ನಾಳೆ ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್​ ಅಂತ್ಯಕ್ರಿಯೆಯಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಭಾಗಿ ಸಾಧ್ಯತೆ

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಇಂದು ಬೆಳಗ್ಗೆ ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಅವರ ಅಂತ್ಯಕ್ರಿಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಪಾಲ್ಗೊಳ್ಳುವ ಸಾಧ್ಯತೆ ಇದೆ. ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ಮತ್ತು ಇತರ ನಾಲ್ವರು ಪ್ರಯಾಣಿಸುತ್ತಿದ್ದ ವಿಮಾನ ಮುಂಬೈನಿಂದ ಟೇಕಾಫ್ ಆದ ಸ್ವಲ್ಪ ಸಮಯದ ನಂತರ ಈ ವಿಮಾನ ಅಪಘಾತ ಸಂಭವಿಸಿತ್ತು.

ನಾಳೆ ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್​ ಅಂತ್ಯಕ್ರಿಯೆಯಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಭಾಗಿ ಸಾಧ್ಯತೆ
Ajit Pawar With Pm Modi

Updated on: Jan 28, 2026 | 8:24 PM

ಮುಂಬೈ, ಜನವರಿ 28: ಇಂದು ಬೆಳಗ್ಗೆ ಬಾರಾಮತಿ ಬಳಿಯ ವಿಮಾನ ಅಪಘಾತದಲ್ಲಿ ಮೃತಪಟ್ಟ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ (Ajit Pawar) ಅವರ ಅಂತ್ಯಕ್ರಿಯೆ ನಾಳೆ (ಗುರುವಾರ) ಪುಣೆ ಜಿಲ್ಲೆಯ ಬಾರಾಮತಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ. ಬಾರಾಮತಿಯ ವಿದ್ಯಾ ಪ್ರತಿಷ್ಠಾನ ಮೈದಾನದಲ್ಲಿ ನಾಳೆ ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಅಂತ್ಯಕ್ರಿಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಪಾಲ್ಗೊಳ್ಳುವ ನಿರೀಕ್ಷೆಯಿದೆ.

ರಾಜಕೀಯ ಭಿನ್ನಾಭಿಪ್ರಾಯಗಳನ್ನು ಮೀರಿ ಎಲ್ಲ ಪಕ್ಷದ ನಾಯಕರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (ಎನ್​ಸಿಪಿ) ಹೇಳಿದೆ. ಡಿಸಿಎಂ ಅಜಿತ್ ಪವಾರ್ ಅವರ ಪಾರ್ಥಿವ ಶರೀರವನ್ನು ನಾಳೆಯವರೆಗೂ ಬಾರಾಮತಿಯಲ್ಲಿರುವ ವಿದ್ಯಾ ಪ್ರತಿಷ್ಠಾನ ಮೈದಾನದಲ್ಲಿ ಇರಿಸಲಾಗುವುದು. ಅಲ್ಲಿ ಜನರು ಮೃತ ನಾಯಕನಿಗೆ ಅಂತಿಮ ನಮನ ಸಲ್ಲಿಸಲು ಅವಕಾಶ ನೀಡಲಾಗುತ್ತದೆ.

ಇದನ್ನೂ ಓದಿ: ಅಜಿತ್ ಪವಾರ್ ಪಕ್ಷದ ಚಿಹ್ನೆಯಾದ ಗಡಿಯಾರವೇ ಅವರ ಸಾವಿಗೆ ಸಾಕ್ಷಿಯಾಯ್ತು!

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದು ಸಾರ್ವಜನಿಕ ರಜೆ ಘೋಷಿಸಿದ್ದು, 3 ದಿನಗಳ ಕಾಲ ಶೋಕಾಚರಣೆ ಘೋಷಿಸಿದೆ. ಅಜಿತ್ ಪವಾರ್ ಮತ್ತು ಇತರ ನಾಲ್ವರು ಮುಂಬೈನಿಂದ ಟೇಕಾಫ್ ಆದ ಸ್ವಲ್ಪ ಸಮಯದ ನಂತರ ಬೆಳಿಗ್ಗೆ ವಿಮಾನ ಅಪಘಾತ ಸಂಭವಿಸಿತ್ತು.

ಅಜಿತ್ ಪವಾರ್ ಅವರು ಪತ್ನಿ ಸುನೇತ್ರಾ, ರಾಜ್ಯಸಭಾ ಸದಸ್ಯೆ ಮತ್ತು ಇಬ್ಬರು ಪುತ್ರರಾದ ಪಾರ್ಥ್ ಮತ್ತು ಜೇ ಅವರನ್ನು ಅಗಲಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ