
ನವದೆಹಲಿ, ಜುಲೈ 21: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ನಿವಾಸದ ಬಳಿ ಧರಣಿ ನಡೆಸಿದ ಹಿನ್ನೆಲೆಯಲ್ಲಿ ವಶಕ್ಕೆ ಪಡೆಯಲಾಗಿದ್ದ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಅವರನ್ನು ದೆಹಲಿ ಪೊಲೀಸರು ಕಸ್ಟಡಿಯಿಂದ ಬಿಡುಗಡೆ ಮಾಡಿದ್ದಾರೆ. ಇಂದು ಸಂಜೆ ತಮ್ಮ ಮಕ್ಕಳಾದ ರಾಹುಲ್ ಮತ್ತು ಪ್ರಿಯಾಂಕಾ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರ ಬಂಧನವಾಗುತ್ತಿದ್ದಂತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಖುದ್ದಾಗಿ ಮಂದಿರ ಮಾರ್ಗ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದರು. ಅದರ ಬೆನ್ನಲ್ಲೇ ಎಲ್ಲ ಕಾಂಗ್ರೆಸ್ ನಾಯಕರನ್ನೂ ಪೊಲೀಸ್ ಠಾಣೆಯಿಂದ ಬಿಡುಗಡೆ ಮಾಡಲಾಗಿದೆ.
ನೀಟ್-ಯುಜಿ (NEET-UG 2026) ಪ್ರಶ್ನೆಪತ್ರಿಕೆ ಸೋರಿಕೆ ಹಗರಣದ ಹೊಣೆಯನ್ನು ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಹಲವು ವಿರೋಧ ಪಕ್ಷಗಳ ನಾಯಕರು ಇಂದು ಪ್ರಧಾನಿ ನಿವಾಸದ ಬಳಿ ಪ್ರತಿಭಟನೆ ಹಮ್ಮಿಕೊಂಡಿದ್ದರು.
ಇದನ್ನೂ ಓದಿ: ಪ್ರಧಾನಿ ನಿವಾಸದ ಬಳಿ ಧರಣಿ ನಡೆಸುತ್ತಿದ್ದ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಲೋಕ್ ಕಲ್ಯಾಣ್ ಮಾರ್ಗದಲ್ಲಿರುವ ಪ್ರಧಾನ ಮೋದಿಯವರ ಅಧಿಕೃತ ನಿವಾಸದತ್ತ ಮೆರವಣಿಗೆ ನಡೆಸಿ, ಅಲ್ಲೇ ರಸ್ತೆಯಲ್ಲಿ ಕುಳಿತು ಧರಣಿ ನಡೆಸುತ್ತಿದ್ದಾಗ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದರು. ವಿರೋಧ ಪಕ್ಷದ ನಾಯಕರನ್ನು ಪ್ರತಿಭಟನಾ ಸ್ಥಳದಿಂದ ತೆರವುಗೊಳಿಸಲು ಯತ್ನಿಸಿದ ಪೊಲೀಸರು, ರಾಹುಲ್ ಗಾಂಧಿ ಅವರನ್ನು ಬಲವಂತವಾಗಿ ಎತ್ತಿಕೊಂಡು ಬಸ್‌ಗೆ ಕರೆದೊಯ್ಯುತ್ತಿರುವ ವಿಡಿಯೋ ವೈರಲ್ ಆಗಿತ್ತು. ಈ ವೇಳೆ ಹಲವಾರು ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರನ್ನೂ ಪೊಲೀಸರು ವಶಕ್ಕೆ ಪಡೆದಿದ್ದರು.
ಛತ್ರಸಾಲ್ ಸ್ಟೇಡಿಯಂನಿಂದ ರಾಹುಲ್ ಬಿಡುಗಡೆ:
ಬಂಧನದ ನಂತರದ ಬೆಳವಣಿಗೆಯಲ್ಲಿ, ರಾಹುಲ್ ಗಾಂಧಿ ಅವರನ್ನು ಪೊಲೀಸರು ಕಸ್ಟಡಿಯಿಂದ ಬಿಡುಗಡೆ ಮಾಡಿದ್ದಾರೆ. ರಾಹುಲ್ ಗಾಂಧಿಯನ್ನು ಛತ್ರಸಾಲ್ ಸ್ಟೇಡಿಯಂನಲ್ಲಿ ಬಂಧಿಸಿಡಲಾಗಿತ್ತು. ಪ್ರಿಯಾಂಕಾ ಗಾಂಧಿಯನ್ನು ಮಂದಿರ ಮಾರ್ಗ ಪೊಲೀಸ್ ಠಾಣೆಯಲ್ಲಿ ಇರಿಸಲಾಗಿತ್ತು. ದೆಹಲಿಯ ಛತ್ರಸಾಲ್ ಕ್ರೀಡಾಂಗಣದಲ್ಲಿ ಸುಮಾರು ಎರಡು ಗಂಟೆಗಳ ಕಾಲ ಕಸ್ಟಡಿಯಲ್ಲಿದ್ದ ರಾಹುಲ್ ಗಾಂಧಿ ಅವರನ್ನು ಪೊಲೀಸರು ಬಿಡುಗಡೆ ಮಾಡಿದರು.
ಇದನ್ನೂ ಓದಿ: ಸಂಧಾನದ ವೇಳೆ ಬೇಡಿಕೆ ಬದಲಾಯಿಸಿದ ರಾಹುಲ್ ಗಾಂಧಿ; ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಆರೋಪ
ಪ್ರಿಯಾಂಕಾ ಗಾಂಧಿ ಪ್ರತಿಕ್ರಿಯೆ:
ದೆಹಲಿಯ ಮಂದಿರ ಮಾರ್ಗ ಪೊಲೀಸ್ ಠಾಣೆಯಲ್ಲಿದ್ದ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಕಾಂಗ್ರೆಸ್ ಸಂಸದ ದೀಪೇಂದರ್ ಸಿಂಗ್ ಹೂಡಾ ಅವರನ್ನು ಕಸ್ಟಡಿಯಿಂದ ಮುಕ್ತಗೊಳಿಸಲಾಯಿತು. ಬಂಧನದಿಂದ ಬಿಡುಗಡೆಯಾದ ಬಳಿಕ ಪ್ರತಿಕ್ರಿಯೆ ನೀಡಿರುವ ಪ್ರಿಯಾಂಕಾ ಗಾಂಧಿ, “ವಿರೋಧ ಪಕ್ಷದ ನಾಯಕನಾದರೂ ರಾಹುಲ್ ಗಾಂಧಿಗೆ ಪಾರ್ಲಿಮೆಂಟ್ನಲ್ಲಿ ಮಾತನಾಡಲು ಅವಕಾಶ ನೀಡುವುದಿಲ್ಲ. ನಾವು ಪ್ರತಿಭಟನೆ ನಡೆಸಲು ಅನುಮತಿ ಕೇಳಿದರೂ ಕೊಡುವುದಿಲ್ಲ. ಹೀಗಾಗಿ, ಅವರು ಎಲ್ಲಿ ನಮ್ಮನ್ನು ನಿರೀಕ್ಷೆ ಮಾಡಿರಲಿಲ್ಲವೋ ಅಲ್ಲೇ ಹೋಗಿ ಧರಣಿ ನಡೆಸಿದೆವು” ಎಂದು ಹೇಳಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ