ದೆಹಲಿ: ರೈತ ಸಂಘಟನೆಗಳು ಮತ್ತು ಕೇಂದ್ರ ಸರ್ಕಾರದ ಸಭೆ ಮತ್ತೆ ವಿಫಲವಾಗಿದೆ ಎಂದು ಮೂಲಗಳು ತಿಳಿಸಿವೆ. ರಾಷ್ಟ್ರ ರಾಜಧಾನಿಯ ವಿಜ್ಞಾನ ಭವನದಲ್ಲಿ ನಡೆದಿದ್ದ ಸಂಧಾನ ಸಭೆ ವಿಫಲವಾಗಿದೆ ಎಂದು ತಿಳಿದುಬಂದಿದೆ.
ಹೀಗಾಗಿ, ಜನವರಿ 8ರಂದು ಮತ್ತೆ ಸಂಧಾನ ಸಭೆ ನಡೆಸುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ರೈತರು ಹಾಗೂ ಕೇಂದ್ರ ಸರ್ಕಾರದ ನಡುವಿನ 7ನೇ ಸುತ್ತಿನ ಸಭೆ ಇದಾಗಿತ್ತು. ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಮತ್ತು ರೈತ ಸಂಘಟನೆಗಳ ನಾಯಕರು ಸಭೆಯಲ್ಲಿ ಭಾಗಿಯಾಗಿದ್ದರು.
ಇನ್ನು, ಸಭೆ ಬಳಿಕ ಮಾತನಾಡಿದ ಭಾರತೀಯ ಕಿಸಾನ್ ಯೂನಿಯನ್ ವಕ್ತಾರ ರಾಕೇಶ್ ಟಿಕಾಯತ್ ನಮ್ಮ ಬೇಡಿಕೆಗಳ ಮೇಲೆ ಚರ್ಚೆ ನಡೆಯಿತು. ಕೇಂದ್ರದ ಮೂರು ಕೃಷಿ ಕಾಯ್ದೆ ಹಾಗೂ ಕನಿಷ್ಠ ಬೆಂಬಲ ಬೆಲೆಯ (MSP) ಬಗ್ಗೆ ಮಾತುಕತೆ ನಡೆಯಿತು. ಆದರೆ, ಕೇಂದ್ರ ಸರ್ಕಾರ ಕಾಯ್ದೆಗಳನ್ನು ವಾಪಸ್ ಪಡೆಯುವವರೆಗೂ ನಾವು ಮನೆಗೆ ಹಿಂದಿರುಗುವುದಿಲ್ಲ ಎಂದು ಹೇಳಿದರು.
ಸರ್ಕಾರದ ಮೇಲೆ ತೀವ್ರ ಒತ್ತಡ ಹೇರಿದ್ದೇವೆ. ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವುದನ್ನು ಬಿಟ್ಟರೆ ನಮಗೆ ಬೇರಾವ ವಿಷಯದ ಬಗ್ಗೆ ಚರ್ಚೆ ನಡೆಸುವ ಆಸಕ್ತಿಯಿಲ್ಲ ಎಂದು ಸರ್ಕಾರಕ್ಕೆ ಖಡಾಖಂಡಿತವಾಗಿ ಹೇಳಿದ್ದೇವೆ. ಹಾಗಾಗಿ, ನಮ್ಮ ಪ್ರತಿಭಟನೆಯನ್ನು ಮುಂದುವರಿಸುತ್ತೇವೆ ಎಂದು ಅಖಿಲ ಭಾರತೀಯ ಕಿಸಾನ್ ಸಭಾದ ಪ್ರಧಾನ ಕಾರ್ಯದರ್ಶಿ ಹನನ್ ಮೊಲ್ಲಾ ತಿಳಿಸಿದರು.
ರೈತ ಸಂಘಟನೆಗಳ ಮುಖಂಡರೊಂದಿಗೆ ನಾವು ಮೂರೂ ಕೃಷಿ ಕಾಯ್ದೆಗಳಲ್ಲಿ ಉಲ್ಲೇಖಿಸಲಾಗಿರುವ ವಿಷಯಗಳ ಕುರಿತು ಸುದೀರ್ಘ ಚರ್ಚೆ ನಡೆಸಲು ಸಿದ್ಧರಿದ್ದೆವು. ಆದರೆ, ರೈತ ಮುಖಂಡರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಲೇಬೇಕು ಎಂಬ ಬೇಡಿಕೆ ಇಟ್ಟಿರುವುದರಿಂದ ಮಾತುಕತೆ ಮುಂದುವರಿಸಲು ಸಾಧ್ಯವಾಗಲಿಲ್ಲ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ತಿಳಿಸಿದರು. ಹಾಗಾಗಿ, ಮುಂಬರುವ 8ನೇ ಸುತ್ತಿನ ಮಾತಕತೆಯಲ್ಲಿ ಅರ್ಥಪೂರ್ಣ ಚರ್ಚೆ ನಡೆಸುವ ವಿಶ್ವಾಸ ಹೊಂದಿದ್ದೇವೆ ಎಂದು ತೋಮರ್ ತಿಳಿಸಿದರು.
Delhi Chalo: ಇಂದು 7ನೇ ಸುತ್ತಿನ ಸಭೆ; ಫಲಿತಾಂಶಕ್ಕೆ ಕಾದು ಕುಳಿತಿದೆ ಇಡೀ ದೇಶ
Published On - 6:06 pm, Mon, 4 January 21