
ನವದೆಹಲಿ, ಅಕ್ಟೋಬರ್ 10: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿರುದ್ಧ ದೆಹಲಿಯಲ್ಲಿ ಇಂದು ಪ್ರತಿಭಟನೆ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಮೆಟ್ರೋ, ರೈಲು ಸಂಚಾರವನ್ನು ನಿರ್ಬಂಧಿಸಲಾಗಿತ್ತು. ಈ ಕುರಿತು ನಿನ್ನೆಯೇ ಪೊಲೀಸ್ ಇಲಾಖೆಯನ್ನು ತರಾಟೆಗೆ ತೆಗೆದುಕೊಂಡಿದ್ದ ಸುಪ್ರೀಂ ಕೋರ್ಟ್ ‘ನೊಣವನ್ನು ಕೊಲ್ಲಲು ಸುತ್ತಿಗೆ ಅಗತ್ಯವಿದೆಯೇ? ಈ ರೀತಿಯ ನಿರ್ಬಂಧಗಳಿಗೆ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ’ ಎಂದು ಹೇಳಿತ್ತು. ಆದರೂ ಇಂದು ನಿರ್ಬಂಧ ಹೇರಿದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲಂಘಿಸಲಾಗಿದೆ ಎಂದು ಕೇಸ್ ದಾಖಲಾಗಿದೆ. ಈ ಪ್ರಕರಣದ ವಿಚಾರಣೆ ನಡೆಸಲು ಭಾನುವಾರವೂ ಸುಪ್ರೀಂ ಕೋರ್ಟ್ ಕಾರ್ಯ ನಿರ್ವಹಿಸಲಿದೆ.
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ) ಹಾಗೂ ವಿರೋಧ ಪಕ್ಷಗಳು ಇಂದು ಹಮ್ಮಿಕೊಂಡಿದ್ದ ಪ್ರತಿಭಟನೆಯ ಹಿನ್ನೆಲೆಯಲ್ಲಿ, ಸಾರ್ವಜನಿಕ ಸಾರಿಗೆಯನ್ನು ಸಂಪೂರ್ಣವಾಗಿ ಬಂದ್ ಮಾಡಬಾರದು ಎಂದು ಅಕ್ಟೋಬರ್ 9ರಂದು ಸುಪ್ರೀಂ ಕೋರ್ಟ್ ನೀಡಿದ್ದ ಸ್ಪಷ್ಟ ಆದೇಶವನ್ನು ಉಲ್ಲಂಘಿಸಲಾಗಿದೆ. ಮೆಟ್ರೋ ನಿಲ್ದಾಣಗಳನ್ನು ಮುಚ್ಚಿ ಹಾಗೂ ರೈಲು ಸೇವೆಗಳನ್ನು ರದ್ದುಗೊಳಿಸಿ ನ್ಯಾಯಾಲಯದ ಆದೇಶಕ್ಕೆ ಅಪಚಾರ ಎಸಗಲಾಗಿದೆ ಎಂದು ಆರೋಪಿಸಿ ಸಲ್ಲಿಕೆಯಾಗಿರುವ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಭಾನುವಾರ ವಿಶೇಷ ಕಲಾಪ ನಡೆಸಲಿದೆ.
ನ್ಯಾಯಮೂರ್ತಿಗಳಾದ ಜೋಯ್‌ಮಲ್ಯ ಬಾಗ್ಚಿ ಮತ್ತು ವಿ. ಮೋಹನಾ ಅವರನ್ನೊಳಗೊಂಡ ವಿಶೇಷ ಪೀಠವು ಈ ಅರ್ಜಿಯ ವಿಚಾರಣೆ ನಡೆಸಲಿದೆ. ಸುಪ್ರೀಂ ಕೋರ್ಟ್ ಆದೇಶವನ್ನು ಉದ್ದೇಶಪೂರ್ವಕವಾಗಿ ಧಿಕ್ಕರಿಸಿದ್ದಾರೆ ಎಂದು ಆರೋಪಿಸಿ ವಕೀಲ ಶೈಲೇಂದ್ರ ಮಣಿ ತ್ರಿಪಾಠಿ ಅವರು ಈ ನ್ಯಾಯಾಂಗ ನಿಂದನೆ ಅರ್ಜಿಯನ್ನು ದಾಖಲಿಸಿದ್ದಾರೆ. ಕೇಂದ್ರ ಗೃಹ ಕಾರ್ಯದರ್ಶಿ ಗೋವಿಂದ್ ಮೋಹನ್ ಐಎಎಸ್. ದೆಹಲಿ ಪೊಲೀಸ್ ಆಯುಕ್ತ ಅನುರಾಗ್ ಕುಮಾರ್ ಐಪಿಎಸ್ ಮತ್ತು ದೆಹಲಿ ಮೆಟ್ರೋ ರೈಲು ನಿಗಮದ ಅಧ್ಯಕ್ಷೆ ಡಿ. ತಾರಾ ಐಎಎಸ್ ಅವರನ್ನು ಈ ಅರ್ಜಿಯಲ್ಲಿ ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.
BREAKING: #SupremeCourt to hold a special Sunday hearing tomorrow in a contempt plea filed by Shailendra Mani Tripathi against Union Home Secretary Govind Mohan over alleged non-compliance with Supreme Court orders concerning the Delhi protests.
A special Bench of Justices Joymalya Bagchi and V Mohana will hear the matter on October 11.
— Bar and Bench (@barandbench) October 10, 2026
ಆದೇಶದ ಸ್ಪಷ್ಟ ಉಲ್ಲಂಘನೆ:
ದೆಹಲಿ ನಿವಾಸಿಗಳಿಗೆ ತೊಂದರೆಯಾಗದಂತೆ ಸಾರ್ವಜನಿಕ ಸಾರಿಗೆಯನ್ನು ನಿಯಂತ್ರಿತ ರೀತಿಯಲ್ಲಿ ಕಾರ್ಯಾಚರಣೆ ಮಾಡಲು ಅನುಮತಿ ನೀಡಬೇಕೆಂದು ಸುಪ್ರೀಂ ಕೋರ್ಟ್ ಆದೇಶಿಸಿದ್ದರೂ, ಅಧಿಕಾರಿಗಳು ನಿಲ್ದಾಣಗಳನ್ನು ಮನಬಂದಂತೆ ಮುಚ್ಚುವುದನ್ನು ಮುಂದುವರಿಸಿದ್ದಾರೆ ಎಂದು ಅರ್ಜಿದಾರರು ದೂರಿದ್ದಾರೆ. ಮುಂದುವರಿದಿರುವ ಈ ನಿರ್ಬಂಧಗಳು ರಾಷ್ಟ್ರದ ರಾಜಧಾನಿಯಲ್ಲಿ ಜನಜೀವನವನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸಿವೆ ಮತ್ತು ಪ್ರಯಾಣಿಕರಿಗೆ ತೀವ್ರ ತೊಂದರೆಯನ್ನುಂಟು ಮಾಡಿವೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.
ಇದನ್ನೂ ಓದಿ: ದೆಹಲಿಯಲ್ಲಿ ಪ್ರತಿಭಟನೆ ವೇಳೆ ಇಡೀ ದಿನ ಏನೇನಾಯ್ತು? ಇಂದು ಟ್ರಾಫಿಕ್ ಸಂಚಾರ ಹೇಗಿತ್ತು? ಇಲ್ಲಿದೆ ಪೂರ್ತಿ ಮಾಹಿತಿ
‘ಎಂ.ಎ. ಬೇಬಿ ವರ್ಸಸ್ ಯೂನಿಯನ್ ಆಫ್ ಇಂಡಿಯಾ’ ಪ್ರಕರಣದಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ್, ನ್ಯಾಯಮೂರ್ತಿ ಜೋಯ್‌ಮಲ್ಯ ಬಾಗ್ಚಿ ಮತ್ತು ನ್ಯಾಯಮೂರ್ತಿ ವಿ. ಮೋಹನಾ ಅವರನ್ನೊಳಗೊಂಡ ಪೀಠವು ಅಕ್ಟೋಬರ್ 9 ರಂದು ಈ ಕುರಿತು ಆದೇಶ ಹೊರಡಿಸಿತ್ತು. ಜಂತರ್ ಮಂತರ್ ಪ್ರತಿಭಟನೆಯ ಹಿನ್ನೆಲೆಯಲ್ಲಿ 57 ಮೆಟ್ರೋ ನಿಲ್ದಾಣಗಳನ್ನು ಮುಚ್ಚುವಂತೆ ದೆಹಲಿ ಪೊಲೀಸರು ಡಿಎಂಆರ್‌ಸಿಗೆ ನೀಡಿದ್ದ ಸೂಚನೆ ಹಾಗೂ ನವದೆಹಲಿ ಮತ್ತು ಹಜರತ್ ನಿಜಾಮುದ್ದೀನ್ ರೈಲು ನಿಲ್ದಾಣಗಳಿಗೆ ಬರಬೇಕಿದ್ದ ಮೇಲ್ ಮತ್ತು ಎಕ್ಸ್‌ಪ್ರೆಸ್ ರೈಲುಗಳ ರದ್ದತಿಯ ಬಗ್ಗೆ ನ್ಯಾಯಾಲಯವು ಗಂಭೀರವಾಗಿ ಗಮನಹರಿಸಿತ್ತಲ್ಲದೆ, ಇದು ಸಾರಿಗೆ ಸೇವೆಗಳ ಮೇಲಿನ ಸಂಪೂರ್ಣ ನಿಷೇಧಕ್ಕೆ ಸಮನಾಗಿದ್ದು ಅತಿರೇಕದ ಕ್ರಮ ಎಂದು ಅಭಿಪ್ರಾಯಪಟ್ಟಿತ್ತು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ