ಬೆಂಗಳೂರು: ರಾಜ್ಯಸಭಾ ಚುನಾವಣೆ ಘೋಷಣೆ ಬೆನ್ನಲ್ಲೇ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ನಾಳೆಯಿಂದ ಎರಡು ದಿನ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಉಡುಪಿ ಶ್ರೀಕೃಷ್ಣ ಮಠ, ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆಯಲಿದ್ದಾರೆ. ಭಾನುವಾರ ಬೆಂಗಳೂರಿನಲ್ಲಿ 2 ಕಾರ್ಯಕ್ರಮಗಳಲ್ಲಿ ಸಚಿವೆ ನಿರ್ಮಲಾ ಸೀತಾರಾಮನ್ ಭಾಗಿಯಾಗಲಿದ್ದಾರೆ. ಜೂನ್ ತಿಂಗಳಿನಲ್ಲಿ ನಿರ್ಮಲಾ ರಾಜ್ಯಸಭಾ ಸದಸ್ಯತ್ವದ ಅವಧಿ ಅಂತ್ಯಗೊಳ್ಳಲಿದ್ದಾರೆ. ಇನ್ನು ಮತ್ತೊಂದು ಬಾರಿಗೆ ರಾಜ್ಯಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ನಿರ್ಮಲಾ ಸೀತಾರಾಮನ್ ಆಯ್ಕೆ ಆಗುವ ಸಾಧ್ಯತೆ ಇದೆ.
ಸಚಿವೆ ನಿರ್ಮಲಾ ಸೀತಾರಾಮನ್ ಮೇ 13ರ ರಾತ್ರಿ ಉಡುಪಿಗೆ ಆಗಮಿಸಿ ವಾಸ್ತವ್ಯ ಹೂಡಲಿದ್ದಾರೆ. ಮೇ 14ರಂದು ಬೆಳಗ್ಗೆ 6 ಗಂಟೆಗೆ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದರ್ಶನ ಪಡೆಯಲಿದ್ದಾರೆ. ಬಳಿಕ 9.15ಕ್ಕೆ ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ಮಧ್ಯಾಹ್ನ 2.30ಕ್ಕೆ ಕುಕ್ಕಿಕಟ್ಟಿ ಶ್ರೀಕೃಷ್ಣ ಬಾಲನಿಕೇತನದಲ್ಲಿ ವಿಸ್ತರಿಸಿ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಸಂಜೆ 4 ಗಂಟೆಗೆ ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣದಲ್ಲಿ ಟ್ಯಾಪ್ಮಿಯ 36ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಎಲ್ಲಾ ಕಾರ್ಯಕ್ರಮಗಳು ಮುಗಿದ ಬಳಿಕ ಮಂಗಳೂರಿಗೆ ತೆರಳಲಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ