ಸನಾತನ ಧರ್ಮ ಕುರಿತ ವಿವಾದ; ತಮಿಳುನಾಡು ಡಿಸಿಎಂ ಉದಯನಿಧಿ ಸ್ಟಾಲಿನ್‌ಗೆ ಸುಪ್ರೀಂ ಕೋರ್ಟ್ ರಿಲೀಫ್

|

Updated on: Jan 28, 2025 | 3:25 PM

ಸನಾತನ ಧರ್ಮದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ವಿರುದ್ಧದ ಅರ್ಜಿಗಳನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ತಾವು ನೀಡಿದ್ದ ವಿವಾದಾತ್ಮಕ ಹೇಳಿಕೆಗಳ ಕುರಿತು ತಮ್ಮ ವಿರುದ್ಧ ದಾಖಲಾಗಿರುವ ವಿವಿಧ ಎಫ್‌ಐಆರ್‌ಗಳು ಮತ್ತು ದೂರುಗಳನ್ನು ಕ್ರೋಢೀಕರಿಸಲು ನಿರ್ದೇಶನಗಳನ್ನು ಕೋರಿ ಉದಯನಿಧಿ ಸ್ಟಾಲಿನ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆಗೆ ಒಳಪಡಿಸಿತ್ತು.

ಸನಾತನ ಧರ್ಮ ಕುರಿತ ವಿವಾದ; ತಮಿಳುನಾಡು ಡಿಸಿಎಂ ಉದಯನಿಧಿ ಸ್ಟಾಲಿನ್‌ಗೆ ಸುಪ್ರೀಂ ಕೋರ್ಟ್ ರಿಲೀಫ್
Udhayanidhi Stalin
Follow us on

ನವದೆಹಲಿ: ಕಳೆದ ವರ್ಷ ತಮ್ಮ ಭಾಷಣದಲ್ಲಿ ‘ಸನಾತನ ಧರ್ಮ’ದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರ ಪುತ್ರ ಡಿಸಿಎಂ ಉದಯನಿಧಿ ಸ್ಟಾಲಿನ್ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳುವಂತೆ ಕೋರಿ ಸಲ್ಲಿಸಲಾದ ಮೂರು ರಿಟ್ ಅರ್ಜಿಗಳನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ. ಸಂವಿಧಾನದ 32ನೇ ವಿಧಿಯ ಅಡಿಯಲ್ಲಿ ರಿಟ್ ಅರ್ಜಿಗಳನ್ನು ಹೇಗೆ ನಿರ್ವಹಿಸಬಹುದು ಎಂದು ನ್ಯಾಯಮೂರ್ತಿ ಬೇಲಾ ಎಂ. ತ್ರಿವೇದಿ ಮತ್ತು ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ ಅವರನ್ನೊಳಗೊಂಡ ನ್ಯಾಯಪೀಠ ಕೇಳಿದೆ.

2023ರ ಸೆಪ್ಟೆಂಬರ್ ತಿಂಗಳಲ್ಲಿ ಚೆನ್ನೈನಲ್ಲಿ ನಡೆದ ಸಮ್ಮೇಳನವೊಂದರಲ್ಲಿ ಮಾತನಾಡಿದ ಉದಯನಿಧಿ ಸ್ಟಾಲಿನ್, ‘ಸನಾತನ ಧರ್ಮ’ ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ವಿರುದ್ಧವಾಗಿದೆ. ಸನಾತನ ಧರ್ಮವನ್ನು ಮಲೇರಿಯಾ ಮತ್ತು ಡೆಂಗ್ಯೂನಂತೆ ನಿರ್ಮೂಲನೆ ಮಾಡಬೇಕು ಎಂದು ಹೇಳಿದ್ದರು.

ಇದನ್ನೂ ಓದಿ: ಸನಾತನ ಧರ್ಮ ಕುರಿತ ವಿವಾದಾತ್ಮಕ ಹೇಳಿಕೆ; ಸಚಿವ ಉದಯನಿಧಿ ಸ್ಟಾಲಿನ್ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್

ಕಾನೂನಿನ ಅಡಿಯಲ್ಲಿ ಲಭ್ಯವಿರುವ ಪರಿಹಾರಗಳನ್ನು ಪಡೆಯುವ ಸ್ವಾತಂತ್ರ್ಯದೊಂದಿಗೆ ಅರ್ಜಿಯನ್ನು ಹಿಂಪಡೆಯಲಾಗಿದೆ ಎಂದು ರಿಟ್ ಅರ್ಜಿಗಳನ್ನು ವಜಾಗೊಳಿಸಲಾಯಿತು. ತಮ್ಮ ಭಾಷಣದ ಕುರಿತು ತಮ್ಮ ವಿರುದ್ಧ ದಾಖಲಾಗಿರುವ ವಿವಿಧ ಎಫ್‌ಐಆರ್‌ಗಳು ಮತ್ತು ದೂರುಗಳನ್ನು ಕ್ರೋಢೀಕರಿಸಲು ನಿರ್ದೇಶನಗಳನ್ನು ಕೋರಿ ಉದಯನಿಧಿ ಸ್ಟಾಲಿನ್ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆಗೆ ಒಳಪಡಿಸಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ