
ನವದೆಹಲಿ, ಡಿಸೆಂಬರ್ 29: ಉನ್ನಾವ್ (Unnao Case) ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರ ಶಿಕ್ಷೆಯನ್ನು ಅಮಾನತುಗೊಳಿಸಿದ ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಇಂದು ತಡೆ ನೀಡಿದೆ. ಈ ಮೂಲಕ ಕುಲದೀಪ್ ಸೆಂಗಾರ್‌ಗೆ ಭಾರೀ ಹಿನ್ನಡೆಯಾಗಿದೆ. ದೆಹಲಿ ಹೈಕೋರ್ಟ್ ತೀರ್ಪನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ಈ ಹಿಂದಿನ ಶಿಕ್ಷೆಯನ್ನು ಎತ್ತಿಹಿಡಿದಿದೆ. ಹೈಕೋರ್ಟ್ ಆದೇಶದ ವಿರುದ್ಧ ಸಿಬಿಐ ಸಲ್ಲಿಸಿದ ಮೇಲ್ಮನವಿಯ ಮೇರೆಗೆ ಸುಪ್ರೀಂ ಕೋರ್ಟ್ ಸೆಂಗಾರ್‌ಗೆ ನೋಟಿಸ್ ನೀಡಿದೆ.
ಕುಲದೀಪ್ ಸೆಂಗಾರ್ ಅವರ ಶಿಕ್ಷೆಯನ್ನು ಅಮಾನತುಗೊಳಿಸಿದ ಡಿಸೆಂಬರ್ 23ರ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿದ ಅರ್ಜಿಯನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ಅಗಸ್ಟೀನ್ ಜಾರ್ಜ್ ಮಸಿಹ್ ಅವರನ್ನೊಳಗೊಂಡ ಮೂವರು ನ್ಯಾಯಾಧೀಶರ ಪೀಠವು ವಿಚಾರಣೆ ನಡೆಸಿತು.
ಇದನ್ನೂ ಓದಿ: ಉನ್ನಾವ್ ಅತ್ಯಾಚಾರ ಪ್ರಕರಣ; ಮಾಜಿ ಬಿಜೆಪಿ ಶಾಸಕ ಕುಲದೀಪ್ ಸೆಂಗಾರ್‌ಗೆ ಬಿಗ್ ರಿಲೀಫ್
2019ರ ಡಿಸೆಂಬರ್‌ನಲ್ಲಿ ಉನ್ನಾವ್ ಅತ್ಯಾಚಾರ ಪ್ರಕರಣದಲ್ಲಿ ಕುಲದೀಪ್ ಸಿಂಗ್ ಸೆಂಗಾರ್ ತಪ್ಪಿತಸ್ಥರಾಗಿದ್ದು, ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ನ್ಯಾಯಾಲಯವು ಅವರಿಗೆ 25 ಲಕ್ಷ ರೂ. ದಂಡವನ್ನೂ ವಿಧಿಸಿದೆ. ಡಿಸೆಂಬರ್ 23ರಂದು ದೆಹಲಿ ಹೈಕೋರ್ಟ್ ಅವರ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿತ್ತು. ನ್ಯಾಯಮೂರ್ತಿ ಸುಬ್ರಮಣ್ಯಂ ಪ್ರಸಾದ್ ಮತ್ತು ನ್ಯಾಯಮೂರ್ತಿ ಹರೀಶ್ ವೈದ್ಯನಾಥನ್ ಶಂಕರ್ ಅವರನ್ನೊಳಗೊಂಡ ವಿಭಾಗೀಯ ಪೀಠವು ಈ ಆದೇಶವನ್ನು ನೀಡಿತ್ತು.
ಈ ಹಿನ್ನೆಲೆಯಲ್ಲಿ ಕುಲದೀಪ್ ಸೆಂಗಾರ್‌ಗೆ ಪರಿಹಾರ ನೀಡುವ ದೆಹಲಿ ಹೈಕೋರ್ಟ್‌ನ ನಿರ್ಧಾರಕ್ಕೆ ತಡೆ ನೀಡುವಂತೆ ಕೋರಿ ಕೇಂದ್ರ ತನಿಖಾ ದಳ (ಸಿಬಿಐ) ಶುಕ್ರವಾರ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ