ಗುಜರಾತ್​ನ ಖೇಡಾದಲ್ಲಿ ಶೋಭಯಾತ್ರೆ ಮೇಲೆ ಕಲ್ಲುತೂರಾಟ; ಉದ್ವಿಗ್ನ ಪರಿಸ್ಥಿತಿ

ಪ್ರತಿ ವರ್ಷ ಖೇಡಾ ಜಿಲ್ಲೆಯ ಶಿವ ದೇವಾಲಯದಿಂದ ಬಹಳ ವಿಜೃಂಭಣೆಯಿಂದ ಮೆರವಣಿಗೆ ಮಾಡಲಾಗುತ್ತದೆ. ಈ ಬಾರಿ ಸಾವಿರಾರು ಭಕ್ತರು ಈ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಮೆರವಣಿಗೆ ತೀನ್ ಬತ್ತಿ ಪ್ರದೇಶಕ್ಕೆ ತಲುಪುತ್ತಿದ್ದಂತೆಯೇ ಕೆಲ ಸಮಾಜ ವಿರೋಧಿಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಜನರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

ಗುಜರಾತ್​ನ ಖೇಡಾದಲ್ಲಿ ಶೋಭಯಾತ್ರೆ ಮೇಲೆ ಕಲ್ಲುತೂರಾಟ; ಉದ್ವಿಗ್ನ ಪರಿಸ್ಥಿತಿ
ಗುಜರಾತ್​ನ ಖೇಡಾದಲ್ಲಿ ಶೋಭಯಾತ್ರೆ ಮೇಲೆ ಕಲ್ಲುತೂರಾಟ; ಉದ್ವಿಗ್ನ ಪರಿಸ್ಥಿತಿ

Updated on: Sep 16, 2023 | 8:55 AM

ಅಹಮದಾಬಾದ್, ಸೆಪ್ಟೆಂಬರ್ 16: ಗುಜರಾತ್‌ನ ಖೇಡಾದಲ್ಲಿ (Gujrat Kheda) ಶುಕ್ರವಾರ ಶಿವನ ಮೆರವಣಿಗೆ ವೇಳೆ ಕಲ್ಲುತೂರಾಟ ನಡೆದಿದ್ದು, ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಪರಿಣಾಮವಾಗಿ ಎರಡು ಸಮುದಾಯಗಳ ನಡುವೆ ವೈಷಮ್ಯ ಉಂಟಾಗಿದ್ದು, ಪೊಲೀಸ್ ತಂಡದ ಮೇಲೂ ದುಷ್ಕರ್ಮಿಗಳು ಕಲ್ಲು ತೂರಾಟ (Stone Pelting) ನಡೆಸಿದ್ದಾರೆ. ಮೂವರು ಪೊಲೀಸರು ಸೇರಿದಂತೆ ಆರು ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಘಟನೆಯ ನಂತರ, ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದ್ದು, ಬಿಗು ಭದ್ರತೆ ವಹಿಸಲಾಗಿದೆ.

ಪ್ರತಿ ವರ್ಷ ಖೇಡಾ ಜಿಲ್ಲೆಯ ಶಿವ ದೇವಾಲಯದಿಂದ ಬಹಳ ವಿಜೃಂಭಣೆಯಿಂದ ಮೆರವಣಿಗೆ ಮಾಡಲಾಗುತ್ತದೆ. ಈ ಬಾರಿ ಸಾವಿರಾರು ಭಕ್ತರು ಈ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಮೆರವಣಿಗೆ ತೀನ್ ಬತ್ತಿ ಪ್ರದೇಶಕ್ಕೆ ತಲುಪುತ್ತಿದ್ದಂತೆಯೇ ಕೆಲ ಸಮಾಜ ವಿರೋಧಿಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಜನರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಎಸ್ಪಿ ರಾಜೇಶ್ ಗಾಧಿಯಾ ಪ್ರಕಾರ, ಕಲ್ಲು ತೂರಾಟದ ಘಟನೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಮತ್ತು ಇಬ್ಬರು ಕಾನ್‌ಸ್ಟೆಬಲ್‌ಗಳು ಸೇರಿದಂತೆ ಸುಮಾರು ಅರ್ಧ ಡಜನ್ ಜನರು ಗಾಯಗೊಂಡಿದ್ದಾರೆ.

ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿರುವ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ಎಸ್ಪಿ ತಿಳಿಸಿದ್ದಾರೆ. ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರು ಪಥಸಂಚಲನ ನಡೆಸುತ್ತಿದ್ದಾರೆ. ಶಾಂತಿ ಕದಡಲು ಯತ್ನಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ: ಕಳೆದ ಕೆಲವು ವರ್ಷಗಳಿಂದ ಪ್ರಧಾನಿ ಮೋದಿಯವರ ಹುಟ್ಟುಹಬ್ಬ ಸಾಮಾನ್ಯ ಜನರಿಗೆ ಹೇಗೆ ವಿಶೇಷ ದಿನವಾಗಿದೆ?

ಯಾವುದೇ ರೀತಿಯ ವದಂತಿಗಳಿಗೆ ಗಮನ ಕೊಡಬೇಡಿ ಎಂದು ಪೊಲೀಸ್ ಅಧಿಕಾರಿಗಳು ಜನರಲ್ಲಿ ಮನವಿ ಮಾಡಿದ್ದಾರೆ. ಯಾರಾದರೂ ತಪ್ಪು ಸುದ್ದಿ ಹಬ್ಬಿಸಿದರೆ ಅವರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ. ಸಾಮಾಜಿಕ ಜಾಲತಾಣಗಳ ಖಾತೆಗಳ ಮೇಲೂ ಸೈಬರ್ ಪೊಲೀಸರು ನಿಗಾ ಇಟ್ಟಿದ್ದಾರೆ. ಪೊಲೀಸರು ಎರಡೂ ಸಮುದಾಯದ ಹಿರಿಯರೊಂದಿಗೆ ಮಾತನಾಡಿ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ. ಆದರೆ, ಶನಿವಾರದಂದು ಯಾವುದೇ ಅಹಿತಕರ ಘಟನೆ ನಡೆದಿರುವ ಸುದ್ದಿಯಿಲ್ಲ. ಆದಾಗ್ಯೂ, ಹಲವಾರು ಪೊಲೀಸ್ ತುಕಡಿಗಳು ಪ್ರದೇಶದಲ್ಲಿ ಗಸ್ತು ತಿರುಗುತ್ತಿವೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Loading...
Unable to load recommendations.
Follow Us