ಮಹಾರಾಷ್ಟ್ರ- ಕರ್ನಾಟಕ ಗಡಿ ವಿವಾದ; ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ಉದ್ಧವ್ ಠಾಕ್ರೆ ವಾಗ್ದಾಳಿ
ನೀರಿನ ಸಮಸ್ಯೆ ಎದುರಿಸುತ್ತಿರುವ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಕೆಲವು ಗ್ರಾಮಗಳನ್ನು ಕರ್ನಾಟಕದೊಂದಿಗೆ ವಿಲೀನಗೊಳಿಸಲು ನಿರ್ಣಯ ಅಂಗೀಕರಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ ನಂತರ ಈ ಮಾತಿನ ಚಕಮಕಿ ನಡೆದಿದೆ.
ಮುಂಬೈ: ಮಹಾರಾಷ್ಟ್ರ- ಕರ್ನಾಟಕ ಗಡಿ ವಿವಾದದ (Maharashtra- Karnataka Border Dispute) ಬಗ್ಗೆ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ (Uddhav Thackeray) ಪ್ರತಿಕ್ರಿಯೆ ನೀಡಿದ್ದು, ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರ ಹೇಳಿಕೆಯನ್ನು ಕಟುವಾಗಿ ಟೀಕಿಸಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿಗಳು ಕರ್ನಾಟಕ- ಮಹಾರಾಷ್ಟ್ರದ ಗಡಿಯ ಸಮಸ್ಯೆಗಳ ಬಗ್ಗೆ ತಮ್ಮ ಹೇಳಿಕೆಯನ್ನು ನೀಡುತ್ತಿದ್ದಾರೆ. ಅವೆಲ್ಲವೂ ನಮ್ಮ ಹಿಡಿತದಲ್ಲೇ ಇವೆ ಎಂದು ಉದ್ಧವ್ ಠಾಕ್ರೆ ಹೇಳಿದ್ದಾರೆ.
ಇದಕ್ಕೂ ಮೊದಲು ಮಹಾರಾಷ್ಟ್ರದ ವಿರೋಧ ಪಕ್ಷದ ನಾಯಕ ಅಜಿತ್ ಪವಾರ್ ಅವರು 2 ರಾಜ್ಯಗಳ ನಡುವಿನ ಗಡಿ ವಿವಾದದ ಕುರಿತು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೇಳಿಕೆಯನ್ನು ಖಂಡಿಸಿದ್ದರು. ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಇಬ್ಬರೂ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಕಠಿಣ ಸಂದೇಶ ರವಾನಿಸಬೇಕೆಂದು ಅಜಿತ್ ಪವಾರ್ ಒತ್ತಾಯಿಸಿದ್ದರು.
ಅಲ್ಲದೆ, ಈ ವಿಚಾರದಲ್ಲಿ ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಬೇಕೆಂದು ಅಜಿತ್ ಪವಾರ್ ಮನವಿ ಮಾಡಿದ್ದರು. 2 ರಾಜ್ಯಗಳ ನಡುವಿನ ಗಡಿ ಸಮಸ್ಯೆಗೆ ಸಂಬಂಧಿಸಿದಂತೆ ಬೊಮ್ಮಾಯಿ ಅವರು ದೇವೇಂದ್ರ ಫಡ್ನವೀಸ್ ಅವರೊಂದಿಗೆ ವಾಕ್ಸಮರ ಮಾಡಿದ ನಂತರ ದೇವೇಂದ್ರ ಫಡ್ನವಿಸ್ ಪ್ರಚೋದನಕಾರಿ ಹೇಳಿಕೆ ನೀಡುತ್ತಿದ್ದಾರೆ ಎಂದು ಬೊಮ್ಮಾಯಿ ಟೀಕಿಸಿದ್ದರು.
ಇದನ್ನೂ ಓದಿ: ಭುಗಿಲೆದ್ದ ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ: ಫಡ್ನವೀಸ್ ಪ್ರಚೋದನೆ ನೀಡುತ್ತಿದ್ದಾರೆ ಎಂದ ಕರ್ನಾಟಕ ಸಿಎಂ ಬೊಮ್ಮಾಯಿ
ಮಹಾರಾಷ್ಟ್ರದ ಯಾವುದೇ ಗ್ರಾಮವನ್ನೂ ಕರ್ನಾಟಕಕ್ಕೆ ಬಿಟ್ಟುಕೊಡುವುದಿಲ್ಲ ಎಂದು ಫಡ್ನವೀಸ್ ಹೇಳಿದ್ದರು. ಮಹಾರಾಷ್ಟ್ರದ ಯಾವುದೇ ಗ್ರಾಮ ಕರ್ನಾಟಕಕ್ಕೆ ಹೋಗುವುದಿಲ್ಲ! ಬೆಳಗಾವಿ-ಕಾರವಾರ-ನಿಪಾನಿ ಸೇರಿದಂತೆ ಮರಾಠಿ ಭಾಷಿಕ ಗ್ರಾಮಗಳನ್ನು ಪಡೆಯಲು ಮಹಾರಾಷ್ಟ್ರ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಪ್ರಬಲ ಹೋರಾಟ ನಡೆಸಲಿದೆ ಎಂದು ದೇವೇಂದ್ರ ಫಡ್ನವಿಸ್ ಟ್ವೀಟ್ ಮಾಡಿದ್ದರು.
ಇದಕ್ಕೆ ಉತ್ತರವಾಗಿ, ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಕರ್ನಾಟಕ ಮಹಾರಾಷ್ಟ್ರ ಗಡಿ ವಿಚಾರದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ್ದು, ಅವರ ಕನಸು ಎಂದಿಗೂ ನನಸಾಗುವುದಿಲ್ಲ. ದೇಶದ ನೆಲ, ಜಲ ಮತ್ತು ಗಡಿ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಬೊಮ್ಮಾಯಿ ಬುಧವಾರ ಸಂಜೆ ಟ್ವೀಟ್ ಮಾಡಿದ್ದರು.
ಇದನ್ನೂ ಓದಿ: ಗಡಿ ವಿವಾದವನ್ನು ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳೋಣ: ಸಿಎಂ ಬೊಮ್ಮಾಯಿ ಕರೆ
ಈ ವಿಚಾರವಾಗಿ ಪ್ರತಿಕ್ರಿಯಿಸಿದ್ದ ಅಜಿತ್ ಪವಾರ್, ಸಾಂಗ್ಲಿ ಜಿಲ್ಲೆಯ ಜಟ್ ತಾಲೂಕಿನ ಹಳ್ಳಿಗಳ ಮೇಲೆ ಹಕ್ಕು ಸಾಧಿಸಿದ ನಂತರ ಇದೀಗ ಕರ್ನಾಟಕದ ಮುಖ್ಯಮಂತ್ರಿ ಅಕ್ಕಲಕೋಟ ಮತ್ತು ಸೊಲ್ಲಾಪುರದಲ್ಲೂ ತಮ್ಮ ಹಕ್ಕು ಚಲಾಯಿಸಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿಗಳ ಹೇಳಿಕೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ನಮ್ಮ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ದಿಟ್ಟ ಉತ್ತರ ನೀಡಬೇಕು. ಕೇಂದ್ರ ಸರ್ಕಾರವು ಕೂಡಲೇ ಮಧ್ಯಪ್ರವೇಶಿಸಬೇಕು. ಕೋರ್ಟಿನಲ್ಲಿ ಈ ಪ್ರಕರಣ ಬಾಕಿ ಇದೆ. ಜನರ ದಿಕ್ಕು ತಪ್ಪಿಸುವ ಉದ್ದೇಶ ಇದಾಗಿದೆ. ಇನ್ನು ಕರ್ನಾಟಕ ಮುಂಬೈ ಮೇಲೆ ಕಣ್ಣು ಹಾಕುವುದು ಮಾತ್ರ ಬಾಕಿ ಇದೆ ಎಂದಿದ್ದಾರೆ.
ನೀರಿನ ಸಮಸ್ಯೆ ಎದುರಿಸುತ್ತಿರುವ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಕೆಲವು ಗ್ರಾಮಗಳನ್ನು ಕರ್ನಾಟಕದೊಂದಿಗೆ ವಿಲೀನಗೊಳಿಸಲು ನಿರ್ಣಯ ಅಂಗೀಕರಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ ನಂತರ ಈ ಮಾತಿನ ಚಕಮಕಿ ನಡೆದಿದೆ.