ಪ್ರಧಾನಿ ಮೋದಿಗೆ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಫೋನ್; ಉಕ್ರೇನ್ ಸಂಘರ್ಷ ಕೊನೆಗೊಳಿಸುವ ಬಗ್ಗೆ ಚರ್ಚೆ
ಫ್ರಾನ್ಸ್‌ನ ಅಧ್ಯಕ್ಷ ಇಮ್ಯಾನ್ಯುಯಲ್ ಮ್ಯಾಕ್ರನ್ ಅವರೊಂದಿಗೆ ಪ್ರಧಾನಿ ಮೋದಿ ದೂರವಾಣಿಯಲ್ಲಿ ಮಾತನಾಡಿದ್ದಾರೆ. ಈ ವೇಳೆ ಉಕ್ರೇನ್ ಸಂಘರ್ಷವನ್ನು ಕೊನೆಗೊಳಿಸುವ ಮಾರ್ಗಗಳ ಬಗ್ಗೆ ಚರ್ಚಿಸಿದ್ದಾರೆ. ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ಫೆಬ್ರವರಿ 2022ರಲ್ಲಿ ಭುಗಿಲೆದ್ದ ರಷ್ಯಾ-ಉಕ್ರೇನ್‌ನ ಯುದ್ಧವನ್ನು ಕೊನೆಗೊಳಿಸುವ ಮಾರ್ಗಗಳ ಬಗ್ಗೆ ಚರ್ಚಿಸಲಾಯಿತು ಎಂದು ಹೇಳಿದ್ದಾರೆ.

ನವದೆಹಲಿ, ಸೆಪ್ಟೆಂಬರ್ 6: ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು (ಶನಿವಾರ) ಫ್ರೆಂಚ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು. ವಿವಿಧ ವಲಯಗಳಲ್ಲಿ ಎರಡೂ ದೇಶಗಳು ತಮ್ಮ ನಡುವಿನ ದ್ವಿಪಕ್ಷೀಯ ಸಹಕಾರವನ್ನು ಹೆಚ್ಚಿಸುವಲ್ಲಿ ಮಾಡಿದ ಪ್ರಗತಿಯ ಬಗ್ಗೆ ಅವರು ಚರ್ಚಿಸಿದರು. ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ಫೆಬ್ರವರಿ 2022ರಲ್ಲಿ ಭುಗಿಲೆದ್ದ ಉಕ್ರೇನ್‌ನಲ್ಲಿನ ಯುದ್ಧವನ್ನು ಕೊನೆಗೊಳಿಸುವ ಮಾರ್ಗಗಳ ಬಗ್ಗೆ ಉಭಯ ನಾಯಕರು ಚರ್ಚಿಸಿದ್ದಾಗಿ ತಿಳಿಸಿದ್ದಾರೆ.
“ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್‌ರೊಂದಿಗೆ ಉತ್ತಮ ಸಂಭಾಷಣೆ ನಡೆಸಿದೆ. ವಿವಿಧ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರದಲ್ಲಿನ ಪ್ರಗತಿಯನ್ನು ನಾವು ಪರಿಶೀಲಿಸಿದ್ದೇವೆ. ಕೆಲವು ವಿಷಯಗಳ ಬಗ್ಗೆ ಸಕಾರಾತ್ಮಕವಾಗಿ ನಿರ್ಣಯ ತೆಗೆದುಕೊಂಡಿದ್ದೇವೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
“ಉಕ್ರೇನ್‌ನಲ್ಲಿನ ಸಂಘರ್ಷವನ್ನು ಶೀಘ್ರವಾಗಿ ಕೊನೆಗೊಳಿಸುವ ಪ್ರಯತ್ನಗಳು ಸೇರಿದಂತೆ ಅಂತಾರಾಷ್ಟ್ರೀಯ ಮತ್ತು ಪ್ರಾದೇಶಿಕ ವಿಷಯಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡಿದ್ದೇವೆ. ಭಾರತ-ಫ್ರಾನ್ಸ್ ಕಾರ್ಯತಂತ್ರದ ಪಾಲುದಾರಿಕೆಯು ಜಾಗತಿಕ ಶಾಂತಿ ಮತ್ತು ಸ್ಥಿರತೆಯನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.” ಎಂದು ಮೋದಿ ಹೇಳಿದ್ದಾರೆ.
Had a very good conversation with President Macron. We reviewed and positively assessed the progress in bilateral cooperation in various areas. Exchanged views on international and regional issues, including efforts for bringing an early end to the conflict in Ukraine. The…
— Narendra Modi (@narendramodi) September 6, 2025
ಇದನ್ನೂ ಓದಿ: ವಿಮಾನ ನಿಲ್ದಾಣಕ್ಕೆ ಬಂದು ಪ್ರಧಾನಿ ಮೋದಿಯನ್ನು ತಬ್ಬಿ ಬೀಳ್ಕೊಟ್ಟ ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್
ಕಳೆದ ಒಂದು ತಿಂಗಳಲ್ಲಿ ಈ ಇಬ್ಬರು ನಾಯಕರು ನಡೆಸಿದ ಎರಡನೇ ದೂರವಾಣಿ ಸಂಭಾಷಣೆ ಇದು. ಆಗಸ್ಟ್ 21ರಂದು, ಮ್ಯಾಕ್ರನ್ ಪ್ರಧಾನಿ ಮೋದಿ ಅವರಿಗೆ ಕರೆ ಮಾಡಿ ಉಕ್ರೇನ್‌ನಲ್ಲಿನ ಯುದ್ಧ ಮತ್ತು ಗಾಜಾದಲ್ಲಿನ ಇಸ್ರೇಲ್-ಹಮಾಸ್ ಸಂಘರ್ಷಕ್ಕೆ ಶಾಂತಿಯುತ ಪರಿಹಾರವನ್ನು ಕಂಡುಕೊಳ್ಳಲು ನಡೆಯುತ್ತಿರುವ ಪ್ರಯತ್ನಗಳ ಕುರಿತು ಚರ್ಚಿಸಿದ್ದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




