ಇರಾನ್ ಯುದ್ಧದ ನಡುವೆ ಸೌದಿ ಕ್ರೌನ್ ಪ್ರಿನ್ಸ್ ಜೊತೆ ಪ್ರಧಾನಿ ಮೋದಿ ಮಾತುಕತೆ

ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ನಡುವೆ ಪ್ರಧಾನಿ ನರೇಂದ್ರ ಮೋದಿ ಸೌದಿ ಅರೇಬಿಯಾದ ಕ್ರೌನ್ ಪ್ರಿನ್ಸ್ ಮತ್ತು ಪ್ರಧಾನಿ ಮೊಹಮ್ಮದ್ ಬಿನ್ ಸಲ್ಮಾನ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ್ದಾರೆ. ಇರಾನ್ ನಡೆಸಿದ ಯುದ್ಧ ಮತ್ತು ಅದರ ಪರಿಣಾಮಗಳು, ಹಾರ್ಮುಜ್ ಜಲಸಂಧಿಯಲ್ಲಿ ಸಂಚಾರದ ಸ್ವಾತಂತ್ರ್ಯದ ಬಗ್ಗೆ ಇಬ್ಬರೂ ನಾಯಕರು ಮಾತನಾಡಿದ್ದಾರೆ. ಹಾಗೇ ಹಡಗು ಮಾರ್ಗಗಳನ್ನು ಸುರಕ್ಷಿತಗೊಳಿಸುವ ಅಗತ್ಯವನ್ನು ಅವರಿಬ್ಬರೂ ಒತ್ತಿ ಹೇಳಿದ್ದಾರೆ. ವಿಶ್ವದ ಅತ್ಯಂತ ನಿರ್ಣಾಯಕ ತೈಲ ಸಾಗಣೆಯ ಚಾಕ್‌ಪಾಯಿಂಟ್‌ಗಳಲ್ಲಿ ಒಂದಾದ ಹಾರ್ಮುಜ್ ಜಲಸಂಧಿಯು ಯುದ್ಧದಿಂದಾಗಿ ಪ್ರಮುಖ ಅಡಚಣೆಗಳನ್ನು ಕಂಡಿರುವುದರಿಂದ ಇದು ಇತರೆ ದೇಶಗಳ ಮೇಲೂ ಪರಿಣಾಮ ಬೀರಿದೆ.

ಇರಾನ್ ಯುದ್ಧದ ನಡುವೆ ಸೌದಿ ಕ್ರೌನ್ ಪ್ರಿನ್ಸ್ ಜೊತೆ ಪ್ರಧಾನಿ ಮೋದಿ ಮಾತುಕತೆ
Pm Modi With Saudi Crown Prince
Image Credit source: AP

Updated on: Mar 28, 2026 | 8:59 PM

ನವದೆಹಲಿ, ಮಾರ್ಚ್ 28: ಪ್ರಧಾನಿ ನರೇಂದ್ರ ಮೋದಿಯವರು (PM Narendra Modi) ಸೌದಿ ಅರೇಬಿಯಾದ ಕ್ರೌನ್ ಪ್ರಿನ್ಸ್ ಮತ್ತು ಪ್ರಧಾನಿ ಮೊಹಮ್ಮದ್ ಬಿನ್ ಸಲ್ಮಾನ್ ಅವರೊಂದಿಗೆ ಮಾತನಾಡಿದ್ದಾರೆ. ಇಬ್ಬರೂ ನಾಯಕರು ಪಶ್ಚಿಮ ಏಷ್ಯಾದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷ ಮತ್ತು ಪ್ರಾದೇಶಿಕ ಸ್ಥಿರತೆ ಮತ್ತು ಕಡಲ ಭದ್ರತೆಗೆ ಆ ಯುದ್ಧದ ಪರಿಣಾಮಗಳ ಬಗ್ಗೆ ಚರ್ಚಿಸಿದ್ದಾರೆ. ಈ ಬಗ್ಗೆ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ ಪ್ರಧಾನಿ ಮೋದಿ, ಪಶ್ಚಿಮ ಏಷ್ಯಾ ಪ್ರದೇಶದಲ್ಲಿನ ಪ್ರಮುಖ ಇಂಧನ ಮೂಲಸೌಕರ್ಯಗಳ ಮೇಲಿನ ದಾಳಿಗಳ ಬಗ್ಗೆ ಕಳವಳ ವ್ಯಕ್ತಪಡಿಸಿರುವುದಾಗಿ ತಿಳಿಸಿದ್ದಾರೆ.

“ಸೌದಿ ಅರೇಬಿಯಾದ ಕ್ರೌನ್ ಪ್ರಿನ್ಸ್ ಮತ್ತು ಪ್ರಧಾನಿ ಎಚ್‌ಆರ್‌ಎಚ್ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಅವರೊಂದಿಗೆ ಮಾತನಾಡಿದೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಬಗ್ಗೆ ಚರ್ಚಿಸಿದ್ದೇನೆ. ಪ್ರಾದೇಶಿಕ ಇಂಧನ ಮೂಲಸೌಕರ್ಯಗಳ ಮೇಲಿನ ದಾಳಿಗಳನ್ನು ಭಾರತ ಖಂಡಿಸುತ್ತದೆ ಎಂದು ನಾನು ಪುನರುಚ್ಚರಿಸಿದ್ದೇನೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕೆಲಸ ಮಾಡಿ ಮುಗಿಸುವ ಇಬ್ಬರು ವ್ಯಕ್ತಿಗಳೆಂದರೆ ನಾನು ಮತ್ತು ಮೋದಿ; ಟ್ರಂಪ್ ಅಚ್ಚರಿಯ ಮೆಚ್ಚುಗೆ

“ಹಡಗು ಮಾರ್ಗಗಳು ಮತ್ತು ವ್ಯಾಪಾರ ಮಾರ್ಗಗಳ ಸುರಕ್ಷತೆಯ ಬಗ್ಗೆ ಹೆಚ್ಚುತ್ತಿರುವ ಕಳವಳಗಳ ನಡುವೆ ಈ ಪ್ರದೇಶದಲ್ಲಿ ನಿರಂತರ ಸಮುದ್ರ ಸಂಚಾರದ ಅವಕಾಶದ ಮಹತ್ವವನ್ನು ಎರಡೂ ಕಡೆಯವರು ಒಪ್ಪಿಕೊಂಡಿದ್ದೇವೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.


ಇದೇ ವೇಳೆ, ಸೌದಿ ಅರೇಬಿಯಾದಲ್ಲಿ ವಾಸಿಸುವ ಭಾರತೀಯ ಸಮುದಾಯಕ್ಕೆ ನೀಡಿದ ಬೆಂಬಲಕ್ಕಾಗಿ ಪ್ರಧಾನಿ ಮೋದಿ ಸೌದಿ ಕ್ರೌನ್ ಪ್ರಿನ್ಸ್‌ಗೆ ಧನ್ಯವಾದ ಅರ್ಪಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us