ಪಾಕಿಸ್ತಾನದ ಜೊತೆಗಿನ ಉದ್ವಿಗ್ನತೆ ಬೆನ್ನಲ್ಲೇ ಅಮೆರಿಕದ ರಕ್ಷಣಾ ಕಾರ್ಯದರ್ಶಿ ಜೊತೆ ರಾಜನಾಥ್ ಸಿಂಗ್ ಮಾತುಕತೆ
ಪಹಲ್ಗಾಮ್ ದಾಳಿಯ ನಂತರ ಪಾಕಿಸ್ತಾನದೊಂದಿಗಿನ ಉದ್ವಿಗ್ನತೆಯ ನಡುವೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೇತ್ ಅವರೊಂದಿಗೆ ಮಾತನಾಡಿದ್ದಾರೆ. ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತ-ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಅಮೆರಿಕದ ರಕ್ಷಣಾ ಕಾರ್ಯದರ್ಶಿ ಜತೆ ರಾಜನಾಥ್ ಸಿಂಗ್ ಚರ್ಚೆ ನಡೆಸಿದ್ದಾರೆ.

ನವದೆಹಲಿ, ಮೇ 1: ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯ ಪಹಲ್ಗಾಮ್‌ನ (Pahalgam Attack) ಮೇಲ್ಭಾಗದಲ್ಲಿರುವ ಜನಪ್ರಿಯ ಪ್ರವಾಸಿ ತಾಣವಾದ ಬೈಸರನ್‌ನಲ್ಲಿ ಭಯೋತ್ಪಾದಕರು ಗುಂಡು ಹಾರಿಸಿ 26 ಜನರನ್ನು ಕೊಂದರು. ಹೆಚ್ಚಾಗಿ ಇತರ ರಾಜ್ಯಗಳ ಪ್ರವಾಸಿಗರು ಇಲ್ಲಿಗೆ ಭೇಟಿ ನೀಡಿದ್ದರು. ಈ ಘಟನೆ ಭಾರತ-ಪಾಕಿಸ್ತಾನ ಉದ್ವಿಗ್ನತೆಯನ್ನು ಹೆಚ್ಚಿಸಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನದೊಂದಿಗಿನ ಉದ್ವಿಗ್ನತೆಯ ನಡುವೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು (ಮೇ 1) ಅಮೆರಿಕ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೇತ್ ಅವರೊಂದಿಗೆ ಮಾತನಾಡಿದರು. ವರದಿಗಳ ಪ್ರಕಾರ, ಪಹಲ್ಗಾಮ್ ದಾಳಿಯ ಬಗ್ಗೆ ಅವರು ಫೋನ್ ಸಂಭಾಷಣೆಯಲ್ಲಿ ಚರ್ಚಿಸಿದ್ದಾರೆ ಎನ್ನಲಾಗಿದೆ.
ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿನ ಭದ್ರತಾ ಪರಿಸ್ಥಿತಿಯ ಕುರಿತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿವರಿಸಿದರು. ಏಪ್ರಿಲ್ 22ರಂದು 26 ನಾಗರಿಕರನ್ನು ಕೊಂದ ಭಯೋತ್ಪಾದಕ ದಾಳಿಗೆ ಕಾರಣರಾದವರನ್ನು ಶಿಕ್ಷಿಸಲು ಭಾರತವು ತನ್ನ ಆಯ್ಕೆಗಳನ್ನು ಪರಿಗಣಿಸುತ್ತಿರುವಾಗ ಈ ಬ್ರೀಫಿಂಗ್ ಬಂದಿತು. ಈ ಭೀಕರ ಘಟನೆಗೆ ಗಡಿಯಾಚೆಗಿನ ಸಂಬಂಧವಿದೆ ಎಂದು ಉಲ್ಲೇಖಿಸಿ, ದಾಳಿಯಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆ ವಿಧಿಸುವುದಾಗಿ ಭಾರತ ಭರವಸೆ ನೀಡಿದೆ. ಪ್ರಧಾನಿ ಮೋದಿ ಅವರೊಂದಿಗಿನ ರಾಜನಾಥ್ ಸಿಂಗ್ ಅವರ ಸುಮಾರು 40 ನಿಮಿಷಗಳ ಭೇಟಿಯ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ.
ಇದನ್ನೂ ಓದಿ: ಒಬ್ಬರನ್ನೂ ಬಿಡುವುದಿಲ್ಲ, ಹುಡುಕಿ ಹೊಡೆಯುತ್ತೇವೆ; ಉಗ್ರರಿಗೆ ಅಮಿತ್ ಶಾ ಖಡಕ್ ಎಚ್ಚರಿಕೆ
ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾದ ಭಯೋತ್ಪಾದಕರನ್ನು ಹುಡುಕಿ ಶಿಕ್ಷೆ ವಿಧಿಸುವುವುದಾಗಿ ಭಾರತ ಹೇಳಿಕೆ ನೀಡಿದ ನಂತರ ಪಾಕಿಸ್ತಾನ ತನ್ನ ಸೇನೆಯನ್ನು ಕಟ್ಟೆಚ್ಚರದಲ್ಲಿರಿಸಿದೆ. ಕಳೆದ ನಾಲ್ಕು ದಿನಗಳಲ್ಲಿ ಪಾಕಿಸ್ತಾನ ಸೇನೆಯು ನಿಯಂತ್ರಣ ರೇಖೆಯ (ಎಲ್‌ಒಸಿ) ಉದ್ದಕ್ಕೂ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ ಮತ್ತು ಭಾರತೀಯ ಪಡೆಗಳು ಅವರಿಗೆ ಪರಿಣಾಮಕಾರಿಯಾಗಿ ಪ್ರತಿಕ್ರಿಯಿಸಿವೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ