AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುವೈತ್ ದೊರೆ ಜೊತೆ ಪ್ರಧಾನಿ ಮೋದಿ ಮಾತುಕತೆ; ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಚರ್ಚೆ

ಪಶ್ಚಿಮ ಏಷ್ಯಾದ ಸಂಘರ್ಷದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕುವೈತ್ ದೇಶದ ಅಮೀರ್ (ರಾಜ) ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಾಬರ್ ಅಲ್-ಸಬಾಹ್ ಅವರೊಂದಿಗೆ ದೂರವಾಣಿ ಕರೆ ಮೂಲಕ ಮಾತುಕತೆ ನಡೆಸಿದ್ದಾರೆ. ಪ್ರಧಾನಿ ಮೋದಿ ಮತ್ತು ಕುವೈತ್ ಅಮೀರ್ ಇಬ್ಬರೂ ಪಶ್ಚಿಮ ಏಷ್ಯಾದಲ್ಲಿ ಉಲ್ಬಣಗೊಳ್ಳುತ್ತಿರುವ ಭದ್ರತಾ ಪರಿಸ್ಥಿತಿಯ ಕುರಿತು ತಮ್ಮ ತಮ್ಮ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ಈ ಕುರಿತು ವಿವರವಾದ ಮಾಹಿತಿ ಇಲ್ಲಿದೆ.

ಕುವೈತ್ ದೊರೆ ಜೊತೆ ಪ್ರಧಾನಿ ಮೋದಿ ಮಾತುಕತೆ; ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಚರ್ಚೆ
Pm Modi Speaks To Kuwait AmirImage Credit source: PTI
ಸುಷ್ಮಾ ಚಕ್ರೆ
|

Updated on: Jun 09, 2026 | 10:38 PM

Share

ನವದೆಹಲಿ, ಜೂನ್ 9: ಪ್ರಧಾನಿ ನರೇಂದ್ರ ಮೋದಿ (PM Modi) ಇಂದು (ಜೂನ್ 9) ಕುವೈತ್ ರಾಜ್ಯದ ಅಮೀರ್ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಾಬರ್ ಅಲ್ ಸಬಾ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು. ಈ ಸಂದರ್ಭದಲ್ಲಿ ಇಬ್ಬರೂ ನಾಯಕರು ಪಶ್ಚಿಮ ಏಷ್ಯಾದಲ್ಲಿ ಬೆಳೆಯುತ್ತಿರುವ ಭದ್ರತಾ ಪರಿಸ್ಥಿತಿಯ ಕುರಿತು ಚರ್ಚಿಸಿದರು ಎಂದು ವಿದೇಶಾಂಗ ಸಚಿವಾಲಯ (MEA) ತಿಳಿಸಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಮಧ್ಯೆ ಜೂನ್ 3ರಂದು ಕುವೈತ್ ವಿಮಾನ ನಿಲ್ದಾಣದ ಮೇಲೆ ಇರಾನಿನ ಡ್ರೋನ್ ದಾಳಿಯಲ್ಲಿ ಭಾರತೀಯ ಪ್ರಜೆಯೊಬ್ಬರು ಸಾವನ್ನಪ್ಪಿದ ಕೆಲವು ದಿನಗಳ ನಂತರ ಈ ಇಬ್ಬರು ನಾಯಕರ ನಡುವಿನ ಮಾತುಕತೆ ನಡೆದಿದೆ.

ಕುವೈತ್‌ನ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಅಖಂಡತೆಯ ಮೇಲಿನ ದಾಳಿಗಳನ್ನು ಪ್ರಧಾನಿ ಮೋದಿ ಅವರು ಭಾರತದ ಪರವಾಗಿ ತೀವ್ರವಾಗಿ ಖಂಡಿಸಿದರು. ಇತ್ತೀಚೆಗೆ ಕುವೈತ್‌ನ ವಾಯುಪ್ರದೇಶ ಮತ್ತು ಪ್ರಮುಖ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ನಡೆದ ದಾಳಿಗಳು ಅಂತಾರಾಷ್ಟ್ರೀಯ ಕಾನೂನು ಮತ್ತು ವಿಶ್ವಸಂಸ್ಥೆಯ ನಿಯಮಾವಳಿಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಮೋದಿ ಪ್ರತಿಪಾದಿಸಿದರು. ಈ ಕಷ್ಟದ ಸಮಯದಲ್ಲಿ ಭಾರತವು ಕುವೈತ್‌ನ ಭದ್ರತೆ ಮತ್ತು ಸ್ಥಿರತೆಯ ಪರವಾಗಿ ದೃಢವಾಗಿ ನಿಲ್ಲುತ್ತದೆ ಎಂದು ಅವರು ಭರವಸೆ ನೀಡಿದರು.

ಇದನ್ನೂ ಓದಿ: ಕುವೈತ್ ವಿಮಾನ ನಿಲ್ದಾಣದ ಮೇಲೆ ಇರಾನ್ ಡ್ರೋನ್ ದಾಳಿ; ಭಾರತೀಯ ಪ್ರಜೆಯ ದುರಂತ ಸಾವು

ಕುವೈತ್ ಪ್ರದೇಶದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಬಗ್ಗೆ ಪ್ರಧಾನಿ ತೀವ್ರ ಕಳವಳ ವ್ಯಕ್ತಪಡಿಸಿದರು. ಪರಿಸ್ಥಿತಿಯನ್ನು ತಿಳಿಗೊಳಿಸಲು ಎರಡೂ ಕಡೆಯಿಂದ ಶಾಂತಿ ಮಾತುಕತೆಯ ಅಗತ್ಯವಿದೆ ಎಂದು ಅವರು ಒತ್ತಿಹೇಳಿದರು. ಶಾಂತಿ ಮತ್ತು ಸ್ಥಿರತೆಯನ್ನು ಆದಷ್ಟು ಬೇಗ ಮರುಸ್ಥಾಪಿಸಲು “ಮಾತುಕತೆ ಮತ್ತು ರಾಜತಾಂತ್ರಿಕತೆ” ಏಕೈಕ ಮಾರ್ಗವಾಗಿದೆ ಎಂದು ಭಾರತದ ನಿಲುವನ್ನು ಪುನರುಚ್ಚರಿಸಿದರು.

ಕುವೈತ್‌ನಲ್ಲಿ ಇತ್ತೀಚೆಗೆ ನಡೆದ ವಾಯುದಾಳಿಗಳಲ್ಲಿ (ಕುವೈತ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲಿನ ದಾಳಿ ಸೇರಿದಂತೆ) ಭಾರತೀಯ ನಾಗರಿಕರು ಪ್ರಾಣ ಕಳೆದುಕೊಂಡಿರುವ ಹಿನ್ನೆಲೆಯಲ್ಲಿ, ಅಲ್ಲಿ ವಾಸಿಸುತ್ತಿರುವ ಲಕ್ಷಾಂತರ ಭಾರತೀಯರ ಸುರಕ್ಷತೆಯು ಭಾರತ ಸರ್ಕಾರಕ್ಕೆ ಪ್ರಮುಖ ಕಾಳಜಿಯಾಗಿದೆ. ಕುವೈತ್‌ನಲ್ಲಿರುವ ಬೃಹತ್ ಭಾರತೀಯ ಸಮುದಾಯದ ಯೋಗಕ್ಷೇಮ ಮತ್ತು ಸುರಕ್ಷತೆಗೆ ವೈಯಕ್ತಿಕವಾಗಿ ಗಮನ ಹರಿಸುತ್ತಿರುವುದಕ್ಕಾಗಿ ಕುವೈತ್ ಅಮೀರ್ ಅವರಿಗೆ ಪ್ರಧಾನಿ ಮೋದಿ ಧನ್ಯವಾದಗಳನ್ನು ಅರ್ಪಿಸಿದರು.

ಇದನ್ನೂ ಓದಿ: ಕುವೈತ್, ಬಹ್ರೇನ್‌ನಲ್ಲಿರುವ ಅಮೆರಿಕ ನೆಲೆಗಳ ಮೇಲೆ ಇರಾನ್ ದಾಳಿ

ಇಸ್ರೇಲ್ ಮತ್ತು ಇರಾನ್ ನಡುವಿನ ಉಲ್ಬಣಗೊಂಡಿರುವ ಸಂಘರ್ಷದ ಹಿನ್ನೆಲೆಯಲ್ಲಿ ಇತ್ತೀಚೆಗೆ ಗಲ್ಫ್ ಪ್ರದೇಶದ ಕುವೈತ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಪ್ರಮುಖ ಜಲ ಹಾಗೂ ವಿದ್ಯುತ್ ಸ್ಥಾವರಗಳ ಮೇಲೆ ಇರಾನ್ ಪಡೆಗಳಿಂದ ದಾಳಿಗಳು ನಡೆದಿದ್ದವು. ಈ ದಾಳಿಗಳಲ್ಲಿ ಕುವೈತ್‌ನಲ್ಲಿ ಕೆಲಸ ಮಾಡುತ್ತಿದ್ದ ಭಾರತೀಯ ನಾಗರಿಕರು ಕೂಡ ಸಾವನ್ನಪ್ಪಿದ್ದರು. ಈ ಹಿನ್ನೆಲೆಯಲ್ಲಿ ಭಾರತವು ಕುವೈತ್‌ನೊಂದಿಗೆ ರಾಜತಾಂತ್ರಿಕ ಸಂಪರ್ಕವನ್ನು ಮತ್ತಷ್ಟು ತೀವ್ರಗೊಳಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More