
ತಿರುಪತಿ ತಿಮ್ಮಪ್ಪನ ಲಡ್ಡು ಪ್ರಸಾದದಲ್ಲಿ ಕಲಬೆರಕೆ ಮಾಡಿದ ಆರೋಪದ ಮೇಲೆ ಕೇಂದ್ರೀಯ ತನಿಖಾ ದಳ (ಸಿಬಿಐ) ನೇತೃತ್ವದ ವಿಶೇಷ ತನಿಖಾ ತಂಡವು ನಾಲ್ವರನ್ನು ಬಂಧಿಸಿದೆ. ಬಂಧಿತ ಆರೋಪಿಗಳನ್ನು ಭೋಲೆ ಬಾಬಾ ಡೈರಿಯ ಮಾಜಿ ನಿರ್ದೇಶಕರಾದ ವಿಪಿನ್ ಜೈನ್ ಮತ್ತು ಪೋಮಿಲ್ ಜೈನ್, ವೈಷ್ಣವಿ ಡೈರಿಯ ಅಪೂರ್ವ್ ಚಾವ್ಡಾ ಮತ್ತು ಎಆರ್ ಡೈರಿಯ ರಾಜು ರಾಜಶೇಖರನ್ ಎಂದು ಗುರುತಿಸಲಾಗಿದೆ. ನಾಲ್ವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರ ಹೇಳಿದ್ದಾರೆ. ಬಿಪಿನ್ ಜೈನ್ ಮತ್ತು ಪೋಮಿ ಜೈನ್ ಭೋಲೆ ಬಾಬಾ ಡೈರಿ ಹಾಗೂ ಅಪೂರ್ವ್ ಚಾವ್ಡಾ ವೈಷ್ಣವಿ ಡೈರಿಯೊಂದಿಗೆ ಸಂಬಂಧ ಹೊಂದಿದ್ದಾರೆ ಹಾಗೂ ರಾಜಶೇಖರನ್ ಎಂಬ ವ್ಯಕ್ತಿ ಎ.ಆರ್. ಡೈರಿಯೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ಹೇಳಲಾಗಿದೆ.
ಮೂಲಗಳ ಪ್ರಕಾರ, ಎಸ್‌ಐಟಿ ತನಿಖೆಯು ತುಪ್ಪ ಪೂರೈಕೆಯ ಪ್ರತಿಯೊಂದು ಹಂತದಲ್ಲೂ ಅಕ್ರಮಗಳು ನಡೆದಿದೆ. ಈ ಕಾರಣಕ್ಕಾಗಿಯೇ ಬಂಧಿಸಲಾಗಿದೆ. ದೇವಸ್ಥಾನಕ್ಕೆ ತುಪ್ಪ ಪೂರೈಸಲು ವೈಷ್ಣವಿ ಡೈರಿ ಅಧಿಕಾರಿಗಳು ಎಆರ್ ಡೈರಿಯ ಹೆಸರಿನಲ್ಲಿ ಟೆಂಡರ್‌ಗಳನ್ನು ಪಡೆದುಕೊಂಡಿದ್ದಾರೆ. ಇದರ ಟೆಂಡರ್ ಪಡೆಯಲು ನಕಲಿ ದಾಖಲೆಗಳನ್ನು ರಚಿಸುವಲ್ಲಿ ಭಾಗಿಯಾಗಿದ್ದಾರೆ.
ತಿರುಮಲ ತಿರುಪತಿ ದೇವಾಲಯ ಮಂಡಳಿಯ ಬೇಡಿಕೆಯನ್ನು ಪೂರೈಸುವ ಸಾಮರ್ಥ್ಯವನ್ನು ಭೋಲೆ ಬಾಬಾ ಡೈರಿ ಹೊಂದಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಆದರೆ ಭೋಲೆ ಬಾಬಾ ಡೈರಿಯಿಂದ ತುಪ್ಪವನ್ನು ಖರೀದಿಸಲಾಗಿದೆ ಎಂದು ವೈಷ್ಣವಿ ಡೈರಿ ಸುಳ್ಳು ಹೇಳಿಕೊಂಡಿದೆ ಎಂದು ಎಸ್‌ಐಟಿ ಬಹಿರಂಗಪಡಿಸಿದೆ. ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬಿನ ಬಳಕೆಯ ಆರೋಪದ ತನಿಖೆ ಮಾಡಲು ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಸಿಬಿಐ ಕಳೆದ ವರ್ಷ ನವೆಂಬರ್‌ನಲ್ಲಿ ಐದು ಸದಸ್ಯರ ವಿಶೇಷ ತನಿಖಾ ತಂಡವನ್ನು ರಚಿಸಿತ್ತು.
ಇದನ್ನೂ ಓದಿ: ಹಿಂದೂ ಧಾರ್ಮಿಕ ಪದ್ಧತಿಗಳನ್ನು ಪಾಲಿಸದ 18 ನೌಕರರ ವಿರುದ್ಧ ಕ್ರಮ ಕೈಗೊಂಡ ಟಿಟಿಡಿ
ಈ ತಂಡದಲ್ಲಿ ಕೇಂದ್ರ ಸಂಸ್ಥೆಯ ಇಬ್ಬರು ಅಧಿಕಾರಿಗಳು, ಆಂಧ್ರಪ್ರದೇಶ ಪೊಲೀಸ್‌ನ ಇಬ್ಬರು ಅಧಿಕಾರಿಗಳು ಮತ್ತು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ (ಎಫ್‌ಎಸ್‌ಎಸ್‌ಎಐ) ಒಬ್ಬ ಅಧಿಕಾರಿ ಇದ್ದಾರೆ. ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಸುಬ್ರಮಣಿಯನ್ ಸ್ವಾಮಿ ಮತ್ತು ವೈಎಸ್‌ಆರ್‌ಸಿಪಿ (ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷ) ರಾಜ್ಯಸಭಾ ಸದಸ್ಯ ವೈ ವಿ ಸುಬ್ಬಾ ರೆಡ್ಡಿ ಮತ್ತು ಇತರರು ಸಲ್ಲಿಸಿದ್ದ ಅರ್ಜಿಗಳನ್ನು ಆಲಿಸಿದ ನಂತರ, ಸುಪ್ರೀಂ ಕೋರ್ಟ್ ಕಳೆದ ವರ್ಷ ಅಕ್ಟೋಬರ್ 4 ರಂದು ತನ್ನ ಆದೇಶದಲ್ಲಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಿದ ಆರೋಪವನ್ನು ಎಸ್‌ಐಟಿ ತನಿಖೆ ನಡೆಸಲಿದೆ ಮತ್ತು ಸಿಬಿಐ ನಿರ್ದೇಶಕರು ಅದನ್ನು ಮೇಲ್ವಿಚಾರಣೆ ಮಾಡುತ್ತಾರೆ ಎಂದು ಹೇಳಿತ್ತು.
ಆಂಧ್ರಪ್ರದೇಶದ ಹಿಂದಿನ ವೈ ಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿತ್ತು ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಸೆಪ್ಟೆಂಬರ್‌ನಲ್ಲಿ ಆರೋಪಿಸಿದ್ದರು. ನಾಯ್ಡು ಅವರ ಈ ಹೇಳಿಕೆ ದೊಡ್ಡ ರಾಜಕೀಯ ವಿವಾದವನ್ನು ಸೃಷ್ಟಿಸಿತು.
ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ