Justice Surya Kant: ಸುಪ್ರೀಂ ಕೋರ್ಟ್ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ನ. 24ಕ್ಕೆ ನ್ಯಾ. ಸೂರ್ಯಕಾಂತ್ ಅಧಿಕಾರ ಸ್ವೀಕಾರ
ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಭಾರತದ ಸುಪ್ರೀಂ ಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ನವೆಂಬರ್ 24ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ರಾಷ್ಟ್ರಪತಿಗಳು ಇಂದು ಸುಪ್ರೀಂ ಕೋರ್ಟ್‌ನ ಎರಡನೇ ಹಿರಿಯ ನ್ಯಾಯಾಧೀಶರಾದ ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನು ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಿದ್ದಾರೆ. ಪ್ರಸ್ತುತ ಸಿಜೆಐ ಆಗಿರುವ ಬಿ.ಆರ್. ಗವಾಯಿ ಅವರು ನವೆಂಬರ್ 23ರಂದು ನಿವೃತ್ತರಾಗಲಿದ್ದಾರೆ.

ನವದೆಹಲಿ, ಅಕ್ಟೋಬರ್ 30: ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಇಂದು (ಗುರುವಾರ) ಸುಪ್ರೀಂ ಕೋರ್ಟ್‌ನ ಎರಡನೇ ಹಿರಿಯ ನ್ಯಾಯಾಧೀಶರಾದ ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನು ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಿದ್ದಾರೆ. ನವೆಂಬರ್ 23ರಂದು ಭಾರತದ ಹಾಲಿ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ (BR Gavai) ಅವರು ನಿವೃತ್ತರಾಗಲಿದ್ದಾರೆ. ಇದಾದ ನಂತರ, ನವೆಂಬರ್ 24ರಂದು ನ್ಯಾಯಮೂರ್ತಿ ಸೂರ್ಯಕಾಂತ್ (Justice Surya Kant) ಸಿಜೆಐ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಈ ಬಗ್ಗೆ ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ಅರ್ಜುನ್ ರಾಮ್ ಮೇಘವಾಲ್ ದೃಢಪಡಿಸಿದ್ದಾರೆ. “ಭಾರತದ ಸಂವಿಧಾನವು ನೀಡಿದ ಅಧಿಕಾರವನ್ನು ಚಲಾಯಿಸುವ ಮೂಲಕ, ಭಾರತದ ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಾದ ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನು ನವೆಂಬರ್ 24ರಿಂದ ಜಾರಿಗೆ ಬರುವಂತೆ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ರಾಷ್ಟ್ರಪತಿಗಳು ನೇಮಕ ಮಾಡಿದ್ದಾರೆ” ಎಂದು ಪೋಸ್ಟ್ ಮಾಡಿದ್ದಾರೆ.
ಇದನ್ನೂ ಓದಿ: ‘ಆಧಾರ್ ಪೌರತ್ವದ ದಾಖಲೆಯಲ್ಲ’; ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಬೆಂಬಲ
53ನೇ ಸಿಜೆಐ ಆಗಿ, ನ್ಯಾಯಮೂರ್ತಿ ಸೂರ್ಯಕಾಂತ್ ಸುಮಾರು 15 ತಿಂಗಳುಗಳ ಕಾಲ ಸಿಜೆಐ ಆಗಿ ಕಾರ್ಯನಿರ್ವಹಿಸಲಿದ್ದಾರೆ. ಫೆಬ್ರವರಿ 9, 2027ರಂದು 65 ವರ್ಷಗಳನ್ನು ಪೂರೈಸಿದ ನಂತರ ಅವರು ಅಧಿಕಾರದಿಂದ ಕೆಳಗಿಳಿಯಲಿದ್ದಾರೆ.
In exercise of the powers conferred by the Constitution of India, the President is pleased to appoint Shri Justice Surya Kant, Judge of the Supreme Court of India as the Chief Justice of India with effect from 24th November, 2025.
I convey my heartiest congratulations and best… pic.twitter.com/3X0XFd1Uc9
— Arjun Ram Meghwal (@arjunrammeghwal) October 30, 2025
ನ್ಯಾಯಮೂರ್ತಿ ಸೂರ್ಯಕಾಂತ್ ಯಾರು?:
ಹರಿಯಾಣದ ಹಿಸ್ಸಾರ್‌ನಲ್ಲಿ ಫೆಬ್ರವರಿ 10, 1962ರಂದು ಜನಿಸಿದ ನ್ಯಾಯಮೂರ್ತಿ ಸೂರ್ಯಕಾಂತ್, ಮೇ 24, 2019ರಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಯಾದರು. ಅವರು 370ನೇ ವಿಧಿ ರದ್ದತಿ, ವಾಕ್ ಸ್ವಾತಂತ್ರ್ಯ, ಪ್ರಜಾಪ್ರಭುತ್ವ, ಭ್ರಷ್ಟಾಚಾರ, ಪರಿಸರ ಮತ್ತು ಲಿಂಗ ಸಮಾನತೆಯ ಕುರಿತು ಹಲವಾರು ಐತಿಹಾಸಿಕ ತೀರ್ಪುಗಳನ್ನು ನೀಡಿದ ಪೀಠಗಳ ಭಾಗವಾಗಿದ್ದಾರೆ.
ಇದನ್ನೂ ಓದಿ: ನಿವೃತ್ತಿಯ ನಂತರ ಯಾವುದೇ ಸರ್ಕಾರಿ ಹುದ್ದೆ ಸ್ವೀಕರಿಸುವುದಿಲ್ಲ; ಸಿಜೆಐ ಗವಾಯಿ ಘೋಷಣೆ
ನ್ಯಾಯಮೂರ್ತಿ ಸೂರ್ಯ ಕಾಂತ್ ವಸಾಹತುಶಾಹಿ ಯುಗದ ದೇಶದ್ರೋಹ ಕಾನೂನನ್ನು ಸ್ಥಗಿತಗೊಳಿಸಿದ ಐತಿಹಾಸಿಕ ಪೀಠದ ಭಾಗವಾಗಿದ್ದರು. ಸರ್ಕಾರದ ಪರಿಶೀಲನೆಯವರೆಗೆ ಅದರ ಅಡಿಯಲ್ಲಿ ಯಾವುದೇ ಹೊಸ ಎಫ್‌ಐಆರ್‌ಗಳನ್ನು ದಾಖಲಿಸಬಾರದು ಎಂದು ನಿರ್ದೇಶಿಸಿದ್ದರು. ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ಸೇರಿದಂತೆ ಬಾರ್ ಅಸೋಸಿಯೇಷನ್‌ಗಳಲ್ಲಿ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡುವಂತೆ ನಿರ್ದೇಶಿಸುವ ಮೂಲಕ ಅವರು ಇತಿಹಾಸ ನಿರ್ಮಿಸಿದರು.
1967ರ ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ತೀರ್ಪನ್ನು ರದ್ದುಗೊಳಿಸಿದ 7 ನ್ಯಾಯಾಧೀಶರ ಪೀಠದಲ್ಲಿ ಅವರು ಕೂಡ ಇದ್ದರು. ಇದು ಸಂಸ್ಥೆಯ ಅಲ್ಪಸಂಖ್ಯಾತ ಸ್ಥಾನಮಾನದ ಮರುಪರಿಶೀಲನೆಗೆ ದಾರಿ ಮಾಡಿಕೊಟ್ಟಿತು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




