ರಶ್ಮಿಕಾ ನಕಲಿ ವಿಡಿಯೋ ಪ್ರಕರಣ: ಸಾಮಾಜಿಕ ಮಾಧ್ಯಮ ಕಂಪನಿಗಳಿಗೆ ನಿಯಮ ಪಾಲಿಸಲು ಕೇಂದ್ರ ಸೂಚನೆ

ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66 ಡಿ ಸೇರಿದಂತೆ ಅಸ್ತಿತ್ವದಲ್ಲಿರುವ ನಿಯಮಗಳನ್ನು ಸಚಿವಾಲಯ ಪುನರುಚ್ಚರಿಸಿದೆ. ಈ ಕಾನೂನಿನಡಿ, ಕಂಪ್ಯೂಟರ್ ಸಂಪನ್ಮೂಲಗಳನ್ನು ಬಳಸಿಕೊಂಡು ವ್ಯಕ್ತಿತ್ವಕ್ಕೆ ಧಕ್ಕೆ ತರುವಂಥ ಕೃತ್ಯಗಳನ್ನು ಎಸಗುವುದು ಮತ್ತು ವಂಚನೆ ಎಸಗುವುದಕ್ಕೆ 3 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 1 ಲಕ್ಷ ರೂಪಾಯಿ ವರೆಗೆ ದಂಡ ವಿಧಿಸಬಹುದಾಗಿದೆ.

ರಶ್ಮಿಕಾ ನಕಲಿ ವಿಡಿಯೋ ಪ್ರಕರಣ: ಸಾಮಾಜಿಕ ಮಾಧ್ಯಮ ಕಂಪನಿಗಳಿಗೆ ನಿಯಮ ಪಾಲಿಸಲು ಕೇಂದ್ರ ಸೂಚನೆ
ಜರಾ ಪಟೇಲ್​, ರಶ್ಮಿಕಾರ ಎಡಿಟೆಡ್​ ಫೋಟೋ

Updated on: Nov 07, 2023 | 4:24 PM

ನವದೆಹಲಿ, ನವೆಂಬರ್ 7: ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರ ಡೀಪ್​ಫೇಕ್ (Deepfake) ವಿಡಿಯೋ (ಡೀಪ್​ಫೇಕ್ ತಂತ್ರಜ್ಞಾನ ಬಳಸಿ ಎಡಿಟ್ ಮಾಡಿರುವ) ವೈರಲ್ ಆದ ಬೆನ್ನಲ್ಲೇ ದೇಶದಲ್ಲಿ ಐಟಿ ಕಾನೂನಿನ ಬಗ್ಗೆ ಮತ್ತೊಮ್ಮೆ ಚರ್ಚೆ ಆರಂಭವಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹವೂ ವ್ಯಕ್ತವಾಗಿದೆ. ಈ ಬೆಳವಣಿಗೆಗಳ ಬೆನ್ನಲ್ಲೇ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು (Ministry of Electronics and Information Technology) ಸಾಮಾಜಿಕ ಮಾಧ್ಯಮ ಕಂಪನಿಗಳಿಗೆ ಸಲಹೆ ಸೂಚನೆಗಳನ್ನು ಬಿಡುಗಡೆ ಮಾಡಿದೆ. ಜತೆಗೆ, ಅಸ್ತಿತ್ವದಲ್ಲಿರುವ ಕಾನೂನನ್ನು ಪಾಲಿಸುವಂತೆ ಪುನರುಚ್ಚರಿಸಿದೆ ಎಂದು ಮೂಲಗಳು ಮಂಗಳವಾರ ತಿಳಿಸಿವೆ.

ಮೂಲಗಳ ಪ್ರಕಾರ, ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66 ಡಿ ಸೇರಿದಂತೆ ಅಸ್ತಿತ್ವದಲ್ಲಿರುವ ನಿಯಮಗಳನ್ನು ಸಚಿವಾಲಯ ಪುನರುಚ್ಚರಿಸಿದೆ. ಈ ಕಾನೂನಿನಡಿ, ಕಂಪ್ಯೂಟರ್ ಸಂಪನ್ಮೂಲಗಳನ್ನು ಬಳಸಿಕೊಂಡು ವ್ಯಕ್ತಿತ್ವಕ್ಕೆ ಧಕ್ಕೆ ತರುವಂಥ ಕೃತ್ಯಗಳನ್ನು ಎಸಗುವುದು ಮತ್ತು ವಂಚನೆ ಎಸಗುವುದಕ್ಕೆ 3 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 1 ಲಕ್ಷ ರೂಪಾಯಿ ವರೆಗೆ ದಂಡ ವಿಧಿಸಬಹುದಾಗಿದೆ.

ಸಾಮಾಜಿಕ ಮಾಧ್ಯಮ ಮಧ್ಯವರ್ತಿಗಳು ಬಳಕೆದಾರರ ಖಾಸಗಿತನವನ್ನು ಖಚಿತಪಡಿಸಿಕೊಳ್ಳುವುದು ಸೇರಿದಂತೆ ಅದಕ್ಕೆ ಸಂಬಂಧಿಸಿದ ವಿಚಾರವನ್ನು ಶ್ರದ್ಧೆಯನ್ನು ಗಮನಿಸಬೇಕು ಎಂದು ‘ಐಟಿ ಇಂಟರ್​​ಮೀಡಿಯೇಟರ್ ರೂಲ್ಸ್​ನ: ನಿಯಮ 3(1)(b)(vii)’ರಲ್ಲಿ ಉಲ್ಲೇಖಿಸಲಾಗಿದೆ. ನಿಯಮಗಳು, ನಿಬಂಧನೆಗಳು ಮತ್ತು ಗೌಪ್ಯತಾ ನೀತಿಯನ್ನು ಸಾಮಾಜಿಕ ಮಾಧ್ಯಮ ಕಂಪನಿಗಳು ಪಾಲಿಸಬೇಕು. ಬಳಕೆದಾರರಿಗೆ ಇನ್ನೊಬ್ಬ ವ್ಯಕ್ತಿಯನ್ನು ಸೋಗು ಹಾಕುವ ಯಾವುದೇ ವಿಷಯವನ್ನು ಹೋಸ್ಟ್ ಮಾಡದಂತೆ ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಡೀಪ್‌ಫೇಕ್ ವಿಡಿಯೋ ಹೇಗೆ ಸೃಷ್ಟಿಯಾಗುತ್ತದೆ? ರಶ್ಮಿಕಾ ಮಂದಣ್ಣ ಅವರ ನಕಲಿ ವಿಡಿಯೋ ಹೇಗೆ ಮಾಡಿದ್ರು?

ತಂತ್ರಜ್ಞಾನಕ್ಕೆ ಸಂಬಂಧಿಸಿದ ದುರ್ಬಳಕೆ ದೂರುಗಳು ಬಂದಲ್ಲಿ 24 ಗಂಟೆಯೊಳಗೆ ಕ್ರಮ ಕೈಗೊಳ್ಳಬೇಕು. ಮಾರ್ಫ್​ ಮಾಡಿದ ಕಂಟೆಂಟ್​ ಅನ್ನು ತೆಗೆದುಹಾಕಲು ಅಥವಾ ನಿಷ್ಕ್ರಿಯಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ನಿಯಮ 3(2)(ಬಿ)ಯಲ್ಲಿ ಉಲ್ಲೇಖಿಸಲಾಗಿದೆ.

ಜರಾ ಪಟೇಲ್ ಎಂಬ ಯುವತಿಯ ಹಾಟ್​ ಅವತಾರದ ವಿಡಿಯೋಗೆ ನಟಿ ರಶ್ಮಿಕಾ ಮಂದಣ್ಣರ ಮುಖವನ್ನು ಎಡಿಟ್​ ಸಾಮಾಜಿಕ ಮಾಧ್ಯಮಗಳಲ್ಲಿ ಹರಿಯಬಿಡಲಾಗಿತ್ತು. ಈ ರೀತಿ ಎಡಿಟ್​ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅಮಿತಾಭ್​ ಬಚ್ಚನ್​ ಅವರು ಒತ್ತಾಯಿಸಿದ್ದರು. ನಂತರ ಈ ವಿಚಾರ ಸಾಮಾಜಿಕ ಮಾಧ್ಯಮಗಳಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Loading...
Unable to load recommendations.
Follow Us