ನವದೆಹಲಿ: ಪಂಜಾಬ್ ಕಾಂಗ್ರೆಸ್ನಲ್ಲಿ ಉಂಟಾದ ರಾಜಕೀಯ ಬಿಕ್ಕಟ್ಟಿನಿಂದ ಕ್ಯಾಪ್ಟನ್ ಅಮರೀಂದರ್ ಸಿಂಗ್ (Amarinder Singh) ಮುಖ್ಯಮಂತ್ರಿ ಪಟ್ಟದಿಂದ ಕೆಳಗಿಳಿಯುವ ಅನಿವಾರ್ಯತೆ ಎದುರಾಗಿತ್ತು. ಪಂಜಾಬ್ ಸರ್ಕಾರದಲ್ಲಿನ ಸಚಿವರಲ್ಲೇ ಭಿನ್ನಾಭಿಪ್ರಾಯಗಳು ಎದ್ದ ಕಾರಣ ಹೈಕಮಾಂಡ್ ಸೂಚನೆಯಂತೆ ಅಮರೀಂದರ್ ಸಿಂಗ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅದಾದ ಬಳಿಕ ದಲಿತ ನಾಯಕ ಚರಣ್ಜಿತ್ ಸಿಂಗ್ ಛನ್ನಿ(Charanjit Singh Channi) ಅವರನ್ನು ಪಂಜಾಬ್ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಹೈಕಮಾಂಡ್ ನೇಮಕ ಮಾಡಿತ್ತು. ಆದರೆ, ಕಾಂಗ್ರೆಸ್ನ ಈ ನಿರ್ಧಾರದಿಂದ ಬೇಸರಗೊಂಡಿರುವ ಅಮರೀಂದರ್ ಸಿಂಗ್ ಬಿಜೆಪಿಗೆ ಸೇರುವ ಸಾಧ್ಯತೆ ಹೆಚ್ಚಾಗಿದೆ.
ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಬಣ ಹಾಗೂ ಅಮರೀಂದರ್ ಸಿಂಗ್ ಬಣದ ನಡುವೆ ನಡೆದ ಮುಸುಕಿನ ಗುದ್ದಾಟದಲ್ಲಿ ಸಿಧು ಬಣವೇ ವಿಜಯ ಸಾಧಿಸಿತ್ತು. ಅಮರೀಂದರ್ ಸಿಂಗ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವಲ್ಲಿ ಯಶಸ್ವಿಯಾಗಿದ್ದ ನವಜೋತ್ ಸಿಂಗ್ ಸಿಧು ತಮ್ಮದೇ ಬಣದ ಚರಣ್ಜಿತ್ ಸಿಂಗ್ ಛನ್ನಿಯನ್ನು ಸಿಎಂ ಪಟ್ಟದಲ್ಲಿ ಕೂರಿಸಿದ್ದರು. ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ಅಮರೀಂದರ್ ಸಿಂಗ್ ಬಹಿರಂಗವಾಗಿಯೇ ತಮ್ಮ ಅಸಮಾಧಾನ ಹೊರಹಾಕಿದ್ದರು.
ಪಂಜಾಬ್ನಲ್ಲಿ ನೂತನ ಸರ್ಕಾರ ರಚನೆಯಾಗಿ ಒಂದು ವಾರ ಕಳೆದಿದೆ. 2 ದಿನಗಳ ಹಿಂದಷ್ಟೇ 15 ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭವೂ ನಡೆದಿದೆ. ನೂತನ ಸಚಿವ ಸಂಪುಟದಲ್ಲಿ ಅಮರೀಂದರ್ ಸಿಂಗ್ ಸಂಪುಟದಲ್ಲಿ ಸಚಿವರಾಗಿದ್ದ ಐವರನ್ನು ಕೈಬಿಡಲಾಗಿದೆ. ಇದರಿಂದ ಅಸಮಾಧಾನಗೊಂಡಿರುವ ಅಮರೀಂದರ್ ಸಿಂಗ್ ಬಂಡಾಯವೇಳುವ ಎಲ್ಲ ಲಕ್ಷಣಗಳೂ ಕಾಣುತ್ತಿವೆ. ಕ್ಯಾಪ್ಟನ್ ಅಮರೀಂದರ್ ಸಿಂಗ್ ಇಂದು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪಂಜಾಬ್ನಲ್ಲಿ ನೂತನ ಸರ್ಕಾರ ರಚನೆಯಾದ ಬೆನ್ನಲ್ಲೇ ಮಾಜಿ ಸಿಎಂ ಅಮರೀಂದರ್ ಸಿಂಗ್ ಬಿಜೆಪಿ ನಾಯಕರನ್ನು ಭೇಟಿಯಾಗುತ್ತಿರುವುದು ಭಾರೀ ಕುತೂಹಲ ಮೂಡಿಸಿದೆ. ಅಮರೀಂದರ್ ಸಿಂಗ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲಿದ್ದಾರೆ ಎಂಬ ಚರ್ಚೆಗಳೂ ನಡೆದಿವೆ.
ಆದರೆ, ಇದಕ್ಕೆ ಅಮರೀಂದರ್ ಸಿಂಗ್ ಆಗಲಿ, ಅವರ ಬಣದವರಾಗಲಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಅಮರೀಂದರ್ ಸಿಂಗ್ ಅವರ ಮಾಧ್ಯಮ ಸಲಹೆಗಾರ ರವೀನ್ ತುಕ್ರಾಲ್ ಈ ವದಂತಿಯನ್ನು ತಳ್ಳಿ ಹಾಕಿದ್ದು, ಅಮರೀಂದರ್ ಸಿಂಗ್ ವೈಯಕ್ತಿಕ ಕೆಲಸದ ನಿಮಿತ್ತ ದೆಹಲಿಗೆ ತೆರಳಿದ್ದಾರೆ. ಅವರು ಬಿಜೆಪಿ ನಾಯಕರನ್ನು ಭೇಟಿ ಮಾಡುತ್ತಿಲ್ಲ ಎಂದಿದ್ದಾರೆ.
ಇದನ್ನೂ ಓದಿ: Punjab cabinet expansion ಪಂಜಾಬ್ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರಾಗಿ 15 ಶಾಸಕರ ಪ್ರಮಾಣ ವಚನ
(Punjab Former CM Captain Amarinder Singh to join BJP as he May Meet Amit Shah, JP Nadda in Delhi today)
Published On - 2:59 pm, Tue, 28 September 21