ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ನಾಳೆ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣವಚನ ಸ್ವೀಕಾರ
ಬುಧವಾರ ಬೆಳಗ್ಗೆ ಸಂಭವಿಸಿದ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮೃತಪಟ್ಟಿದ್ದರು. ನಿನ್ನೆ ಅವರ ಅಂತ್ಯಕ್ರಿಯೆ ನೆರವೇರಿತ್ತು. ಅವರಿಂದ ತೆರವಾಗಿದ್ದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಹಾಗೂ ರಾಜ್ಯಸಭಾ ಸದಸ್ಯೆ ಸುನೇತ್ರಾ ಪವಾರ್ ಅವರನ್ನು ಆಯ್ಕೆ ಮಾಡಲಾಗಿದೆ. ಡಿಸಿಎಂ ಆಗಿ ಅಧಿಕಾರ ಸ್ವೀಕರಿಸಲು ಅವರು ಕೂಡ ಒಪ್ಪಿಗೆ ನೀಡಿದ್ದಾರೆ. ಹೀಗಾಗಿ, ನಾಳೆಯೇ ಅವರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ.

ಮುಂಬೈ, ಜನವರಿ 30: ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಮತ್ತು ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ (Sunetra Pawar) ಅವರು ಮಹಾರಾಷ್ಟ್ರದ ಹೊಸ ಉಪಮುಖ್ಯಮಂತ್ರಿಯಾಗಿ ನಾಳೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬುಧವಾರ ಬಾರಾಮತಿಯಲ್ಲಿ ಸಂಭವಿಸಿದ ಅಪಘಾತದಲ್ಲಿ 66 ವರ್ಷದ ಅಜಿತ್ ಪವಾರ್ ಸಾವನ್ನಪ್ಪಿದ್ದರು. ಅವರಿಂದ ತೆರವಾಗಿದ್ದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಸುನೇತ್ರಾ ಪವಾರ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದ್ದು, ನಾಳೆ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸುನೇತ್ರಾ ಪವಾರ್ ಹೆಸರನ್ನು ಅಂತಿಮಗೊಳಿಸಲು ಎನ್‌ಸಿಪಿ ನಾಳೆ ಮಧ್ಯಾಹ್ನ 2 ಗಂಟೆಗೆ ಮುಂಬೈನ ವಿಧಾನ ಭವನದಲ್ಲಿ ಶಾಸಕಾಂಗ ಪಕ್ಷದ ಸಭೆಯನ್ನು ನಡೆಸಲಿದೆ. ಇದರ ನಂತರ ಸಂಜೆ ಸುನೇತ್ರಾ ಪವಾರ್ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಈ ಮೂಲಕ ಅವರು ಮಹಾರಾಷ್ಟ್ರದ ಮೊದಲ ಮಹಿಳಾ ಉಪಮುಖ್ಯಮಂತ್ರಿಯಾಗಲಿದ್ದಾರೆ.
ಸುನೇತ್ರಾ ಪವಾರ್ ಪ್ರಸ್ತುತ ರಾಜ್ಯಸಭಾ ಸದಸ್ಯೆಯಾಗಿದ್ದು, ಮಹಾರಾಷ್ಟ್ರ ವಿಧಾನಸಭೆಯ ಎರಡೂ ಸದನಗಳ ಸದಸ್ಯರಲ್ಲ. ಆದರೂ ಅವರ ಹೆಸರನ್ನು ಆಯ್ಕೆ ಮಾಡಲಾಗಿದೆ.
ಇದನ್ನೂ ಓದಿ: ಅಜಿತ್ ಪವಾರ್ ಪಕ್ಷದ ಚಿಹ್ನೆಯಾದ ಗಡಿಯಾರವೇ ಅವರ ಸಾವಿಗೆ ಸಾಕ್ಷಿಯಾಯ್ತು!
ಹಾಗೇ, ಪ್ರಫುಲ್ ಪಟೇಲ್ ಅವರನ್ನು ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ. ಅಜಿತ್ ಪವಾರ್ ಮಹಾರಾಷ್ಟ್ರದ ಅತ್ಯಂತ ದೀರ್ಘಾವಧಿಯ ಉಪಮುಖ್ಯಮಂತ್ರಿಯಾಗಿದ್ದರು ಮತ್ತು ದೇವೇಂದ್ರ ಫಡ್ನವೀಸ್ ಸರ್ಕಾರದಲ್ಲಿ ಹಣಕಾಸು, ಯೋಜನೆ ಮತ್ತು ಅಬಕಾರಿ ಇಲಾಖೆಗಳನ್ನು ಅವರು ನಿರ್ವಹಿಸಿದ್ದರು.
ಇದನ್ನೂ ಓದಿ: ಎನ್‌ಸಿಪಿ ಮತ್ತೆ ವಿಲೀನವಾಗುತ್ತಾ? ಅಜಿತ್ ಪವಾರ್ ಕೊನೆಯ ಆಸೆಯ ಬಗ್ಗೆ ಶುರುವಾಯ್ತು ಚರ್ಚೆ
ಮಹಾರಾಷ್ಟ್ರದ ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವನ್ನಪ್ಪಿದ್ದರು. ಅಜಿತ್ ಪವಾರ್ ಅವರ ವಿಷಯಕ್ಕೆ ಬಂದರೆ, ಅವರು ಮತ್ತು ಇತರ ನಾಲ್ವರು ಪ್ರಯಾಣಿಸುತ್ತಿದ್ದ ವಿಮಾನವು ಪುಣೆಯ ಬಾರಾಮತಿ ವಿಮಾನ ನಿಲ್ದಾಣದ ಬಳಿ ಅಪಘಾತಕ್ಕೀಡಾಗಿತ್ತು. ಗುರುವಾರ ಬಾರಾಮತಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್, ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್, ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಮತ್ತು ಇತರರು ಸೇರಿದಂತೆ ಎಲ್ಲಾ ಉನ್ನತ ನಾಯಕರ ಸಮ್ಮುಖದಲ್ಲಿ ಅವರ ಅಂತ್ಯಕ್ರಿಯೆ ನಡೆಯಿತು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:41 pm, Fri, 30 January 26
