ದೆಹಲಿ ಹೈಕೋರ್ಟ್ ಆದೇಶದ ಬೆನ್ನಲ್ಲೇ ಉಪವಾಸ ಸತ್ಯಾಗ್ರಹ ನಿರತ ಸೋನಮ್ ವಾಂಗ್ಚುಕ್ ಮೇದಾಂತ ಆಸ್ಪತ್ರೆಗೆ ಶಿಫ್ಟ್

ದೆಹಲಿ ಹೈಕೋರ್ಟ್ ಇಂದು ನೀಡಿದ ನಿರ್ದೇಶನದಂತೆ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಅವರನ್ನು ಹೆಚ್ಚಿನ ವೈದ್ಯಕೀಯ ಚಿಕಿತ್ಸೆಗಾಗಿ ಸಫ್ದರ್‌ಜಂಗ್ ಆಸ್ಪತ್ರೆಯಿಂದ ಗುರುಗ್ರಾಮದ ಮೇದಾಂತ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಸೋನಮ್ ವಾಂಗ್ಚುಕ್ ಅವರನ್ನು ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲು ಕೋರಿ ಅವರ ಪತ್ನಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಈ ಆದೇಶ ಹೊರಡಿಸಿತ್ತು. ಸಫ್ದರ್‌ಜಂಗ್ ಆಸ್ಪತ್ರೆಯಲ್ಲಿ ನಡೆದ ಚಿಕಿತ್ಸೆಯ ಎಲ್ಲಾ ವೈದ್ಯಕೀಯ ದಾಖಲೆಗಳು, ವರದಿಗಳು ಮತ್ತು ವಿವರಗಳನ್ನು ಮೇದಾಂತ ಆಸ್ಪತ್ರೆಯ ವೈದ್ಯರಿಗೆ ಹಸ್ತಾಂತರಿಸುವಂತೆ ಕೋರ್ಟ್ ನಿರ್ದೇಶಿಸಿದೆ.

ದೆಹಲಿ ಹೈಕೋರ್ಟ್ ಆದೇಶದ ಬೆನ್ನಲ್ಲೇ ಉಪವಾಸ ಸತ್ಯಾಗ್ರಹ ನಿರತ ಸೋನಮ್ ವಾಂಗ್ಚುಕ್ ಮೇದಾಂತ ಆಸ್ಪತ್ರೆಗೆ ಶಿಫ್ಟ್
Sonam Wangchuk

Updated on: Jul 21, 2026 | 9:48 PM

ನವದೆಹಲಿ, ಜುಲೈ 21: ದೆಹಲಿ ಹೈಕೋರ್ಟ್ ನೀಡಿದ ಆದೇಶದ ಬೆನ್ನಲ್ಲೇ, ಕಳೆದ 24 ದಿನಗಳಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್ಚುಕ್ (Sonam Wangchuk) ಅವರನ್ನು ಇಂದು ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಯಿಂದ ಗುರುಗ್ರಾಮದ ಮೇದಾಂತ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ನೀಟ್ ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಜೂನ್ 28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್ ವಾಂಗ್ಚುಕ್ ಅವರನ್ನು ತಕ್ಷಣವೇ ಸಫ್ದರ್‌ಜಂಗ್ ಆಸ್ಪತ್ರೆಯಿಂದ ಮೇದಾಂತ ಆಸ್ಪತ್ರೆಗೆ ಸ್ಥಳಾಂತರಿಸುವಂತೆ ದೆಹಲಿ ಹೈಕೋರ್ಟ್ ನಿರ್ದೇಶನ ನೀಡಿತ್ತು.

ದೆಹಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ಕೆ. ಉಪಾಧ್ಯಾಯ ಮತ್ತು ನ್ಯಾಯಮೂರ್ತಿ ತೇಜಸ್ ಕಾರಿಯಾ ಅವರಿದ್ದ ವಿಭಾಗೀಯ ಪೀಠವು, ಸೋನಮ್ ವಾಂಗ್ಚುಕ್ ಅವರನ್ನು ಮೇದಾಂತ ಆಸ್ಪತ್ರೆಗೆ ಸ್ಥಳಾಂತರಿಸುವುದರಿಂದ ಅವರ ಮೂಲಭೂತ ಹಕ್ಕುಗಳನ್ನು ರಕ್ಷಿಸಿದಂತಾಗುತ್ತದೆ ಎಂದು ಅಭಿಪ್ರಾಯಪಟ್ಟಿದೆ. ಅಲ್ಲದೆ, ಚಿಕಿತ್ಸೆಯ ಸಮಯದಲ್ಲಿ ಅವರ ಆರೋಗ್ಯವನ್ನು ಹತ್ತಿರದಿಂದ ಮೇಲ್ವಿಚಾರಣೆ ಮಾಡಲು ಅರ್ಹ ವೈದ್ಯರ ತಂಡವನ್ನು ರಚಿಸಲು ಸೂಚಿಸಿದೆ.

ಇದನ್ನೂ ಓದಿ: ಸೋನಮ್ ವಾಂಗ್ಚುಕ್ 3 ವಾರಗಳ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಷರತ್ತು ವಿಧಿಸಿದ ಪತ್ನಿ

ವಿಚಾರಣೆಯ ವೇಳೆ, ಸೋನಮ್ ವಾಂಗ್ಚುಕ್ ಅವರನ್ನು ಮೇದಾಂತ ಆಸ್ಪತ್ರೆಗೆ ಸ್ಥಳಾಂತರಿಸಲು ತನಗೆ ಯಾವುದೇ ಅಭ್ಯಂತರವಿಲ್ಲ ಎಂದು ಕೇಂದ್ರ ಸರ್ಕಾರ ದೆಹಲಿ ಹೈಕೋರ್ಟ್‌ಗೆ ತಿಳಿಸಿತು. ಜಂತರ್ ಮಂತರ್ ಪ್ರತಿಭಟನಾ ಸ್ಥಳದಲ್ಲಿದ್ದ ವಾಂಗ್ಚುಕ್ ಅವರ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹದ ವೇಳೆ ಆರೋಗ್ಯ ಕ್ಷೀಣಿಸಿದ ಕಾರಣ ಅವರನ್ನು ಸಫ್ದರ್‌ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೈಕೋರ್ಟ್ ಆದೇಶದ ನಂತರ, ಅವರ ಚಿಕಿತ್ಸೆಯು ಇನ್ನು ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ಮುಂದುವರಿಯಲಿದೆ.

ಇದನ್ನೂ ಓದಿ: ದೆಹಲಿ ಪ್ರತಿಭಟನಾಕಾರರ ಮೇಲೆ ದೌರ್ಜನ್ಯ; ಉಪವಾಸ ಸತ್ಯಾಗ್ರಹ ಮುಂದುವರಿಸಲು ಸೋನಮ್ ವಾಂಗ್ಚುಕ್ ನಿರ್ಧಾರ

ಇಂದು ಸೋನಮ್ ವಾಂಗ್ಚುಕ್ ಅವರ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವು 24ನೇ ದಿನಕ್ಕೆ ಕಾಲಿಟ್ಟಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಸೇರಿದಂತೆ ಪ್ರತಿಭಟನಾಕಾರರ ಬೇಡಿಕೆಗಳನ್ನು ಈಡೇರಿಸುವವರೆಗೆ ತಾವು ಉಪವಾಸ ಸತ್ಯಾಗ್ರಹವನ್ನು ಹಿಂಪಡೆಯುವುದಿಲ್ಲ ಎಂದು ಅವರು ಪಟ್ಟು ಹಿಡಿದಿದ್ದಾರೆ. ಸುದೀರ್ಘ ಉಪವಾಸದ ಹೊರತಾಗಿಯೂ, ಅವರ ಆರೋಗ್ಯ ಸ್ಥಿತಿಯು ಸ್ಥಿರವಾಗಿದೆ ಎಂದು ಸಫ್ದರ್‌ಜಂಗ್ ಆಸ್ಪತ್ರೆಯ ವೈದ್ಯರು ತಿಳಿಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
Loading...
Unable to load recommendations.
Follow Us