ರಾಮಮಂದಿರ ಕಾರ್ಯಕ್ರಮಕ್ಕೆ ಹೋಗದಿರಲು ಸೋನಿಯಾ, ಖರ್ಗೆ, ಅಧೀರ್ ರಂಜನ್ ನಿರ್ಧಾರ
ಅಯೋಧ್ಯೆ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಅಧೀರ್ ರಂಜನ್ ಬರುವುದಿಲ್ಲ ಎಂದು ಹೇಳಿದ್ದಾರೆ.
ದೆಹಲಿ, ಜ.10: ಜನವರಿ 22ರಂದು ನಡೆಯಲಿರುವ ಅಯೋಧ್ಯೆ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, (Sonia Gandhi) ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, (Mallikarjuna Kharge) ಅಧೀರ್ ರಂಜನ್ ಬರುವುದಿಲ್ಲ ಎಂದು ಕಾಂಗ್ರೆಸ್ ಹೇಳಿದೆ. ಹಲವಾರು ಪರ-ವಿರೋಧ ಅಭಿಪ್ರಾಯಗಳ ನಡುವೆ ರಾಮ ಮಂದಿರ ಕಾರ್ಯಕ್ರಮದ ವಿಷಯದಲ್ಲಿ ಕಾಂಗ್ರೆಸ್ ನಿಲುವಿನ ಬಗ್ಗೆ ಊಹಾಪೋಹಗಳಿಗೆ ಕೊನೆ ಹಾಡಿದೆ. ಇಂಡಿಯಾ ಮೈತ್ರಿಕೂಟವು ಈ ಕಾರ್ಯಕ್ರಮದಲ್ಲಿ ಭಾಗವಹಿಸದಿರಲು ನಿರ್ಧಾರಿಸಿದೆ. ಈ ಮಹಾಮಸ್ತಕಾಭಿಷೇಕ ಕಾರ್ಯಕ್ರಮವು ಸ್ಪಷ್ಟವಾಗಿ ಆರ್‌ಎಸ್‌ಎಸ್ ಮತ್ತು ಬಿಜೆಪಿ ಕಾರ್ಯಕ್ರಮವಾಗಿ ಮಾರ್ಪಟ್ಟಿದೆ ಎಂದು ಕಾಂಗ್ರೆಸ್ ಹೇಳಿದೆ.
ನಮ್ಮ ದೇಶದಲ್ಲಿ ಲಕ್ಷಾಂತರ ಜನರು ರಾಮನನ್ನು ಪೂಜಿಸುತ್ತಾರೆ. ಧರ್ಮ ಎಂಬುದು ವೈಯಕ್ತಿಕ ವಿಷಯವಾಗಿದೆ. ಆದರೆ ಆರೆಸ್ಸೆಸ್ ಮತ್ತು ಬಿಜೆಪಿಯವರು ಬಹಳ ಹಿಂದಿನಿಂದಲೂ ಅಯೋಧ್ಯೆಯಲ್ಲಿ ಮಂದಿರವನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ. ಬಿಜೆಪಿ ಮತ್ತು ಆರೆಸ್ಸೆಸ್ ನಾಯಕರಿಂದ ಆಗುತ್ತಿರುವ ಈ ದೇವಾಲಯದ ಉದ್ಘಾಟನೆಯನ್ನು ಚುನಾವಣಾ ಲಾಭಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ ಎಂಬುದು ಬಹಳ ಸ್ಪಷ್ಟವಾಗಿದೆ.
ಇದನ್ನೂ ಓದಿ: ಲೋಕಸಭಾ ಚುನಾವಣೆ ಮೊದಲು ರಾಮಮಂದಿರ ಉದ್ಘಾಟನೆ ಬಿಜೆಪಿಯ ಗಿಮಿಕ್: ಮಮತಾ ಬ್ಯಾನರ್ಜಿ
2019ರ ಸರ್ವೋಚ್ಚ ನ್ಯಾಯಾಲಯದ ತೀರ್ಪಿಗೆ ಬದ್ಧರಾಗಿ ಮತ್ತು ಶ್ರೀರಾಮನನ್ನು ಗೌರವಿಸುವ ಲಕ್ಷಾಂತರ ಜನರ ಭಾವನೆಗಳನ್ನು ಗೌರವಿಸಿ, ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಮತ್ತು ಅಧೀರ್ ರಂಜನ್ ಚೌಧರಿ ಅವರು ಆರೆಸ್ಸೆಸ್ ಮತ್ತು ಬಿಜೆಪಿಯವರು ಆಯೋಜಿಸಿರುವ ಕಾರ್ಯಕ್ರಮದ ಆಹ್ವಾನವನ್ನು ಗೌರವಯುತವಾಗಿ ತಿರಸ್ಕರಿಸಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಕಳೆದ ತಿಂಗಳು, ಕಾಂಗ್ರೆಸ್ ಅಧ್ಯಕ್ಷ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ, ಸೋನಿಯಾ ಗಾಂಧಿ ಮತ್ತು ಲೋಕಸಭೆಯ ಕಾಂಗ್ರೆಸ್ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರಿಗೆ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಲು ಆಹ್ವಾನ ನೀಡಲಾಗಿತ್ತು.
ರಾಮಮಂದಿರ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಏಕೆ ಹಾಜರಾಗುವುದಿಲ್ಲ: 3 ಕಾರಣ
1. ಆರ್‌ಎಸ್‌ಎಸ್ ಮತ್ತು ಬಿಜೆಪಿ ರಾಮಮಂದಿರವನ್ನು ರಾಜಕೀಯ ಉದ್ದೇಶಕ್ಕಾಗಿ ಬಳಸಿಕೊಳ್ಳುತ್ತಿದೆ ಎಂದು ಮೊದಲ ಕಾರಣ ತಿಳಿಸಿದೆ.
ಎರಡನೇ ಕಾರಣ ದೇವಾಲಯವು ಪೂರ್ಣವಾಗಿಲ್ಲ.
ಮೂರನೇ ಕಾರಣ, ರಾಮಮಂದಿರವನ್ನು ಲೋಕಸಭೆ ಚುನಾವಣಾ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ ಹಾಗೂ ಚುನಾವಣೆ ಹತ್ತಿರವಾಗುತ್ತಿದ್ದಂತೆ ಉದ್ಘಾಟನೆ ಮಾಡುತ್ತಿದ್ದಾರೆ ಎಂದು ಹೇಳಿದೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 4:22 pm, Wed, 10 January 24