Mekedatu Project: ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು; ನಾಳೆಯ ಸಿಎಂ ಸ್ಟಾಲಿನ್ ದೆಹಲಿ ಭೇಟಿಯತ್ತ ಎಲ್ಲರ ಚಿತ್ತ

CM MK Stalin: ನಾಳೆ ದೆಹಲಿಗೆ ತೆರಳಲಿರುವ ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿಯಾಗುವ ಸಾಧ್ಯತೆಯಿದೆ.

Mekedatu Project: ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು; ನಾಳೆಯ ಸಿಎಂ ಸ್ಟಾಲಿನ್ ದೆಹಲಿ ಭೇಟಿಯತ್ತ ಎಲ್ಲರ ಚಿತ್ತ
ಎಂ.ಕೆ.ಸ್ಟಾಲಿನ್​
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jul 17, 2021 | 6:12 PM

ನವದೆಹಲಿ: ರಾಮನಗರದ ಬಳಿ ಇರುವ ಮೇಕೆದಾಟು (Mekedatu Dam Project) ಎಂಬಲ್ಲಿ ಸಣ್ಣದಾದ ಅಣೆಕಟ್ಟನ್ನು ನಿರ್ಮಿಸಿ, ಸುಮಾರು 65ರಿಂದ 66 ಟಿಎಂಸಿ ಹೆಚ್ಚುವರಿ ನೀರನ್ನು ಸಂಗ್ರಹಿಸುವ ಯೋಜನೆಯನ್ನು ಕರ್ನಾಟಕ ಸರ್ಕಾರ ಕೈಗೆತ್ತಿಕೊಂಡಿದೆ. ಇದರಿಂದ ತಮಿಳುನಾಡಿಗೆ ಹರಿದುಬರುವ ನೀರಿನ ಪ್ರಮಾಣ ಕಡಿಮೆಯಾಗುತ್ತದೆ ಎಂದು ತಮಿಳುನಾಡು ಸರ್ಕಾರ (Tamil Nadu Government) ಆಕ್ಷೇಪ ವ್ಯಕ್ತಪಡಿಸುತ್ತಿದೆ. ಈ ವಿವಾದ ಈಗ ತಾರಕಕ್ಕೇರಿದ್ದು, ಈಗಾಗಲೇ ಸರ್ವಪಕ್ಷಗಳ ನಿಯೋಗ ಕೇಂದ್ರ ಜಲಸಂಪನ್ಮೂಲ ಸಚಿವರನ್ನು ಭೇಟಿಯಾಗಿ ಮೇಕೆದಾಟು ಯೋಜನೆಗೆ ತಡೆ ನೀಡುವಂತೆ ಮನವಿ ಮಾಡಿದೆ. ಇದರ ಬೆನ್ನಲ್ಲೇ ನಾಳೆ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ (MK Stalin) ಕೂಡ ನವದೆಹಲಿಗೆ ಭೇಟಿ ನೀಡುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ.

ನಾಳೆ ದೆಹಲಿಗೆ ತೆರಳಲಿರುವ ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿಯಾಗುವ ಸಾಧ್ಯತೆಯಿದೆ. ಮೇಕೆದಾಟು‌ ಯೋಜನೆಗೆ ತಮಿಳುನಾಡು ಅಡ್ಡಗಾಲು‌ ಹಾಕುತ್ತಿರೋ ‌ಹಿನ್ನೆಲೆಯಲ್ಲಿ ನಾಳೆಯ ಎಂ.ಕೆ. ಸ್ಟಾಲಿನ್ ದೆಹಲಿ ಭೇಟಿ ಕುತೂಹಲ‌ ಮೂಡಿಸಿದೆ. ಈಗಾಗಲೇ ದೆಹಲಿಯಲ್ಲಿರುವ ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಾಳೆ ದೆಹಲಿಯಿಂದ ವಾಪಾಸ್ ಬರಲಿದ್ದಾರೆ. ಯಾವುದೇ ಕಾರಣಕ್ಕೂ ಮೇಕೆದಾಟು ಯೋಜನೆಯನ್ನು ನಿಲ್ಲಿಸುವುದಿಲ್ಲ. ಕುಡಿಯುವ ನೀರಿಗಾಗಿ ಕೈಗೆತ್ತಿಕೊಂಡಿರುವ ಈ ಯೋಜನೆಯ ಅಗತ್ಯತೆಯನ್ನು ಸಂಬಂಧಪಟ್ಟವರಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದು ಸಿಎಂ ಯಡಿಯೂರಪ್ಪ ಖಡಕ್ ಸಂದೇಶ ರವಾನಿಸಿದ್ದಾರೆ.

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಯಾವುದೇ ತೊಂದರೆಯೂ ಇಲ್ಲ. ಆದರೂ ತಮಿಳುನಾಡು ಸರ್ಕಾರ ಮೇಕೆದಾಟು ಯೋಜನೆಯನ್ನು ವಿರೋಧಿಸುತ್ತಿದೆ ಎಂದು ತಿಳಿದಿಲ್ಲ. ಮೇಕೆದಾಟು ಯೋಜನೆ ಜಾರಿಗೆ ನಮಗೆ ಅವಕಾಶ ಇದೆ. ನಾವು ಮೇಕೆದಾಟು ಯೋಜನೆಯನ್ನು ಜಾರಿ ಮಾಡಿಯೇ ಮಾಡುತ್ತೇವೆ. ಮೇಕೆದಾಟು ಯೋಜನೆ ಆರಂಭಕ್ಕೆ ಶಕ್ತಿ ಮೀರಿ ಪ್ರಯತ್ನಿಸುತ್ತೇನೆ ಎಂದು ದೆಹಲಿಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

2008ರಲ್ಲಿ ಈ ಮೇಕೆದಾಟು ಯೋಜನೆಯನ್ನು ಆರಂಭಿಸಲಾಯಿತು. ಬೆಂಗಳೂರಿನಿಂದ 90 ಕಿ.ಮೀ. ದೂರದಲ್ಲಿರುವ ಮೇಕೆದಾಟುವಿನಲ್ಲಿ ಈ ಡ್ಯಾಂ ನಿರ್ಮಿಸಿದರೆ ಬೆಂಗಳೂರಿನ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಸಾಧ್ಯವೆಂಬುದು ಸರ್ಕಾರದ ಲೆಕ್ಕಾಚಾರವಾಗಿತ್ತು. ಹಾಗೇ, ಇದರಿಂದ ವಿದ್ಯುತ್ ಉತ್ಪಾದನೆ ಮಾಡುವ ಯೋಚನೆಯೂ ಇತ್ತು. ಕೆಆರ್​ಎಸ್, ಕಬಿನಿ ಜಲಾಶಯಗಳಿಂದ ಹರಿಯುವ ಹೆಚ್ಚುವರಿ ನೀರನ್ನು ಸಂಗ್ರಹಿಸಲು ಈ ಮೇಕೆದಾಟು ಯೋಜನೆಯಿಂದ ಅನುಕೂಲವಾಗಲಿದೆ ಎಂದು 9 ಸಾವಿರ ಕೋಟಿ ರೂ. ವೆಚ್ಚದಲ್ಲಿ ಕರ್ನಾಟಕ ಸರ್ಕಾರ ಈ ಯೋಜನೆಯನ್ನು ಕೈಗೆತ್ತಿಕೊಂಡಿತ್ತು.

ಕರ್ನಾಟಕ ಮೇಕೆದಾಟು ಅಣೆಕಟ್ಟು ಕಟ್ಟಿದರೆ ಕಾವೇರಿ ನೀರಿನ 67 ಟಿಎಂಸಿ ನೀರು ಸಂಗ್ರಹಣೆಯಾಗಿ ತಮಿಳುನಾಡಿಗೆ ನೀರಿನ ಹರಿಯುವಿಕೆಗೆ ತಡೆಯಾಗುತ್ತದೆ. ತಮಿಳು ನಾಡಿನಲ್ಲಿ ಕಾವೇರಿ ಜಲಾನಯನ ಪ್ರದೇಶದ ಜನರು ಭತ್ತ ಬೆಳೆಯಲು ಕಾವೇರಿ ನೀರನ್ನೇ ಅವಲಂಬಿಸಿದ್ದಾರೆ. ಕರ್ನಾಟಕ ಕಾವೇರಿ ನದಿಗೆ ಮೇಕೆದಾಟಿನಲ್ಲಿ ಅಣೆಕಟ್ಟು ಕಟ್ಟಿದರೆ ತಮಿಳು ನಾಡಿನ ಜನರಿಗೆ ವ್ಯವಸಾಯಕ್ಕೆ ನೀರಿಗೆ ಸಮಸ್ಯೆಯಾಗುತ್ತದೆ ಎಂಬುದು ತಮಿಳುನಾಡು ಸರ್ಕಾರದ ವಾದ. ಈ ಹಿನ್ನೆಲೆಯಲ್ಲಿ ಮೇಕೆದಾಟು ಯೋಜನೆಗೆ ತಡೆಯೊಡ್ಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಲು ತಮಿಳುನಾಡು ಸರ್ಕಾರ ಪ್ರಯತ್ನಿಸುತ್ತಿದೆ.

ರಾಮನಗರ ಬಳಿ ಇರುವ ಮೇಕೆದಾಟು ಎಂಬಲ್ಲಿ ಅಣೆಕಟ್ಟು ನಿರ್ಮಿಸುವ ಕರ್ನಾಟಕ ಸರ್ಕಾರದ ಯೋಜನೆಗೆ ತಮಿಳುನಾಡಿನಿಂದ ಭಾರೀ ವಿರೋಧ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಸರ್ವ ಪಕ್ಷ ಸಭೆ ಕರೆದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಡಿಎಂಕೆ, ಕಾಂಗ್ರೆಸ್, ಬಿಜೆಪಿ, ಎಐಎಡಿಎಂಕೆ ಸೇರಿ ಎಲ್ಲ ಪಕ್ಷಗಳ ಪ್ರತಿನಿಧಿಗಳ ಜೊತೆ ಈ ಬಗ್ಗೆ ಚರ್ಚೆ ನಡೆಸಿ, ಯಾವುದೇ ಕಾರಣಕ್ಕೂ ಮೇಕೆದಾಟು ಡ್ಯಾಂ ನಿರ್ಮಾಣಕ್ಕೆ ಅನುಮತಿ ನೀಡಬಾರದು ಎಂದು ನಿರ್ಧರಿಸಿದ್ದಾರೆ. ಈ ಬಗ್ಗೆ ಸರ್ವ ಪಕ್ಷ ನಿಯೋಗ ಕೇಂದ್ರ ಸಚಿವರನ್ನೂ ಭೇಟಿಯಾಗಿದೆ.

ಇದನ್ನೂ ಓದಿ:

Mekedatu Project: ಮೇಕೆದಾಟು ಯೋಜನೆಯನ್ನು ಜಾರಿ ಮಾಡಿಯೇ ಮಾಡುತ್ತೇವೆ; ದೆಹಲಿಯಲ್ಲಿ ಸಿಎಂ ಯಡಿಯೂರಪ್ಪ ಅಚಲ ನುಡಿ

Mekedatu Project: ಮೇಕೆದಾಟು ಯೋಜನೆಗೆ ಅವಕಾಶ ನೀಡಬಾರದು; ಸ್ಟಾಲಿನ್ ನೇತೃತ್ವದಲ್ಲಿ ತಮಿಳುನಾಡು ನಾಯಕರ ನಿರ್ಧಾರ

(Tamil Nadu CM MK Stalin to Visit Delhi Tomorrow to Discuss on Mekedatu Dam Project)