Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ: ಜಾಲನಾದಲ್ಲಿ ಹಿಂಸಾರೂಪ ಪಡೆದ ಮರಾಠಾ ಮೀಸಲಾತಿ ಹೋರಾಟ, 300ಕ್ಕೂ ಹೆಚ್ಚು ಮಂದಿ ವಿರುದ್ಧ ಕೇಸು

ಹಿಂಸಾಚಾರದಲ್ಲಿ ಭಾಗಿಯಾದ ಆರೋಪದ ಮೇಲೆ ಪೊಲೀಸರು 300 ಕ್ಕೂ ಹೆಚ್ಚು ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ಶಾಂತಿಗಾಗಿ ಮನವಿ ಮಾಡಿದ್ದು ಹಿಂಸಾಚಾರದ ಉನ್ನತ ಮಟ್ಟದ ತನಿಖೆಗಾಗಿ ಸಮಿತಿಯನ್ನು ರಚಿಸಲಾಗುವುದು ಎಂದು ಹೇಳಿದ್ದಾರೆ. ಮರಾಠಾ ಸಮುದಾಯಕ್ಕೆ ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರ ಬದ್ಧವಾಗಿದ್ದು, ಯಾರೂ ಹಿಂಸಾಚಾರಕ್ಕೆ ಮುಂದಾಗಬಾರದು ಎಂದು ಮುಖ್ಯಮಂತ್ರಿ ಹೇಳಿದ್ದಾರೆ

ಮಹಾರಾಷ್ಟ್ರ: ಜಾಲನಾದಲ್ಲಿ ಹಿಂಸಾರೂಪ ಪಡೆದ ಮರಾಠಾ ಮೀಸಲಾತಿ ಹೋರಾಟ, 300ಕ್ಕೂ ಹೆಚ್ಚು ಮಂದಿ ವಿರುದ್ಧ ಕೇಸು
ಜಾಲನಾ ಪ್ರತಿಭಟನೆ
Follow us
ರಶ್ಮಿ ಕಲ್ಲಕಟ್ಟ
|

Updated on:Sep 02, 2023 | 4:49 PM

ಮುಂಬೈ ಸೆಪ್ಟೆಂಬರ್ 02: ಮಹಾರಾಷ್ಟ್ರದ (Maharashtra) ಜಾಲನಾದಲ್ಲಿ (Jalna) ಮರಾಠ ಮೀಸಲಾತಿಗಾಗಿ (Maratha Quota ) ನಿನ್ನೆ (ಶುಕ್ರವಾರ) ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ನಂತರ ಪೊಲೀಸರು ಸೇರಿದಂತೆ ಹಲವರಿಗೆ ಗಾಯಗಳಾಗಿವೆ. ಮಂಗಳವಾರದಿಂದ ಮರಾಠ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಒತ್ತಾಯಿಸಿ ಹೋರಾಟಗಾರ ಮನೋಜ್ ಜಾರಂಗೆ ನೇತೃತ್ವದಲ್ಲಿ ಜಾಲನದ ಅಂತರವಾಲಿ ಸಾರಥಿ ಗ್ರಾಮದಲ್ಲಿ ಉಪವಾಸ ಸತ್ಯಾಗ್ರಹ ನಡೆಯುತ್ತಿತ್ತು. ವೈದ್ಯರ ಸಲಹೆ ಮೇರೆಗೆ ಜಾರಂಜ್ ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲು ಪೊಲೀಸರು ಪ್ರಯತ್ನಿಸಿದಾಗ ಘರ್ಷಣೆ ಪ್ರಾರಂಭವಾಯಿತು.

ಪ್ರತಿಭಟನಾಕಾರರು ಕಲ್ಲು ತೂರಾಟ ಆರಂಭಿಸಿದ್ದು, ಹಲವು ಪೊಲೀಸರಿಗೆ ಗಾಯಗಳಾಗಿವೆ. ಕೆಲವರು ರಾಜ್ಯ ಸಾರಿಗೆ ಬಸ್‌ಗಳು ಮತ್ತು ಖಾಸಗಿ ವಾಹನಗಳನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮತ್ತು ಅಶ್ರುವಾಯು ಶೆಲ್‌ಗಳನ್ನು ಬಳಸಬೇಕಾಯಿತು. ಪೊಲೀಸರು ಗಾಳಿಯಲ್ಲಿ ಕೆಲವು ಸುತ್ತು ಗುಂಡು ಹಾರಿಸಿದ್ದಾರೆ ಎಂದು ಗ್ರಾಮಸ್ಥರು ಹೇಳಿದ್ದಾರೆ. ಆದರೆ ಅಧಿಕಾರಿಗಳು ಅದನ್ನು ಖಚಿತಪಡಿಸಲಿಲ್ಲ.

ಹಿಂಸಾಚಾರದಲ್ಲಿ ಭಾಗಿಯಾದ ಆರೋಪದ ಮೇಲೆ ಪೊಲೀಸರು 300 ಕ್ಕೂ ಹೆಚ್ಚು ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ಶಾಂತಿಗಾಗಿ ಮನವಿ ಮಾಡಿದ್ದು ಹಿಂಸಾಚಾರದ ಉನ್ನತ ಮಟ್ಟದ ತನಿಖೆಗಾಗಿ ಸಮಿತಿಯನ್ನು ರಚಿಸಲಾಗುವುದು ಎಂದು ಹೇಳಿದ್ದಾರೆ.

ಮರಾಠಾ ಸಮುದಾಯಕ್ಕೆ ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರ ಬದ್ಧವಾಗಿದ್ದು, ಯಾರೂ ಹಿಂಸಾಚಾರಕ್ಕೆ ಮುಂದಾಗಬಾರದು ಎಂದು ಮುಖ್ಯಮಂತ್ರಿ ಹೇಳಿದ್ದಾರೆ.‘ಸಮುದಾಯಕ್ಕೆ ಮೀಸಲಾತಿ ನೀಡಲು ರಾಜ್ಯ ಸರ್ಕಾರ ಕೆಲವು ಕ್ರಮಗಳನ್ನು ಕೈಗೊಳ್ಳುತ್ತಿದೆ, ದೇವೇಂದ್ರ ಫಡ್ನವೀಸ್ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ರಾಜ್ಯ ಸರ್ಕಾರ ಮರಾಠ ಸಮುದಾಯಕ್ಕೆ ಮೀಸಲಾತಿ ನೀಡಿತ್ತು. ಆದರೆ ಸುಪ್ರೀಂ ಕೋರ್ಟ್ ಅದನ್ನು ರದ್ದುಗೊಳಿಸಿದೆ’ ಎಂದು ಅವರು ಹೇಳಿದರು.

ಇದನ್ನೂ ಓದಿ:  ಮಹಾರಾಷ್ಟ್ರದಲ್ಲಿ ಮರಾಠಾ ಮೀಸಲಾತಿ ಕಿಚ್ಚಿಗೆ ಕರ್ನಾಟಕ ಸಾರಿಗೆ ಬಸ್‌ಗೆ ಬೆಂಕಿ

ರಾಜ್ಯ ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದು, ಸಲಹೆಗಳಿದ್ದರೆ ಸ್ವಾಗತಿಸುತ್ತೇವೆ. ಸಾಮಾನ್ಯ ಜನರಿಗೆ ತೊಂದರೆಯಾಗದಂತೆ ಶಾಂತಿ ಕಾಪಾಡುವಂತೆ ಪ್ರತಿಭಟನಾಕಾರರಲ್ಲಿ ಮನವಿ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಪ್ರತಿಭಟನಾಕಾರರ ಮೇಲೆ ಬಲಪ್ರಯೋಗ ಮಾಡಿರುವುದನ್ನು ಕಾಂಗ್ರೆಸ್ ಮತ್ತು ಶಿವಸೇನಾ (ಯುಬಿಟಿ) ಖಂಡಿಸಿವೆ. ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಮತ್ತು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರು ಶನಿವಾರ ಸಂಜೆ ಹಿಂಸಾಚಾರ ಪೀಡಿತ ಗ್ರಾಮಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೀಡ್‌ನಲ್ಲಿ ‘ಬಂದ್’

ಮರಾಠ ಸಮುದಾಯಕ್ಕೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ನೀಡುವಂತೆ ಆಗ್ರಹಿಸಿ ಜಾಲನಾದಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವವರ ಮೇಲೆ ಪೊಲೀಸ್ ಲಾಠಿ ಪ್ರಹಾರ ಮಾಡಿದ್ದನ್ನು ವಿರೋಧಿಸಿ ಮಹಾರಾಷ್ಟ್ರದ ಬೀಡ್‌ನಲ್ಲಿ ಶನಿವಾರ ‘ಬಂದ್’ ಆಚರಿಸಲಾಯಿತು.

ಶುಕ್ರವಾರ, ಜಾಲನಾದ ಅಂಬಾಡ್ ತಹಸಿಲ್‌ನ ಧುಲೆ-ಸೋಲಾಪುರ ರಸ್ತೆಯಲ್ಲಿರುವ ಅಂತರವಾಲಿ ಸಾರಥಿಯಲ್ಲಿ ಹಿಂಸಾತ್ಮಕ ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮತ್ತು ಅಶ್ರುವಾಯು ಶೆಲ್‌ ಪ್ರಯೋಗಿಸಿದ್ದಾರೆ. ಬೀಡ್‌ನಲ್ಲಿ ಮರಾಠಾ ಕ್ರಾಂತಿ ಮೋರ್ಚಾ ಕರೆ ನೀಡಿದ್ದ ಬಂದ್ ಬಹುತೇಕ ಶಾಂತಿಯುತವಾಗಿತ್ತು. ಆದರೂ ಮಜಲ್‌ಗಾಂವ್‌ನಿಂದ ಕಲ್ಲು ತೂರಾಟದ ಘಟನೆಗಳು ವರದಿಯಾಗಿವೆ. ಆದರೆ ಖಾಸಗಿ ಮತ್ತು ಸರ್ಕಾರಿ ಬಸ್‌ಗಳು ರಸ್ತೆಗಿಳಿದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:46 pm, Sat, 2 September 23