ಉನ್ನಾವ್ ಅತ್ಯಾಚಾರ ಪ್ರಕರಣ; ಮಾಜಿ ಬಿಜೆಪಿ ಶಾಸಕ ಕುಲದೀಪ್ ಸೆಂಗಾರ್​​ಗೆ ಬಿಗ್ ರಿಲೀಫ್

2017ರ ಉತ್ತರ ಪ್ರದೇಶದ ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಬಿಜೆಪಿಯ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್​ಗೆ ಬಿಗ್ ರಿಲೀಫ್​ ಸಿಕ್ಕಿದೆ. ಕುಲದೀಪ್ ಸಿಂಗ್ ಸೆಂಗಾರ್ ಜೀವಾವಧಿ ಶಿಕ್ಷೆಗೆ ದೆಹಲಿ ಹೈಕೋರ್ಟ್ ತಡೆ ನೀಡಿದೆ. ಜೀವಾವಧಿ ಶಿಕ್ಷೆಗೆ ತಡೆ ನೀಡಿ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಕುಲದೀಪ್ ಸಿಂಗ್ ಸೆಂಗಾರ್​ಗೆ ದೆಹಲಿ ಹೈಕೋರ್ಟ್​ನಿಂದ ಜಾಮೀನು ಸಿಕ್ಕಿದೆ. ಉಚ್ಚಾಟಿತ ಬಿಜೆಪಿ ನಾಯಕ ಕುಲದೀಪ್ ಸೆಂಗಾರ್ ಅವರ ಜೈಲು ಶಿಕ್ಷೆಯನ್ನು ಅಮಾನತುಗೊಳಿಸಲಾಗಿದೆ.

ಉನ್ನಾವ್ ಅತ್ಯಾಚಾರ ಪ್ರಕರಣ; ಮಾಜಿ ಬಿಜೆಪಿ ಶಾಸಕ ಕುಲದೀಪ್ ಸೆಂಗಾರ್​​ಗೆ ಬಿಗ್ ರಿಲೀಫ್
Kuldeep Sengar

Updated on: Dec 23, 2025 | 6:47 PM

ನವದೆಹಲಿ, ಡಿಸೆಂಬರ್ 23: 2017ರ ಉನ್ನಾವ್ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಬಿಜೆಪಿ ಶಾಸಕ ಕುಲದೀಪ್ ಸೆಂಗಾರ್ (Kuldeep Singh Sengar) ಅವರ ಶಿಕ್ಷೆಗೆ ದೆಹಲಿ ಹೈಕೋರ್ಟ್ ತಡೆ ನೀಡಿದೆ. ದೆಹಲಿ ವಿಚಾರಣಾ ನ್ಯಾಯಾಲಯವು ಡಿಸೆಂಬರ್ 2019ರಲ್ಲಿ ಐಪಿಸಿ ಸೆಕ್ಷನ್ 376 (ಅತ್ಯಾಚಾರ) ಮತ್ತು ಪೋಕ್ಸೊ ಕಾಯ್ದೆಯ ಸೆಕ್ಷನ್ 5 (ಸಿ) ಮತ್ತು 6ರ ಅಡಿಯಲ್ಲಿ ಅಪ್ರಾಪ್ತ ವಯಸ್ಕಳ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಕುಲದೀಪ್ ಸೆಂಗಾರ್ ಅವರನ್ನು ತಪ್ಪಿತಸ್ಥರೆಂದು ಘೋಷಿಸಿ ಜೀವಾವಧಿ ಶಿಕ್ಷೆ ವಿಧಿಸಿತ್ತು. ಈ ಪ್ರಕರಣವನ್ನು ಸಿಬಿಐ ತನಿಖೆ ಮಾಡಿ ವಿಚಾರಣೆ ನಡೆಸಿತ್ತು.

ಉನ್ನಾವ್ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಉಚ್ಚಾಟಿತ ಬಿಜೆಪಿ ನಾಯಕ ಕುಲದೀಪ್ ಸಿಂಗ್ ಸೆಂಗಾರ್ ಅವರ ಜೈಲು ಶಿಕ್ಷೆಯನ್ನು ದೆಹಲಿ ಹೈಕೋರ್ಟ್ ಅಮಾನತುಗೊಳಿಸಿದೆ. ನ್ಯಾಯಮೂರ್ತಿಗಳಾದ ಸುಬ್ರಮಣಿಯಂ ಪ್ರಸಾದ್ ಮತ್ತು ಹರೀಶ್ ವೈದ್ಯನಾಥನ್ ಶಂಕರ್ ಅವರ ನ್ಯಾಯಪೀಠವು ಕುಲದೀಪ್ ಸೆಂಗಾರ್ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿತು. ಅದೇ ಮೊತ್ತದ 3 ಶ್ಯೂರಿಟಿಗಳೊಂದಿಗೆ 15 ಲಕ್ಷ ರೂ.ಗಳ ವೈಯಕ್ತಿಕ ಬಾಂಡ್ ಅನ್ನು ಸಲ್ಲಿಸುವಂತೆ ನಿರ್ದೇಶಿಸಿತು.

ಇದನ್ನೂ ಓದಿ: ಉನ್ನಾವೋ ಅತ್ಯಾಚಾರ ಪ್ರಕರಣದ ಆರೋಪಿ ಕುಲದೀಪ್ ಸೆಂಗಾರ್​ಗೆ ಮಧ್ಯಂತರ ಜಾಮೀನು

ಕುಲದೀಪ್ ಸಿಂಗ್ ಸೆಂಗಾರ್ ಅವರು ಅತ್ಯಾಚಾರಕ್ಕೊಳಗಾದ ಬಾಲಕಿಯ ಮನೆಯಿಂದ 5 ಕಿ.ಮೀ ವ್ಯಾಪ್ತಿಯಲ್ಲಿ ಓಡಾಡಬಾರದು ಮತ್ತು ಆಕೆ ಅಥವಾ ಆಕೆಯ ತಾಯಿಗೆ ಬೆದರಿಕೆ ಹಾಕಬಾರದು ಎಂದು ಹೈಕೋರ್ಟ್ ಸೆಂಗಾರ್‌ಗೆ ಸೂಚಿಸಿದೆ. “ಯಾವುದೇ ಷರತ್ತುಗಳನ್ನು ಉಲ್ಲಂಘಿಸಿದರೆ ಜಾಮೀನು ರದ್ದು ಮಾಡಲಾಗುವುದು” ಎಂದು ನ್ಯಾಯಾಲಯ ಎಚ್ಚರಿಕೆ ನೀಡಿದೆ.

ಅತ್ಯಾಚಾರ ಪ್ರಕರಣದಲ್ಲಿ ಕುಲದೀಪ್ ಸೆಂಗಾರ್ ಅವರ ಅಪರಾಧ ಸಾಬೀತು ಮತ್ತು ಶಿಕ್ಷೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಮೇಲ್ಮನವಿಯ ವಿಚಾರಣೆ ಮುಗಿಯುವವರೆಗೆ ಅವರ ಶಿಕ್ಷೆಯನ್ನು ಹೈಕೋರ್ಟ್ ಅಮಾನತುಗೊಳಿಸಿದೆ. ಅತ್ಯಾಚಾರ ಪ್ರಕರಣದಲ್ಲಿ ಡಿಸೆಂಬರ್ 2019ರ ವಿಚಾರಣಾ ನ್ಯಾಯಾಲಯದ ತೀರ್ಪನ್ನು ಅವರು ಪ್ರಶ್ನಿಸಿದ್ದರು.

ಇದನ್ನೂ ಓದಿ:  ಮಂಗಳೂರು: ಜೇನುಕೃಷಿ ಕಲಿಸುವ ನೆಪದಲ್ಲಿ ಅಪ್ರಾಪ್ತೆ ಮೇಲೆ ನಿರಂತರ ಅತ್ಯಾಚಾರ; ಆರೋಪಿ ಅಂದರ್

2017ರಲ್ಲಿ ಕುಲದೀಪ್ ಸೆಂಗಾರ್ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿದ್ದರು. ಆಗಸ್ಟ್ 1, 2019ರಂದು ಸುಪ್ರೀಂ ಕೋರ್ಟ್‌ನ ನಿರ್ದೇಶನದ ಮೇರೆಗೆ ಅತ್ಯಾಚಾರ ಪ್ರಕರಣ ಮತ್ತು ಸಂಬಂಧಿತ ಇತರ ಪ್ರಕರಣಗಳನ್ನು ಉತ್ತರ ಪ್ರದೇಶದ ವಿಚಾರಣಾ ನ್ಯಾಯಾಲಯದಿಂದ ದೆಹಲಿಗೆ ವರ್ಗಾಯಿಸಲಾಗಿತ್ತು. ಆ ಬಾಲಕಿಯ ತಂದೆಯ ಕಸ್ಟಡಿ ಸಾವಿನ ಪ್ರಕರಣದಲ್ಲಿ ತನ್ನ ಶಿಕ್ಷೆಯ ವಿರುದ್ಧ ಕುಲದೀಪ್ ಸೆಂಗಾರ್ ಅವರ ಮೇಲ್ಮನವಿಯೂ ಬಾಕಿ ಇದೆ. ಅದರಲ್ಲಿ ಅವರು ಈಗಾಗಲೇ ಸಾಕಷ್ಟು ಸಮಯವನ್ನು ಜೈಲಿನಲ್ಲಿ ಕಳೆದಿರುವುದರಿಂದ ಶಿಕ್ಷೆಯನ್ನು ಅಮಾನತುಗೊಳಿಸುವಂತೆ ಕೋರಿದ್ದಾರೆ. ಕಸ್ಟಡಿ ಸಾವಿನ ಪ್ರಕರಣದಲ್ಲಿ ಅವರಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ