ಪ್ರಧಾನಿ ನರೇಂದ್ರ ಮೋದಿಯವರು ಇಂದು ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿ ಹಲವು ಕೇಂದ್ರ ಸಚಿವರೊಂದಿಗೆ ತಮ್ಮ ನಿವಾಸದಲ್ಲಿ ಸಭೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿದೆ. ಈ ತಿಂಗಳ ಆರಂಭದಿಂದಲೂ ಪ್ರಧಾನಿ ಮೋದಿಯವರು ಕೇಂದ್ರ ಸಚಿವರೊಂದಿಗೆ ಸಭೆ ನಡೆಸುತ್ತಲೇ ಇದ್ದಾರೆ. ಎಲ್ಲರೊಂದಿಗೂ ಒಂದೇ ಬಾರಿ ನಡೆಸದೆ, ನಾಲ್ಕೈದು ಸಚಿವರಂತೆ ಚರ್ಚೆ ನಡೆಸುತ್ತಿದ್ದಾರೆ. ಇದುವರೆಗೂ ಇಂಥ ಐದು ಸಭೆಗಳು ನಡೆದಿವೆ.
ಪ್ರಧಾನಿ ನರೇಂದ್ರ ಮೋದಿಯವರು ಶೀಘ್ರದಲ್ಲೇ ಅಂದರೆ ಈ ತಿಂಗಳ ಕೊನೆ ಅಥವಾ ಜುಲೈ ಮೊದಲ ವಾರದಲ್ಲಿ ಸಂಪುಟ ವಿಸ್ತರಣೆ ಮಾಡಲಿದ್ದಾರೆ. ಈ ನಿಟ್ಟಿನಲ್ಲಿ ಎಲ್ಲ ಇಲಾಖೆಗಳ ಕಾರ್ಯವೈಖರಿಯನ್ನೂ ಖುದ್ದಾಗಿ ಪರಿಶೀಲಿಸುತ್ತಿದ್ದಾರೆ. ಆಯಾ ಸಚಿವರೊಟ್ಟಿಗೆ ಸಮಾಲೋಚನೆ ನಡೆಸುತ್ತಿದ್ದಾರೆ. ಕ್ಯಾಬಿನೆಟ್ ವಿಸ್ತರಣೆ ಬಳಿಕ ಈಗಿನ ಕೆಲವರು ಸಚಿವರನ್ನು ಕೈಬಿಡುವ ಸಾಧ್ಯತೆಯೂ ಇದೆ ಎಂದು ಹೇಳಲಾಗಿದ್ದು, ಜ್ಯೋತಿರಾದಿತ್ಯ ಸಿಂಧಿಯಾ ಸೇರಿ ಹಲವು ಮೋದಿ ಸಂಪುಟ ಸೇರಲಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಸಿಕ್ಕಿದೆ.
ಹಾಗೇ, ಜೂನ್ 24ರಂದು ಪ್ರಧಾನಿ ನರೇಂದ್ರ ಮೋದಿ ದೆಹಲಿಯಲ್ಲಿ ಜಮ್ಮು-ಕಾಶ್ಮೀರದ ಪ್ರಮುಖ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಉನ್ನತಮಟ್ಟದ ಸಭೆ ನಡೆಸಲಿದ್ದು, ಆ ಸಂಬಂಧ ಕೂಡ ಇಂದು ಅಮಿತ್ ಶಾ, ರಾಜನಾಥ್ ಸಿಂಗ್ ಜತೆ ಚರ್ಚೆ ನಡೆಸಿರಬಹುದು ಎನ್ನಲಾಗಿದೆ. ಜಮ್ಮುಕಾಶ್ಮೀರದಲ್ಲಿ ಮುಂದಿನ ವರ್ಷ ನಡೆಯಲಿರುವ ಚುನಾವಣೆ ಸಂಬಂಧ ಭೂನಕ್ಷೆ, ಜನಸಂಖ್ಯೆ ಅಧ್ಯಯನ ಇತ್ಯಾದಿ ವಿಚಾರಗಳ ಬಗ್ಗೆ ಚರ್ಚಿಸಲು ಈ ಉನ್ನತ ಮಟ್ಟದ ಸಭೆ ಕರೆಯಲಾಗಿದೆ. ಇಂದಿನ ಸಭೆಯಲ್ಲಿ ಅಮಿತ್ ಶಾ, ರಾಜನಾಥ್ ಸಿಂಗ್ ಜತೆ ನಿರ್ಮಲಾ ಸೀತಾರಾಮನ್, ಪಿಯೂಷ್ ಗೋಯೆಲ್ ಕೂಡ ಭಾಗವಹಿಸಿದ್ದರು.