‘ಕೂಡಲೇ ರಾಜೀನಾಮೆ ನೀಡಿ’; ಸಿಜೆಐ ಸೂರ್ಯ ಕಾಂತ್ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ದೆಹಲಿ ಪ್ರತಿಭಟನೆಗಳು ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ವಿಷಯವಾಗಿದ್ದು, ಅದು ತನ್ನ ವ್ಯಾಪ್ತಿಗೆ ಬರುವುದಿಲ್ಲ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಹೇಳಿಕೆ ನೀಡಿದ ಬೆನ್ನಲ್ಲೇ, ಕಾಂಗ್ರೆಸ್ ಪಕ್ಷದ ಕೇರಳ ಘಟಕವು ಸಿಜೆಐ ಅವರ ರಾಜೀನಾಮೆಗೆ ಆಗ್ರಹಿಸಿ ವಿವಾದಾತ್ಮಕ ಪೋಸ್ಟ್ ಹಂಚಿಕೊಂಡಿದೆ. ಆದರೆ ತೀವ್ರ ವಿರೋಧ ಹಾಗೂ ಟೀಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಕೆಲವೇ ಗಂಟೆಗಳ ಬಳಿಕ ಆ ಪೋಸ್ಟ್ ಅನ್ನು ಡಿಲೀಟ್ ಮಾಡಲಾಗಿದೆ. ದೆಹಲಿಯಲ್ಲಿ ನಡೆದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ 33ನೇ ವಾರ್ಷಿಕೋತ್ಸವದ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಜೆಐ ಸೂರ್ಯ ಕಾಂತ್, ದೆಹಲಿ ಪ್ರತಿಭಟನೆಗಳ ಕುರಿತು ಪ್ರತಿಕ್ರಿಯಿಸುತ್ತಾ, "ಇದು ಕಾನೂನು ಮತ್ತು ಸುವ್ಯವಸ್ಥೆಯ ವಿಚಾರ. ಇದು ನನ್ನ ವಿಷಯವಲ್ಲ" ಎಂದು ಹೇಳಿಕೆ ನೀಡಿದ್ದರು.

ಕೂಡಲೇ ರಾಜೀನಾಮೆ ನೀಡಿ; ಸಿಜೆಐ ಸೂರ್ಯ ಕಾಂತ್ ವಿರುದ್ಧ ಕಾಂಗ್ರೆಸ್ ವಾಗ್ದಾಳಿ
ಸಿಜೆಐ ಸೂರ್ಯಕಾಂತ್
Image Credit source: PTI

Updated on: Oct 12, 2026 | 8:47 PM

ನವದೆಹಲಿ, ಅಕ್ಟೋಬರ್ 12: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಮತ್ತು ಮತದಾರರ ಪಟ್ಟಿಯ ಪರಿಷ್ಕರಣೆ (ಎಸ್​ಐಆರ್) ಪ್ರಕ್ರಿಯೆಯ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳು ಇದೀಗ ಮತ್ತೊಂದು ಹಂತ ತಲುಪಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ತಮ್ಮನ್ನು ಭೇಟಿಯಾಗುವ ಕಾಂಗ್ರೆಸ್ ನಾಯಕರ ಪ್ರಸ್ತಾಪವನ್ನು ನಿರಾಕರಿಸಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಕಾಂಗ್ರೆಸ್ ಸಿಜೆಐ ಸೂರ್ಯಕಾಂತ್ ವಿರುದ್ಧವೂ ವಾಗ್ದಾಳಿ ನಡೆಸಿದ್ದು, ರಾಜೀನಾಮೆಗೆ ಒತ್ತಾಯಿಸಿದೆ.

“ಕಾನೂನು ಮತ್ತು ಸುವ್ಯವಸ್ಥೆ ನನ್ನ ವ್ಯಾಪ್ತಿಗೆ ಬರುವುದಿಲ್ಲ” ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೀಡಿದ ಹೇಳಿಕೆ ರಾಷ್ಟ್ರ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿತ್ತು. ಈ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ಪಕ್ಷವು, ಮುಖ್ಯ ನ್ಯಾಯಮೂರ್ತಿಗಳು ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದೆ.

ಇದನ್ನೂ ಓದಿ: ಎಸ್‌ಐಆರ್ ಅಕ್ರಮ; ಚುನಾವಣಾ ಆಯೋಗದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ ರಾಹುಲ್ ಗಾಂಧಿ

ಸಿಜೆಐ ಅವರ ಹೇಳಿಕೆ ಹೊರಬಿದ್ದ ಕೆಲವೇ ಗಂಟೆಗಳಲ್ಲಿ ಕಾಂಗ್ರೆಸ್ ಪಕ್ಷದ ಕೇರಳ ಘಟಕವು ತನ್ನ ಅಧಿಕೃತ ‘ಎಕ್ಸ್’ ಖಾತೆಯಲ್ಲಿ, “ಆತ್ಮೀಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರೇ, ಕಾನೂನು ಮತ್ತು ಸುವ್ಯವಸ್ಥೆ ನಿಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದಾದರೆ, ಕೂಡಲೇ ರಾಜೀನಾಮೆ ನೀಡಿ. ಅದನ್ನು ನಿರ್ವಹಿಸಬಲ್ಲ ಮತ್ತೊಬ್ಬರನ್ನು ನಾವು ಹುಡುಕಿಕೊಳ್ಳುತ್ತೇವೆ” ಎಂದು ಬರೆದುಕೊಂಡಿತ್ತು. ಆದರೆ, ಇದಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಇಂದು ಸಂಜೆ ಆ ಪೋಸ್ಟ್ ಅನ್ನು ಡಿಲೀಟ್ ಮಾಡಿದೆ.

kerala congress tweet

kerala congress tweet

ರಾಷ್ಟ್ರ ರಾಜಧಾನಿಯಲ್ಲಿ ಕಳೆದ ಕೆಲವು ದಿನಗಳಿಂದ ಸಿಇಸಿ ಜ್ಞಾನೇಶ್ ಕುಮಾರ್ ಹಾಗೂ ಎಸ್‌ಐಆರ್ ಪ್ರಕ್ರಿಯೆ ವಿರೋಧಿಸಿ ವಿಪಕ್ಷಗಳು ಭಾರಿ ಪ್ರತಿಭಟನೆ ನಡೆಸುತ್ತಿದ್ದು, 40,000ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಿ ಇಡೀ ದೆಹಲಿಯನ್ನು ಕೋಟೆಯನ್ನಾಗಿ ಮಾಡಲಾಗಿದೆ. ಸಾವಿರಾರು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಸುದ್ದಿಗಾರರು ಪ್ರಶ್ನಿಸಿದಾಗ ಸಿಜೆಐ ಸೂರ್ಯ ಕಾಂತ್, “ಇದು ನನ್ನ ವ್ಯಾಪ್ತಿಯ ವಿಷಯವಲ್ಲ. ನಾನು ಈ ಬಗ್ಗೆ ಯಾವುದೇ ಕಾಮೆಂಟ್ ಮಾಡುವುದಿಲ್ಲ” ಎಂದು ಹೇಳಿದ್ದರು.

ಇದನ್ನೂ ಓದಿ: ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ

ಅಲ್ಲದೆ, ‘ಇಂಡಿಯಾ’ ಒಕ್ಕೂಟದ ನಾಯಕರು ಇಂದು ಸಭೆಗಾಗಿ ಕೋರಿದ್ದ ಮನವಿಯನ್ನು ಸಿಜೆಐ ನಿರಾಕರಿಸಿದ್ದರು. ಈ ಕುರಿತು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಯವರಿಗೆ ಪತ್ರ ಬರೆದಿರುವ ಸಿಜೆಐ ಸೂರ್ಯಕಾಂತ್, “ನೀವು ಪ್ರಸ್ತಾಪಿಸಿರುವ ವಿಷಯಗಳು ಈಗಾಗಲೇ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ಪರಿಶೀಲನೆಯಲ್ಲಿವೆ. ಆದ್ದರಿಂದ, ಬಾಕಿ ಇರುವ ಪ್ರಕರಣಗಳ ಕುರಿತು ಚರ್ಚಿಸಲು ಸಭೆ ನಡೆಸುವುದು ಭಾರತೀಯ ಸಂವಿಧಾನದ ಮೂಲಭೂತ ಚೌಕಟ್ಟಿನ ಭಾಗವಾದ ‘ಅಧಿಕಾರ ವಿಭಜನೆ’ ತತ್ವಕ್ಕೆ ಸಂಪೂರ್ಣವಾಗಿ ವಿರುದ್ಧವಾಗಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
Loading...
Unable to load recommendations.
Follow Us