ಉಪರಾಷ್ಟ್ರಪತಿ ಜಗದೀಪ್ ಧನಖರ್ ರಾಜೀನಾಮೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಗೀಕಾರ
ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನಖರ್ ನಿನ್ನೆ (ಸೋಮವಾರ) ಸಂಜೆ ನೀಡಿದ್ದ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಗೀಕರಿಸಿದ್ದಾರೆ. ಅನಾರೋಗ್ಯದ ಕಾರಣಗಳನ್ನು ನೀಡಿ ಜಗದೀಪ್ ಧನಖರ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. ಅವರು ತಮ್ಮ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಕಳುಹಿಸಿದ್ದರು. ತಕ್ಷಣದಿಂದ ಜಾರಿಗೆ ಬರುವಂತೆ ತಾವು ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದರು.

ನವದೆಹಲಿ, ಜುಲೈ 22: ಉಪರಾಷ್ಟ್ರಪತಿ ಜಗದೀಪ್ ಧನಖರ್ (Jagdeep Dhankhar) ಸೋಮವಾರ ಸಂಜೆ ನೀಡಿದ್ದ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಇಂದು (ಜುಲೈ 22) ಅಂಗೀಕರಿಸಿದ್ದಾರೆ. ಜಗದೀಪ್ ಧನಖರ್ ಸೋಮವಾರ ಸಂಜೆ ವೈದ್ಯಕೀಯ ಕಾರಣಗಳನ್ನು ಉಲ್ಲೇಖಿಸಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. ಹೃದಯ ಸಂಬಂಧಿ ಕಾಯಿಲೆಗಳ ನಂತರ ಅವರನ್ನು ಈ ವರ್ಷದ ಮಾರ್ಚ್‌ನಲ್ಲಿ 4 ದಿನಗಳ ಕಾಲ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಬರೆದಿರುವ ರಾಜೀನಾಮೆ ಪತ್ರದಲ್ಲಿ ಜಗದೀಪ್ ಧನಖರ್ ಅವರು ಆರೋಗ್ಯಕ್ಕೆ ಆದ್ಯತೆ ನೀಡುವ ಉದ್ದೇಶದಿಂದ ತಕ್ಷಣದಿಂದ ಜಾರಿಗೆ ಬರುವಂತೆ ತಾವು ರಾಜೀನಾಮೆ ನೀಡುತ್ತಿರುವುದಾಗಿ ಜಗದೀಪ್ ಧನಖರ್ ತಿಳಿಸಿದ್ದಾರೆ. “ಆರೋಗ್ಯಕ್ಕೆ ಆದ್ಯತೆ ನೀಡಲು ಮತ್ತು ವೈದ್ಯಕೀಯ ಸಲಹೆಯನ್ನು ಪಾಲಿಸಲು ಸಂವಿಧಾನದ 67(ಎ) ವಿಧಿಯ ಪ್ರಕಾರ ತಕ್ಷಣವೇ ಜಾರಿಗೆ ಬರುವಂತೆ ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ನಾನು ರಾಜೀನಾಮೆ ನೀಡುತ್ತಿದ್ದೇನೆ” ಎಂದು ಅವರು ರಾಷ್ಟ್ರಪತಿಗಳಿಗೆ ಬರೆದ ಪತ್ರದಲ್ಲಿ ತಿಳಿಸಿದ್ದರು.
ಇದನ್ನೂ ಓದಿ: Jagdeep Dhankhar: ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧಂಖರ್ ರಾಜೀನಾಮೆ
ಜಗದೀಪ್ ಧನಖರ್ ಅವರ ರಾಜೀನಾಮೆಗೆ ಪ್ರತಿಕ್ರಿಯಿಸಿದ್ದ ಪ್ರಧಾನಿ ಮೋದಿ, ಉಪರಾಷ್ಟ್ರಪತಿ ಜಗದೀಪ್ ಧನಖರ್ ಸಾರ್ವಜನಿಕ ಸೇವೆಗೆ ತಮ್ಮ ದೀರ್ಘಕಾಲದ ಬದ್ಧತೆಯನ್ನು ಎತ್ತಿ ತೋರಿಸಿದ್ದಾರೆ. ಅವರ ವೃತ್ತಿಜೀವನದುದ್ದಕ್ಕೂ ವಿವಿಧ ಹುದ್ದೆಗಳಲ್ಲಿ ನೀಡಿದ ಕೊಡುಗೆಗಳು ಶ್ಲಾಘನೀಯ. ಅವರಿಗೆ ಉತ್ತಮ ಆರೋಗ್ಯ ಮತ್ತು ಯೋಗಕ್ಷೇಮವನ್ನು ಕೋರುತ್ತೇನೆ ಎಂದು ಹೇಳಿದ್ದರು.
ಇದನ್ನೂ ಓದಿ: ಉಪ ರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನ್ಖರ್ ರಾಜೀನಾಮೆ, ಪ್ರಧಾನಿ ಮೋದಿ ಹೇಳಿದ್ದೇನು?
ಕೇಂದ್ರ ಗೃಹ ಸಚಿವಾಲಯವು ಉಪರಾಷ್ಟ್ರಪತಿ ಜಗದೀಪ್ ಧನಖರ್ ಅವರ ರಾಜೀನಾಮೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಂಗೀಕರಿಸಿರುವ ಗೃಹ ಸಚಿವಾಲಯದ ಅಧಿಸೂಚನೆಯ ಬಗ್ಗೆ ರಾಜ್ಯಸಭೆಗೆ ತಿಳಿಸಿತು. ಇಂದು ಮಧ್ಯಾಹ್ನ 12 ಗಂಟೆಗೆ ಪ್ರಶ್ನೋತ್ತರ ಅವಧಿಯಲ್ಲಿ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದ ಘನಶ್ಯಾಮ್ ತಿವಾರಿ ಅವರು ಸದನಕ್ಕೆ ಅಧಿಸೂಚನೆಯನ್ನು ಓದಿದರು. ಭಾರತದ ಉಪರಾಷ್ಟ್ರಪತಿಗಳು ರಾಜ್ಯಸಭೆಯ ಪದನಿಮಿತ್ತ ಅಧ್ಯಕ್ಷರಾಗಿರುತ್ತಾರೆ. 74 ವರ್ಷದ ಜಗದೀಪ್ ಧಂಖರ್ ಆಗಸ್ಟ್ 2022ರಲ್ಲಿ ಅಧಿಕಾರ ವಹಿಸಿಕೊಂಡರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




