
ನವದೆಹಲಿ, ಮೇ 13: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ (Sonia Gandhi) ಬುಧವಾರ ಗುರುಗಾಂವ್‌ನ ಮೇದಾಂತ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ನಿಯಮಿತ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಎಐಸಿಸಿ ಮಾಜಿ ಅಧ್ಯಕ್ಷೆ ಆಸ್ಪತ್ರೆಯಲ್ಲಿದ್ದಾರೆ ಮತ್ತು ಶೀಘ್ರದಲ್ಲೇ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿರುವುದಾಗಿ ‘ಪಿಟಿಐ’ ಸುದ್ದಿಸಂಸ್ಥೆ ವರದಿ ಮಾಡಿದೆ. ಸೋನಿಯಾ ಗಾಂಧಿ ಅವರು ದಾಖಲಾಗಿರುವ ಬಗ್ಗೆ ಆಸ್ಪತ್ರೆ ಆಡಳಿತದಿಂದ ಇನ್ನೂ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.
ಏತನ್ಮಧ್ಯೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೇರಳ ಪ್ರವಾಸ ರದ್ದುಗೊಳಿಸಿ ಆಸ್ಪತ್ರೆಗೆ ಧಾವಿಸಿದ್ದಾರೆ.
ಕೋಝಿಕ್ಕೋಡ್‌ನಲ್ಲಿ ನಡೆದ ರ್ಯಾಲಿಯಲ್ಲಿ ವರ್ಚುವಲ್ ಆಗಿ ಭಾಗವಹಿಸಿ ಮಾತನಾಡಿದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲಾದ ಕಾರಣ ಸ್ಥಳಕ್ಕೆ ಬರಲಾಗದೇ ಇರುವುದನ್ನು ತಿಳಿಸಿದರು. ‘ನಾನು ಅಲ್ಲಿಗೆ ಬರಬೇಕಿತ್ತು, ಆದರೆ ನನ್ನ ತಾಯಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಮತ್ತು ಮಗನಾಗಿ ನಾನು ಅವರ ಬಗ್ಗೆ ಚಿಂತಿತನಾಗಿದ್ದೇನೆ. ಆದ್ದರಿಂದ ನಾನು ಅವರೊಂದಿಗೆ ಇರಲು ನಿರ್ಧರಿಸಿದೆ. ಕೇರಳದ ಜನರು ಇದನ್ನು ಅರ್ಥಮಾಡಿಕೊಳ್ಳುತ್ತಾರೆಂದು ನನಗೆ ತಿಳಿದಿದೆ ಎಂದು ರಾಹುಲ್ ಗಾಂಧಿ ಹೇಳಿದರು.
ಈ ಹಿಂದೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದಾಗ ಕೇರಳದ ನರ್ಸ್ ಒಬ್ಬರು ಸಾಂತ್ವನ ಹೇಳಿ ಸಮಾಧಾನಪಡಿಸಿದ್ದನ್ನು ರಾಹುಲ್ ಗಾಂಧಿ ನೆನಪಿಸಿಕೊಂಡರು.
ಇದನ್ನೂ ಓದಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
ಈ ಹಿಂದೆ, ಮಾರ್ಚ್ 25 ರಂದು, ಸೋನಿಯಾ ಗಾಂಧಿ ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದರು. ಹವಾಮಾನದಲ್ಲಿನ ದಿಢೀರ್ ಬದಲಾವಣೆಯಿಂದ ಅಸ್ವಸ್ಥಗೊಂಡ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಅವರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 11:30 am, Wed, 13 May 26