತಿ ಮತ್ತು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಇಂದು ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹಿರಿಯ ಅಧಿಕಾರಿಗಳ ಸಭೆ ಕರೆದಿದ್ದಾರೆ.

ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಮಾಂಡೋ ಎಂಬ ಗ್ರಾಮದಲ್ಲಿ ಮೇಘಸ್ಫೋಟದಿಂದ ಮೂರು ಜನರು ಸಾವನ್ನಪ್ಪಿದ್ದಾರೆ. ಗುಡ್ಡ ಕುಸಿದ ಪರಿಣಾಮ ನಾಲ್ಕು ಜನರು ನಾಪತ್ತೆಯಾಗಿದ್ದು, ಅವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ಹರಿಯಾಣ, ದೆಹಲಿ, ಮಧ್ಯಪ್ರದೇಶ, ರಾಜಸ್ಥಾನ, ಉತ್ತರ ಕೊಂಕಣ, ಬಿಹಾರದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಅದರಂತೆ ಉತ್ತರ ಕರ್ನಾಟಕ ಭಾಗದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ.

ಕರ್ನಾಟಕದಲ್ಲೂ ಮಳೆ ಹೆಚ್ಚಾಗುತ್ತಿದ್ದು, ರಾಜ್ಯದ 14 ಜಿಲ್ಲೆಗಳಿಗೆ ಇನ್ನೆರಡು ದಿನ ರೆಡ್ ಅಲರ್ಟ್​ ಘೋಷಿಸಲಾಗಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ರೆಡ್ ಅಲರ್ಟ್​ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಹಾವೇರಿ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ಇದನ್ನೂ ಓದಿ: Karnataka Weather: ಕರ್ನಾಟಕದಲ್ಲಿ ಮುಂದುವರೆದ ಮಳೆಯ ಆರ್ಭಟ; ಹಲವೆಡೆ ಆರೆಂಜ್ ಅಲರ್ಟ್​

(Monsoon 2021 Three Dead in Uttarakhand 33 Killed in Mumbai after Heavy Rain )