National Herald Case: ನ್ಯಾಷನಲ್ ಹೆರಾಲ್ಡ್ ಪ್ರಕರಣ; ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ಇಡಿಯಿಂದ ಮತ್ತೆ ಸಮನ್ಸ್ ಜಾರಿ ಸಾಧ್ಯತೆ
ಪವನ್ ಬನ್ಸಾಲ್, ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಸೇರಿದಂತೆ ಯಂಗ್ ಇಂಡಿಯನ್‌ನ ಎಲ್ಲಾ ಪದಾಧಿಕಾರಿಗಳನ್ನು ಶೀಘ್ರದಲ್ಲೇ ವಿಚಾರಣೆಗೆ ಕರೆಸಲಾಗುವುದು ಎಂದು ಮೂಲಗಳು ತಿಳಿಸಿವೆ.
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದ (National Herald Scam) ತನಿಖೆಯಲ್ಲಿ ಕಾಂಗ್ರೆಸ್ ಒಡೆತನದ ಯಂಗ್ ಇಂಡಿಯನ್‌ನಲ್ಲಿ ಸಂಶಯಾಸ್ಪದ ವಹಿವಾಟುಗಳು ನಡೆದಿವೆ ಎಂಬುದನ್ನು ಜಾರಿ ನಿರ್ದೇಶನಾಲಯ (ಇಡಿ) ಪತ್ತೆ ಮಾಡಿದೆ ಎನ್ನಲಾಗುತ್ತಿದೆ. ಹೀಗಾಗಿ, ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ (Sonia Gandhi) ಮತ್ತು ರಾಹುಲ್ ಗಾಂಧಿಯವರಿಗೆ (Rahul Gandhi) ಹೊಸ ಸಂಕಷ್ಟ ಎದುರಾಗುವ ಸಾಧ್ಯತೆಯಿದೆ.
ಶೆಲ್ ಕಂಪನಿಗಳ ಮೂಲಕ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸುಮಾರು 4ರಿಂದ 5 ಕೋಟಿ ರೂ.ಗಳ ವಹಿವಾಟು ನಡೆದಿದೆ ಎಂದು ಮೂಲಗಳು ತಿಳಿಸಿವೆ. ಈ ಶೆಲ್ ಕಂಪನಿಗಳ ಮಾಲೀಕರು/ ಷೇರುದಾರರು/ ನಿರ್ದೇಶಕರ ಹೇಳಿಕೆಗಳನ್ನು ಇಡಿ ಈಗಾಗಲೇ ದಾಖಲಿಸಿಕೊಂಡಿದೆ ಎಂದು ನ್ಯೂಸ್18 ವರದಿ ಮಾಡಿದೆ.
ಪವನ್ ಬನ್ಸಾಲ್, ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಸೇರಿದಂತೆ ಯಂಗ್ ಇಂಡಿಯನ್‌ನ ಎಲ್ಲಾ ಪದಾಧಿಕಾರಿಗಳನ್ನು ಶೀಘ್ರದಲ್ಲೇ ವಿಚಾರಣೆಗೆ ಕರೆಸಲಾಗುವುದು ಎಂದು ಮೂಲಗಳು ತಿಳಿಸಿವೆ. ಈ ಅನುಮಾನಾಸ್ಪದ ವಹಿವಾಟುಗಳಿಗೆ ಸಂಬಂಧಿಸಿದ ಸಾಕ್ಷ್ಯಗಳನ್ನು ಇಟ್ಟುಕೊಂಡೇ ಅವರ ವಿಚಾರಣೆ ನಡೆಸಲು ಇಡಿ ನಿರ್ಧರಿಸಿದೆ ಎನ್ನಲಾಗಿದೆ.
ಇದನ್ನೂ ಓದಿ: Sonia Gandhi: ನ್ಯಾಷನಲ್ ಹೆರಾಲ್ಡ್ ಪ್ರಕರಣ; ಇಡಿ ಅಧಿಕಾರಿಗಳಿಂದ ಇಂದು ಸೋನಿಯಾ ಗಾಂಧಿ 3ನೇ ಸುತ್ತಿನ ವಿಚಾರಣೆ
ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಅವರ ಮಗ ಹಾಗೂ ಸಂಸದ ರಾಹುಲ್ ಗಾಂಧಿ ಅವರು ಯಂಗ್ ಇಂಡಿಯನ್‌ನಲ್ಲಿ ಹೆಚ್ಚಿನ ಷೇರು ಹೊಂದಿದ್ದಾರೆ. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ನಡೆಯುತ್ತಿರುವ ತನಿಖೆಯ ಭಾಗವಾಗಿ ಆಗಸ್ಟ್‌ನಲ್ಲಿ ಇಡಿ ದೆಹಲಿಯ ಯಂಗ್ ಇಂಡಿಯನ್ ಕಚೇರಿಯಲ್ಲಿ ಶೋಧ ಕಾರ್ಯಾಚರಣೆ ನಡೆಸಿತ್ತು. ಹೆರಾಲ್ಡ್ ಹೌಸ್ ಕಟ್ಟಡದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ 6 ಗಂಟೆಗಳಿಗೂ ಹೆಚ್ಚು ಕಾಲ ಶೋಧ ನಡೆಸಲಾಗಿತ್ತು. ಸಂಸತ್ತಿನ ಅಧಿವೇಶನದ ಮಧ್ಯದಲ್ಲಿಯೇ ಮಲ್ಲಿಕಾರ್ಜುನ್ ಖರ್ಗೆಯವರಿಗೆ ಸಮನ್ಸ್ ಜಾರಿ ಮಾಡಿರುವ ಬಗ್ಗೆ ಕಾಂಗ್ರೆಸ್ ಪಕ್ಷ ಈ ಹಿಂದೆ ಆಕ್ರೋಶ ವ್ಯಕ್ತಪಡಿಸಿತ್ತು.
ಏನಿದು ನ್ಯಾಷನಲ್ ಹೆರಾಲ್ಡ್ ಹಗರಣ?: ಭಾರತದ ಮೊದಲ ಪ್ರಧಾನ ಮಂತ್ರಿ ಜವಾಹರಲಾಲ್ ನೆಹರು 1938ರಲ್ಲಿ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಪ್ರಾರಂಭಿಸಿದರು. ಈ ಪತ್ರಿಕೆಯನ್ನು ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (AJL) ಪ್ರಕಟಿಸಿತ್ತು. ಇದು 1937ರಲ್ಲಿ 5,000 ಇತರ ಸ್ವಾತಂತ್ರ್ಯ ಹೋರಾಟಗಾರರನ್ನು ಅದರ ಷೇರುದಾರರಾಗಿ ಸ್ಥಾಪಿಸಿತು. ಈ ಕಂಪನಿಯು ಯಾವುದೇ ಒಬ್ಬ ವ್ಯಕ್ತಿಗೆ ಸೇರಿದ್ದಲ್ಲ.
2010ರಲ್ಲಿ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ 1,057 ಷೇರುದಾರರನ್ನು ಹೊಂದಿತ್ತು. ಇದು ತೀವ್ರ ನಷ್ಟವನ್ನು ಅನುಭವಿಸಿತು. ಹೀಗಾಗಿ, ಅದರ ಹಿಡುವಳಿಗಳನ್ನು 2011ರಲ್ಲಿ ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ (YIL)ಗೆ ವರ್ಗಾಯಿಸಲಾಯಿತು. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅದರ ನಿರ್ದೇಶಕರ ಮಂಡಳಿಯಲ್ಲಿದ್ದರು. ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ ಅನ್ನು ಯಂಗ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸ್ವಾಧೀನಪಡಿಸಿಕೊಂಡಾಗ ರಾಹುಲ್ ಗಾಂಧಿ ಮತ್ತು ಅವರ ತಾಯಿ ಸೋನಿಯಾ ಗಾಂಧಿ ಅವರು ವಂಚನೆಯಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿತ್ತು.
2012ರಲ್ಲಿ ಬಿಜೆಪಿ ನಾಯಕ ಮತ್ತು ವಕೀಲ ಸುಬ್ರಮಣಿಯನ್ ಸ್ವಾಮಿ ಅವರು ಯಂಗ್ ಇಂಡಿಯನ್ ಲಿಮಿಟೆಡ್ (ವೈಐಎಲ್) ನಿಂದ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ ಅನ್ನು ಸ್ವಾಧೀನಪಡಿಸಿಕೊಳ್ಳುವಲ್ಲಿ ಕೆಲವು ಕಾಂಗ್ರೆಸ್ ನಾಯಕರು ವಂಚನೆ ಮತ್ತು ನಂಬಿಕೆಯ ಉಲ್ಲಂಘನೆಯಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿ ವಿಚಾರಣಾ ನ್ಯಾಯಾಲಯದ ಮುಂದೆ ದೂರು ಸಲ್ಲಿಸಿದರು. ವೈಐಎಲ್ ನ್ಯಾಷನಲ್ ಹೆರಾಲ್ಡ್ನ ಆಸ್ತಿಯನ್ನು ‘ದುರುದ್ದೇಶಪೂರಿತ’ ರೀತಿಯಲ್ಲಿ ಸ್ವಾಧೀನಪಡಿಸಿಕೊಂಡಿದೆ ಎಂದು ಅವರು ಆರೋಪಿಸಿದ್ದರು.
ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಸ್ವಾಧೀನಪಡಿಸಿಕೊಳ್ಳುವ ಸಲುವಾಗಿ ಗಾಂಧಿ ಕುಟುಂಬದವರು ವಂಚನೆ ಮತ್ತು ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಬಿಜೆಪಿ ಸಂಸದ ಸುಬ್ರಮಣ್ಯನ್ ಸ್ವಾಮಿ ತಮ್ಮ ಅರ್ಜಿಯಲ್ಲಿ ಆರೋಪಿಸಿದ್ದರು. ಪತ್ರಿಕೆಯ ಹಿಂದಿನ ಪ್ರಕಾಶಕರಾದ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (ಎಜೆಎಲ್) ಅನ್ನು ಯಂಗ್ ಇಂಡಿಯನ್ (ವೈಐ) ಎಂಬ ಸಂಸ್ಥೆಯ ಮೂಲಕ ಖರೀದಿಸುವ ಮೂಲಕ ನ್ಯಾಷನಲ್ ಹೆರಾಲ್ಡ್ ಒಡೆತನದ ಆಸ್ತಿಯನ್ನು ಗಾಂಧಿಗಳು ಸ್ವಾಧೀನಪಡಿಸಿಕೊಂಡಿದ್ದಾರೆ ಎಂದು ಅವರು ಆರೋಪಿಸಿದ್ದರು.
ಕಾಂಗ್ರೆಸ್‌ಗೆ ಎಜೆಎಲ್ ನೀಡಬೇಕಿದ್ದ 90.25 ಕೋಟಿ ಹಣವನ್ನು ವಸೂಲಿ ಮಾಡುವ ಹಕ್ಕನ್ನು ಪಡೆಯಲು ವೈಐ ಮೂಲಕ 50 ಲಕ್ಷ ರೂ. ಪಾವತಿಸಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಇತರರು ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಅವರು ಆರೋಪಿಸಿದ್ದರು.
ಇದನ್ನೂ ಓದಿ: National Herald Case: ಏನಿದು ನ್ಯಾಷನಲ್ ಹೆರಾಲ್ಡ್ ಕೇಸ್?; ಸೋನಿಯಾ ಗಾಂಧಿಗೂ ಇದಕ್ಕೂ ಏನು ಸಂಬಂಧ?
ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಪ್ರಕಾಶಕರಾದ ಎಜೆಎಲ್‌ಗೆ 90 ಕೋಟಿ ರೂ. ಸಾಲ ನೀಡಿರುವುದಾಗಿ ಕಾಂಗ್ರೆಸ್ ಹೇಳುತ್ತಿದೆ. ಅದನ್ನು ಸರಿದೂಗಿಸಲು ಎಜೆಎಲ್ ತನ್ನ ಸಾಲವನ್ನು ಈಕ್ವಿಟಿಯಾಗಿ ಪರಿವರ್ತಿಸಿ ಅದನ್ನು ಗಾಂಧಿಯವರ ಒಡೆತನದ ಯಂಗ್ ಇಂಡಿಯನ್‌ಗೆ ಮಾರಾಟ ಮಾಡಿದೆ. ಆದರೆ, ಇಡಿಯಿಂದ ಪ್ರಶ್ನಿಸಲ್ಪಟ್ಟ ಯಾವುದೇ ಕಾಂಗ್ರೆಸ್ ನಾಯಕರೂ ಇದಕ್ಕೆ ಸಾಕ್ಷ್ಯವನ್ನು ನೀಡಲು ಸಾಧ್ಯವಾಗಿಲ್ಲ.
ಜವಾಹರಲಾಲ್ ನೆಹರು ಅವರು 1938ರಲ್ಲಿ ಆರಂಭಿಸಿದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯು 90 ಕೋಟಿ ರೂ.ಗೂ ಅಧಿಕ ಸಾಲದೊಂದಿಗೆ ಮುಚ್ಚಲ್ಪಟ್ಟಿತು. ಅವನತಿ ಹಂತದಲ್ಲಿದ್ದ ಆ ಪತ್ರಿಕೆಯನ್ನು ಉಳಿಸಲು ಆಗಿನ ಆಡಳಿತ ಪಕ್ಷ ಕಾಂಗ್ರೆಸ್ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (AJL)ಗೆ 90 ಕೋಟಿ ರೂಪಾಯಿ ಬಡ್ಡಿ ರಹಿತ ಸಾಲವನ್ನು ನೀಡಿತು. ಆದರೂ ಆ ಪತ್ರಿಕೆಯನ್ನು ಮರಳಿ ಮಾರುಕಟ್ಟೆಗೆ ತರುವ ಪ್ರಯತ್ನ ವಿಫಲವಾಯಿತು. ಹಾಗೇ, ಆ ಸಾಲವನ್ನು ಮರುಪಾವತಿಸಲು ಸಾಧ್ಯವಾಗಲಿಲ್ಲ.
ಯಂಗ್ ಇಂಡಿಯಾ ಲಿಮಿಟೆಡ್ (YIL) ಅನ್ನು ನವೆಂಬರ್‌ನಲ್ಲಿ ಸ್ಥಾಪಿಸಲಾಯಿತು. ಇದರಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ 76%ರಷ್ಟು ಬಹುಪಾಲು ಪಾಲನ್ನು ಹೊಂದಿದ್ದರು. ಮೋತಿಲಾಲ್ ವೋರಾ 24% ಮತ್ತು ಆಸ್ಕರ್ ಫೆರ್ನಾಂಡಿಸ್ 12% ಕಂಪನಿಯ ಷೇರುಗಳನ್ನು ಹೊಂದಿದ್ದರು. ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್‌ಗೆ ಮೂಲತಃ ಹಣವನ್ನು ಸಾಲವಾಗಿ ನೀಡಿದ ಕಾಂಗ್ರೆಸ್ ಯಂಗ್ ಇಂಡಿಯಾ ಲಿಮಿಟೆಡ್‌ಗೆ ಸಾಲವನ್ನು ನಿಗದಿಪಡಿಸಿತು. ಇದರರ್ಥ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (AJL) ಯಂಗ್ ಇಂಡಿಯಾ ಲಿಮಿಟೆಡ್‌ಗೆ 90 ಕೋಟಿ ರೂ.ಗಳನ್ನು ಮರುಪಾವತಿಸಬೇಕಾಗಿತ್ತು.
AJL ಸಾಲವನ್ನು ಮರುಪಾವತಿ ಮಾಡುವ ಸ್ಥಿತಿಯಲ್ಲಿಲ್ಲದ ಕಾರಣ, ಕಂಪನಿಯು ತನ್ನ ಷೇರುಗಳನ್ನು ಗಾಂಧಿ ಒಡೆತನದ ಯಂಗ್ ಇಂಡಿಯಾ ಲಿಮಿಟೆಡ್‌ಗೆ ವರ್ಗಾಯಿಸಿತು. ಇದಕ್ಕಾಗಿ ಅವರು 50 ಲಕ್ಷ ರೂ. ಕಂಪನಿಯು 2,000 ಕೋಟಿ ರೂಪಾಯಿ ಮೌಲ್ಯದ ಸ್ಥಿರಾಸ್ತಿ ಆಸ್ತಿಯನ್ನು ಹೊಂದಿದೆ ಎಂದು ಪರಿಗಣಿಸಿ ಕೇವಲ 50 ಲಕ್ಷ ರೂ.ಗಳನ್ನು ಪಾವತಿಸಿ ಸಾರ್ವಜನಿಕವಾಗಿ ಕಂಪನಿಯನ್ನು ಸ್ವಾಧೀನಪಡಿಸಿಕೊಂಡ ಆರೋಪವನ್ನು ಸೋನಿಯಾ ಮತ್ತು ರಾಹುಲ್ ಗಾಂಧಿ ಮೇಲೆ ಹೊರಿಸಲಾಗಿದೆ.