ತಿರುಮಲ, ಜನವರಿ 9: ಆಂಧ್ರ ಪ್ರದೇಶದ ತಿರುಪತಿ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಬುಧವಾರ ರಾತ್ರಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ ಇನ್ನೂ ನಾಲ್ವರು ತೀವ್ರ ಅಸ್ವಸ್ಥಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವೈಕುಂಠ ಏಕಾದಶಿ ಪ್ರಯುಕ್ತ ತಿರುಪತಿಯ ವಿಷ್ಣು ನಿವಾಸಂನಲ್ಲಿ ಶುಕ್ರವಾರದಿಂದ 10 ದಿನಗಳ ಕಾಲ ವೈಕುಂಠ ದ್ವಾರ ಸರ್ವದರ್ಶನಕ್ಕಾಗಿ ಟೋಕನ್ ವಿತರಣೆಯ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿದೆ.
ಭಾರೀ ಸಂಖ್ಯೆಯಲ್ಲಿ ಭಕ್ತರು ಟೋಕನ್ ಪಡೆಯಲು ಯತ್ನಿಸಿದ ಪರಿಣಾಮ ನೂಕುನುಗ್ಗಲು ಉಂಟಾಯಿತು. ಘಟನೆಯಲ್ಲಿ ಒಟ್ಟು 20 ಮಂದಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ರುಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗುರುವಾರದಿಂದ ತಿರುಪತಿಯ 9 ಕೇಂದ್ರಗಳಲ್ಲಿ 94 ಕೌಂಟರ್‌ಗಳ ಮೂಲಕ ವೈಕುಂಠ ದರ್ಶನ ಟೋಕನ್‌ಗಳನ್ನು ವಿತರಿಸಲು ಟಿಟಿಡಿ ವ್ಯವಸ್ಥೆ ಮಾಡಿದೆ. ಆದರೆ, ಬುಧವಾರ (ಜನವರಿ 8) ಸಂಜೆ ಟೋಕನ್‌ಗಾಗಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಇದೇ ವೇಳೆ ಭಕ್ತರೊಬ್ಬರು ಅಸ್ವಸ್ಥರಾದರು. ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಮುಖ್ಯ ಗೇಟ್ ತೆರೆಯಲಾಗಿತ್ತು. ಆಗ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆ ಗೇಟ್ ಮೂಲಕ ಧಾವಿಸಿದರು. ಇದರಿಂದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಕಾಲ್ತುಳಿತದಲ್ಲಿ ಗಾಯಗೊಂಡವರ ಸಂಖ್ಯೆ ಹೆಚ್ಚಾಗಬಹುದು ಎಂದು ನಿರೀಕ್ಷಿಸಲಾಗಿದೆ.
ಜನವರಿ 10, 11 ಮತ್ತು 12 ರಂದು ಮೊದಲ ಮೂರು ದಿನಗಳ ವೈಕುಂಠ ದ್ವಾರ ದರ್ಶನಕ್ಕಾಗಿ ಗುರುವಾರ ಬೆಳಿಗ್ಗೆ 1.20 ಲಕ್ಷ ಟೋಕನ್‌ಗಳನ್ನು ನೀಡಲು ಟಿಟಿಡಿ ನಿರ್ಧರಿಸಿದೆ. ಉಳಿದ ದಿನಗಳಲ್ಲಿ ತಿರುಪತಿಯ ವಿಷ್ಣುನಿವಾಸಂ, ಶ್ರೀನಿವಾಸಂ ಮತ್ತು ಭೂದೇವಿ ಕಾಂಪ್ಲೆಕ್ಸ್‌ಗಳಲ್ಲಿ ಆಯಾ ದಿನಾಂಕದಂದು ಟಿಕೆಟ್ ನೀಡಲು ಟಿಟಿಡಿ ವ್ಯವಸ್ಥೆ ಮಾಡಿದೆ.
తిరుమల శ్రీవారి వైకుంఠ ద్వార దర్శనం టోకెన్ల కోసం తిరుపతిలోని విష్ణు నివాసం దగ్గర జరిగిన తోపులాటలో పలువురు భక్తులు మృతి చెందడం దిగ్భ్రాంతిని కలిగించింది. టోకెన్ల కోసం భక్తులు పెద్ద ఎత్తున తరలివచ్చిన సందర్భంలో చోటుచేసుకున్న ఈ విషాదకర ఘటన నన్ను తీవ్రంగా కలిచివేసింది. మరి కొందరి…
— N Chandrababu Naidu (@ncbn) January 8, 2025
ತಿರುಪತಿಯ ವಿಷ್ಣು ನಿವಾಸದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ ನಾಲ್ವರು ಭಕ್ತರು ಸಾವನ್ನಪ್ಪಿರುವ ಬಗ್ಗೆ ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಟೋಕನ್ ಪಡೆಯಲು ಬಂದಿದ್ದ ನಾಲ್ವರು ಭಕ್ತರು ಪ್ರಾಣ ಕಳೆದುಕೊಂಡಿರುವುದು ತೀವ್ರ ಬೇಸರ ತಂದಿದೆ ಎಂದು ಸಿಎಂ ಹೇಳಿದ್ದಾರೆ. ಘಟನೆಯಲ್ಲಿ ಗಾಯಗೊಂಡವರಿಗೆ ನೀಡುತ್ತಿರುವ ಚಿಕಿತ್ಸೆ ಕುರಿತು ಸಿಎಂ ದೂರವಾಣಿ ಮೂಲಕ ಅಧಿಕಾರಿಗಳೊಂದಿಗೆ ಮಾತನಾಡಿದ್ದಾರೆ. ಜಿಲ್ಲಾ ಮತ್ತು ಟಿಟಿಡಿ ಅಧಿಕಾರಿಗಳೊಂದಿಗೆ ಸಿಎಂ ಕಾಲಕಾಲಕ್ಕೆ ಪರಿಶೀಲನೆ ನಡೆಸುತ್ತಿದ್ದಾರೆ. ಹಿರಿಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ತೆರಳಿ ಪರಿಹಾರ ಕ್ರಮಗಳನ್ನು ಕೈಗೊಂಡು ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ದೊರೆಯುವಂತೆ ನೋಡಿಕೊಳ್ಳಬೇಕು ಎಂದು ಸಿಎಂ ಚಂದ್ರಬಾಬು ಆದೇಶಿಸಿದ್ದಾರೆ.
ದರ್ಶನಕ್ಕೆ ಬಂದಿದ್ದ ಭಕ್ತರು ಸಾವನ್ನಪ್ಪಿರುವುದು ದುರದೃಷ್ಟಕರ. ಘಟನೆಯಿಂದ ತೀವ್ರ ಬೇಸರವಾಗಿದೆ ಎಂದು ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಹೇಳಿದ್ದಾರೆ. ಘಟನೆ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಅವರು, ಮೃತರ ಮತ್ತು ಗಾಯಗೊಂಡವರ ಕುಟುಂಬಗಳಿಗೆ ಮಾಹಿತಿ ನೀಡಿ ನೆರವು ನೀಡುವಂತೆ ಟಿಟಿಡಿ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಏತನ್ಮಧ್ಯೆ, ಇಂದು ಸಿಎಂ ಚಂದ್ರಬಾಬು ನಾಯ್ಡು ತಿರುಪತಿಗೆ ಭೇಟಿ ನೀಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕೂಡ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿದ್ದು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:01 am, Thu, 9 January 25