ಪೊಲೀಸ್​​ ಠಾಣೆ ಸಮೀಪವೇ ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಮೇಲೆ ಹಲ್ಲೆ?

ಪಶ್ಚಿಮ ಬಂಗಾಳದ ಪೊಲೀಸ್ ಠಾಣೆ ಸಮೀಪವೇ ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಮೇಲೆ ಬಿಜೆಪಿಗರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಬಿಜೆಪಿ ಕಾರ್ಯಕರ್ತರು ಅವಾಚ್ಯ ಶಬ್ದಗಳಿಂದ ನಿಂದಿಸಿ, ಡ್ಯೂಸ್ ಬಾಲ್‌ನಿಂದ ತನ್ನ ತಲೆಗೆ ಹೊಡೆದಿದ್ದಾರೆ ಎಂದು ಟಿಎಂಸಿ ನಾಯಕ ಆರೋಪಿಸಿದ್ದು, ನಿನ್ನೆಯಷ್ಟೇ ಸಂಸದ ಅಭಿಷೇಕ್ ಬ್ಯಾನರ್ಜಿ ಮೇಲೂ ದಾಳಿಯಾಗಿತ್ತು ಎಂಬುದಿಲ್ಲಿ ಗಮನಾರ್ಹ.

ಪೊಲೀಸ್​​ ಠಾಣೆ ಸಮೀಪವೇ ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಮೇಲೆ ಹಲ್ಲೆ?
ಕಲ್ಯಾಣ್ ಬ್ಯಾನರ್ಜಿ ಮೇಲೆ ಬಿಜೆಪಿಗರಿಂದ ಹಲ್ಲೆ ಆರೋಪ
Image Credit source: PTI

Updated on: May 31, 2026 | 1:52 PM

ಕೋಲ್ಕತ್ತಾ, ಮೇ 31: ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಚಂದಿತಾಲಾ ಪೊಲೀಸ್ ಠಾಣೆ ಸಮೀಪ ತೃಣಮೂಲ ಕಾಂಗ್ರೆಸ್ (Trinamool Congress) ಸಂಸದ ಹಾಗೂ ನಾಯಕ ಕಲ್ಯಾಣ್ ಬ್ಯಾನರ್ಜಿ (Kalyan Banerjee)​​ ಮೇಲೆ ದಾಳಿ ನಡೆದಿರುವ ಆರೋಪ ಕೇಳಿಬಂದಿದೆ. ಚುನಾವಣೆ ನಂತರ ನಡೆದ ಹಿಂಸಾಚಾರದ ಕುರಿತು ಮನವಿ ಸಲ್ಲಿಸಲು ಅವರು ಪೊಲೀಸ್ ಠಾಣೆಗೆ ತೆರಳಿದ್ದ ವೇಳೆಯೇ ಈ ಘಟನೆ ನಡೆದಿದೆ ಎನ್ನಲಾಗಿದೆ.

ಅಷ್ಟಕ್ಕೂ ಆಗಿದ್ದೇನು?

ಕಲ್ಯಾಣ್ ಬ್ಯಾನರ್ಜಿ ಮೇಲೆ ಹಲ್ಲೆ ಆರೋಪ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿದಾಡುತ್ತಿದೆ. ಕಲ್ಯಾಣ್ ಬ್ಯಾನರ್ಜಿ ನೆಲದ ಮೇಲೆ ಮಲಗಿರುವುದು ಹಾಗೂ ಸುತ್ತಮುತ್ತ ಹಲವರು ಜಮಾಯಿಸಿರುವುದನ್ನು ಆ ವಿಡಿಯೋದಲ್ಲಿ ಗಮನಿಸಬಹುದಾಗಿದೆ. ದಾಳಿ ನಡೆದ ಕೆಲವೇ ಕ್ಷಣಗಳಲ್ಲಿ ಟಿಎಂಸಿ ಕಾರ್ಯಕರ್ತರು ಹಾಗೂ ಕಲ್ಯಾಣ್ ಬ್ಯಾನರ್ಜಿ ಪೊಲೀಸ್ ಠಾಣೆ ಸಮೀಪ ಪ್ರತಿಭಟನೆ ನಡೆಸಿ ಘೋಷಣೆಗಳನ್ನು ಕೂಗಿದ ಪ್ರಸಂಗ ನಡೆದಿದೆ.

ಇದನ್ನೂ ಓದಿ: ಬಂಗಾಳದ ಲಕ್ಷ್ಮಿ ಭಂಡಾರ್ ಯೋಜನೆಯಲ್ಲಿ ಬೃಹತ್ ವಂಚನೆ; 30 ಲಕ್ಷ ಜನರಿಗೆ ಸಿಗಲ್ಲ ಸೌಲಭ್ಯ ಸಿಎಂ ಸುವೇಂದು ಘೋಷಣೆ

ಘಟನೆ ಸಂಬಂಧಮಾಧ್ಯಮಗಳೊಂದಿಗೆ ಮಾತನಾಡಿದ ಕಲ್ಯಾಣ್ ಬ್ಯಾನರ್ಜಿ, ತಮ್ಮ ಮೇಲೆ ಬಿಜೆಪಿ ಕಾರ್ಯಕರ್ತರು ದಾಳಿ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ನಾನು ಒಬ್ಬನೇ ಬರುತ್ತಿದ್ದೆ, ನನ್ನ ಜೊತೆಗೆ ಯಾರೂ ಇರಲಿಲ್ಲ. ಈ ವೇಳೆ ಬಿಜೆಪಿ ಕಾರ್ಯಕರ್ತರು ಅವಾಚ್ಯ ಶಬ್ದಗಳಿಂದ ನಿಂದಿಸಿ, ಡ್ಯೂಸ್ ಬಾಲ್‌ನಿಂದ ನನ್ನ ತಲೆಗೆ ಹೊಡೆದಿದ್ದಾರೆ. ಸಂಸದರನ್ನು ನಿರಂತರವಾಗಿ ಗುರಿಯಾಗಿಸಲಾಗುತ್ತಿರುವುದು ಬಗ್ಗೆ ಜನರೇ ತೀರ್ಮಾನಿಸಬೇಕು ಎಂದಿದ್ದಾರೆ

ನಿನ್ನೆಯಷ್ಟೇ ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಸಂಸದ ಅಭಿಷೇಕ್​ ಬ್ಯಾನರ್ಜಿ ಮೇಲೂ ದಾಳಿ ನಡೆದಿತ್ತು. ದಕ್ಷಿಣ 24 ಪರಗಣ ಜಿಲ್ಲೆಯ ಸೋನಾರ್ಪುರಕ್ಕೆ ಭೇಟಿ ನೀಡಿದ್ದ ವೇಳೆ ಪ್ರತಿಭಟನಾಕಾರರು ಅವರ ಮೇಲೆ ಕಲ್ಲು, ಮೊಟ್ಟೆ ಹಾಗೂ ಚಪ್ಪಲಿಗಳನ್ನು ಎಸೆದಿದ್ದರು ಎಂದು ಆರೋಪಿಸಲಾಗಿತ್ತು. ಚುನಾವಣೆ ನಂತರದ ಹಿಂಸಾಚಾರದಿಂದ ಸಂತ್ರಸ್ತರಾದ ಕುಟುಂಬಗಳನ್ನು ಭೇಟಿ ಮಾಡಲು ಅಭಿಷೇಕ್ ತೆರಳಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿತ್ತು. ಈ ದಾಳಿಯ ಬಳಿಕ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ, ಹಿಂಸಾಚಾರದ ಹಿಂದೆ ಬಿಜೆಪಿ ಕೈವಾಡವಿದೆ ಎಂದು ಆರೋಪಿಸಿದ್ದರು. ಅಲ್ಲದೆ, ಅಭಿಷೇಕ್ ಬ್ಯಾನರ್ಜಿ ಅವರಿಗೆ ಚಿಕಿತ್ಸೆ ನೀಡಿದ ಆಸ್ಪತ್ರೆಗಳು ಹಾಗೂ ವೈದ್ಯರ ಮೇಲೆ ಒತ್ತಡ ಹೇರಲಾಗುತ್ತಿದೆ ಎಂಬ ಆರೋಪವನ್ನೂ ಮಾಡಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 1:50 pm, Sun, 31 May 26

Prasanna Hegde

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
Follow Us