ಯಡಿಯೂರಪ್ಪ, ಮುರುಗೇಶ್ ನಿರಾಣಿ ವಿರುದ್ಧ ಡಿನೋಟಿಫಿಕೇಷನ್ ಪ್ರಕರಣ: ದೀಪಾವಳಿ ಬಳಿಕ ಸುಪ್ರೀಂಕೋರ್ಟ್ ವಿಚಾರಣೆ

| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Oct 14, 2022 | 12:28 PM

ದೇವನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ 26 ಎಕರೆ ಡಿನೋಟಿಫೈ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಅಲಂ ಪಾಷಾ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.

ಯಡಿಯೂರಪ್ಪ, ಮುರುಗೇಶ್ ನಿರಾಣಿ ವಿರುದ್ಧ ಡಿನೋಟಿಫಿಕೇಷನ್ ಪ್ರಕರಣ: ದೀಪಾವಳಿ ಬಳಿಕ ಸುಪ್ರೀಂಕೋರ್ಟ್ ವಿಚಾರಣೆ
ಬಿ.ಎಸ್.ಯಡಿಯೂರಪ್ಪ ಮತ್ತು ಸುಪ್ರೀಂಕೋರ್ಟ್
Follow us on

ದೆಹಲಿ: ಬಿಜೆಪಿ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (BS Yediyurappa) ಹಾಗೂ ಸಚಿವ ಮುರುಗೇಶ್ ನಿರಾಣಿ (Murugesh Nirani) ವಿರುದ್ಧದ ಡಿನೋಟಿಫಿಕೇಷನ್ (Denotification) ಪ್ರಕರಣವನ್ನು ತಕ್ಷಣ ವಿಚಾರಣೆಗೆ ಕೈಗೆತ್ತಿಕೊಳ್ಳಲು ಸುಪ್ರೀಂಕೋರ್ಟ್ (Supreme Court of India) ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್  (UU Lalit) ನಿರಾಕರಿಸಿದರು. ದೇವನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ 26 ಎಕರೆ ಡಿನೋಟಿಫೈ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಅಲಂ ಪಾಷಾ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಮುಂದಿನ ತಿಂಗಳು ಮುಖ್ಯ ನ್ಯಾಯಮೂರ್ತಿಗಳು ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ ತಮ್ಮ ಹೊರತಾದ ಮತ್ತೊಂದು ಪೀಠದಲ್ಲಿ ವಿಚಾರಣೆ ನಡೆಸಲು ಪಟ್ಟಿ ಮಾಡುವಂತೆ ಸೂಚಿಸಿದರು. ದೀಪಾವಳಿಯ ನಂತರ ಬೇರೊಂದು ಪೀಠದಲ್ಲಿ ಅರ್ಜಿಯ ವಿಚಾರಣೆ ಆರಂಭವಾಗಲಿದೆ.

ತನಿಖೆಗೆ ಸುಪ್ರೀಂಕೋರ್ಟ್​ ಮಧ್ಯಂತರ ತಡೆ

ಮತ್ತೊಂದು ಪ್ರಕರಣದಲ್ಲಿ ಸುಪ್ರೀಂಕೋರ್ಟ್​ ಯಡಿಯೂರಪ್ಪ ಅವರಿಗೆ ತುಸು ನೆಮ್ಮದಿ ನೀಡಿದೆ. ಬೆಂಗಳೂರಿನ ಕೊನದಾಸಪುರದಲ್ಲಿ ಬಿಡಿಎ ಫ್ಲಾಟ್ ನಿರ್ಮಾಣದಲ್ಲಿ ಅಕ್ರಮ ನಡೆದಿರುವ ಆರೋಪಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ (BS Yediyurappa) ವಿರುದ್ಧದ ತನಿಖೆಗೆ ಸುಪ್ರೀಂಕೋರ್ಟ್ (Supreme Court) ಮಧ್ಯಂತರ ತಡೆ ನೀಡಿದೆ. ಯಡಿಯೂರಪ್ಪ ಜನಪ್ರತಿನಿಧಿಯಾಗಿರುವ ಹಿನ್ನೆಲೆಯಲ್ಲಿ ತನಿಖೆಗೆ ತಡೆ ನೀಡಬೇಕು. ತನಿಖೆಗೆ ರಾಜ್ಯಪಾಲರ ಪೂರ್ವಾನುಮತಿ ಅಗತ್ಯ ಎಂದು ಬಿಎಸ್​ವೈ ಪರ ವಕೀಲರು ಇಂದು ಸುಪ್ರೀಂಕೋರ್ಟ್​ನಲ್ಲಿ ವಾದಿಸಿದ್ದರು.

ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠವು ತನಿಖೆಗೆ ತಡೆ ಆದೇಶ ನೀಡಿತು. ‘ತಮ್ಮ ವಿರುದ್ಧದ ಭ್ರಷ್ಟಾಚಾರ ಆರೋಪದ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯಪಾಲರ ಪೂರ್ವಾನುಮತಿ ಇರಲಿಲ್ಲ. ಹಾಗಿದ್ದರೂ ತನಿಖೆ ನಡೆಸುವಂತೆ ಕರ್ನಾಟಕ ಹೈಕೋರ್ಟ್‌ ಆದೇಶ ಮಾಡಿದೆ. ಇದಕ್ಕೆ ತಡೆ ನೀಡಬೇಕು’ ಎಂದು ಯಡಿಯೂರಪ್ಪ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿದ್ದರು.

ಹಾಲಿ ಸಚಿವ ಎಸ್.ಟಿ.ಸೋಮಶೇಖರ್ ಈ ಹಿಂದೆ ಬಿಡಿಎ ಅಧ್ಯಕ್ಷರಾಗಿದ್ದ ಆಗಿದ್ದ ವೇಳೆ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣದಲ್ಲಿ ಯಡಿಯೂರಪ್ಪ ಪುತ್ರ ವಿಜಯೇಂದ್ರ ಕೂಡ ಆರೋಪಿಯಾಗಿದ್ದಾರೆ. ಒಟ್ಟು 9 ಮಂದಿ ವಿರುದ್ಧ ತನಿಖೆಗೆ ಹೈಕೋರ್ಟ್ ಆದೇಶ ಮಾಡಿದೆ. ಪ್ರತಿವಾದಿಗಳಿಗೆ ನೊಟೀಸ್ ಜಾರಿ ಮಾಡಿರುವ ಸುಪ್ರೀಂಕೋರ್ಟ್ 4 ವಾರಗಳ ಒಳಗೆ ಉತ್ತರಿಸುವಂತೆ ಸೂಚನೆ ನೀಡಿದೆ. ಅದೇ ವೇಳೆ ವಿಜಯೇಂದ್ರ ಸೇರಿ ಉಳಿದವರ ವಿರುದ್ಧ ತನಿಖೆ ಮುಂದುವರಿಯಲು ಸುಪ್ರೀಂಕೋರ್ಟ್ ಯಾವುದೇ ತಡೆ ನೀಡಿಲ್ಲ.

ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಅವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದ ಪ್ರಕರಣದಲ್ಲಿ ಹೈಕೋರ್ಟ್ ಸೂಚನೆ ಮೇರೆಗೆ ಲೋಕಾಯುಕ್ತಕ್ಕೆ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಸೂಚಿಸಲಾಗಿತ್ತು.