ನ್ಯಾಷನಲ್ ಹೆರಾಲ್ಡ್ ಕೇಸ್; ಕಾಂಗ್ರೆಸ್ ಕಾರ್ಯಕರ್ತರ ಹುಟ್ಟುಹಬ್ಬಕ್ಕಾಗಿ ಇಡಿ ವಿಚಾರಣೆಗೆ ಡಿಕೆ ಶಿವಕುಮಾರ್ ಗೈರು
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಜಾರಿ ನಿರ್ದೇಶನಾಲಯ ಶುಕ್ರವಾರ ಮತ್ತೆ ನೋಟಿಸ್ ಜಾರಿ ಮಾಡಿತ್ತು.
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಅವರಿಗೆ ಇಂದು (ಸೋಮವಾರ) ಜಾರಿ ನಿರ್ದೇಶನಾಲಯದ (ED) ಮುಂದೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಲಾಗಿತ್ತು. ಆದರೆ, ಕಾಂಗ್ರೆಸ್ (Congress) ಪಕ್ಷದ ಕಾರ್ಯಕರ್ತರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿರುವುದರಿಂದ ಇಡಿ ವಿಚಾರಣೆಗೆ ಇಂದು ಹಾಜರಾಗುವುದಿಲ್ಲ ಎಂದು ಡಿಕೆಶಿ ಹೇಳಿದ್ದಾರೆ. ಜಾರಿ ನಿರ್ದೇಶನಾಲಯ ಡಿಕೆ ಶಿವಕುಮಾರ್ ಜೊತೆಗೆ ಕಾಂಗ್ರೆಸ್ ಹಿರಿಯ ನಾಯಕ ಮತ್ತು ಅವರ ಸಹೋದರ ಡಿ.ಕೆ. ಸುರೇಶ್ ಅವರಿಗೂ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿತ್ತು.
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಜಾರಿ ನಿರ್ದೇಶನಾಲಯ ಶುಕ್ರವಾರ ಮತ್ತೆ ನೋಟಿಸ್ ಜಾರಿ ಮಾಡಿತ್ತು. ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ರಾಜ್ಯ ಪ್ರವೇಶಿಸಿದ್ದ ವೇಳೆ ಡಿಕೆ ಶಿವಕುಮಾರ್ ಅವರಿಗೆ ನೋಟಿಸ್ ನೀಡಿದ್ದ ಇಡಿ ಈಗ ಮತ್ತೆ ನವೆಂಬರ್ 7ರಂದು (ಇಂದು) ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು.
ಇದನ್ನೂ ಓದಿ: Breaking News: ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣ; ದೆಹಲಿ ಹೈಕೋರ್ಟ್ನಿಂದ ಇಡಿಗೆ ನೋಟಿಸ್ ಜಾರಿ
ನಾನು ನವೆಂಬರ್ 7ರಂದು ಇಡಿ ಮುಂದೆ ಹಾಜರಾಗುವುದಿಲ್ಲ. ಪಕ್ಷದ ಕಾರ್ಯಕರ್ತರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 7ರಂದು ಡಿಕೆ ಶಿವಕುಮಾರ್ ಮತ್ತು ಸಂಸದ ಡಿಕೆ ಸುರೇಶ್ ಅವರ ಹೇಳಿಕೆಯನ್ನು ಇಡಿ ದಾಖಲಿಸಿಕೊಂಡಿತ್ತು. ಈ ಪ್ರಕರಣದಲ್ಲಿ ಈ ಹಿಂದೆ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಅವರ ಪುತ್ರ ರಾಹುಲ್ ಗಾಂಧಿ ಅವರನ್ನೂ ವಿಚಾರಣೆ ನಡೆಸಲಾಗಿತ್ತು.
ಡಿಕೆ ಶಿವಕುಮಾರ್ ಮತ್ತು ಡಿಕೆ ಸುರೇಶ್ ಅವರ ಹೇಳಿಕೆಗಳನ್ನು ಕಾಂಗ್ರೆಸ್ ನಡೆಸುತ್ತಿರುವ ‘ಭಾರತ್ ಜೋಡೋ ಯಾತ್ರೆ’ ಕರ್ನಾಟಕದಲ್ಲಿ ಹಾದುಹೋಗುವಾಗಲೇ ದಾಖಲಿಸಲಾಗಿತ್ತು. ಕಳೆದ ತಿಂಗಳು ಇಡಿ ವಿಚಾರಣೆಯ ನಂತರ ಮಾತನಾಡಿದ್ದ ಡಿಕೆ ಶಿವಕುಮಾರ್, ಯಂಗ್ ಇಂಡಿಯನ್ (ನ್ಯಾಷನಲ್ ಹೆರಾಲ್ಡ್ ಮಾಲೀಕತ್ವದ ಕಂಪನಿ) ಮತ್ತು ನನಗೆ ಸಂಪರ್ಕ ಹೊಂದಿರುವ ಸಂಸ್ಥೆಗಳ ಬಗ್ಗೆ ಸಾಕಷ್ಟು ಪ್ರಶ್ನೆಗಳನ್ನು ಕೇಳಲಾಯಿತು. ಅದಕ್ಕೆ ಸಂಬಂಧಿಸಿದ ದಾಖಲೆಗಳು ನನ್ನ ಬಳಿ ಇರಲಿಲ್ಲ. ಅವುಗಳನ್ನು ಇಡಿಗೆ ಇಮೇಲ್ ಮೂಲಕ ಸಾಧ್ಯವಾದಷ್ಟು ಬೇಗ ಕಳುಹಿಸಲು ಒಪ್ಪಿಕೊಂಡಿದ್ದೇನೆ ಎಂದಿದ್ದರು.
ಡಿಕೆ ಶಿವಕುಮಾರ್ ಅವರು ಸೆಪ್ಟೆಂಬರ್ 19ರಂದು ದೆಹಲಿಯಲ್ಲಿ ಇಡಿ ಮುಂದೆ ವಿಚಾರಣೆಗೆ ಹಾಜರಾಗಿದ್ದರು. ಅಲ್ಲಿ ಅಕ್ರಮ ಆಸ್ತಿ ಹೊಂದಿರುವ ಆರೋಪಕ್ಕೆ ಸಂಬಂಧಿಸಿದ ಮತ್ತೊಂದು ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಪ್ರಶ್ನಿಸಲಾಗಿತ್ತು. ನ್ಯಾಷನಲ್ ಹೆರಾಲ್ಡ್ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಇತರ ಕಾಂಗ್ರೆಸ್ ನಾಯಕರಾದ ಹಾಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪವನ್ ಬನ್ಸಾಲ್ ಅವರನ್ನೂ ಇಡಿ ಕಳೆದ ಕೆಲವು ತಿಂಗಳುಗಳ ಹಿಂದೆ ಪ್ರಶ್ನಿಸಿತ್ತು. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಯಂಗ್ ಇಂಡಿಯನ್ನ ಬಹುಪಾಲು ಷೇರುದಾರರಾಗಿದ್ದಾರೆ.
ಡಿಕೆ ಶಿವಕುಮಾರ್ ವಿರುದ್ಧ ಆದಾಯ ತೆರಿಗೆ ಇಲಾಖೆಯ ಹಲವು ಸುತ್ತಿನ ವಿಚಾರಣೆಯ ನಂತರ 2019ರ ಸೆಪ್ಟೆಂಬರ್ 3ರಂದು ಅವರನ್ನು ಬಂಧಿಸಲಾಗಿತ್ತು. ಅದೇ ವರ್ಷದ ಅಕ್ಟೋಬರ್‌ನಲ್ಲಿ ದೆಹಲಿ ಹೈಕೋರ್ಟ್ ಅವರಿಗೆ ಜಾಮೀನು ನೀಡಿತ್ತು.