
ಲಕ್ನೋ, ನವೆಂಬರ್ 16: ಉತ್ತರ ಪ್ರದೇಶದ 2027ರ ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷದ (ಎಸ್‌ಪಿ) ನಡುವೆ ಸೀಟು ಹಂಚಿಕೆ ವಿಚಾರ ಚರ್ಚೆಗೆ ಬಂದಿದೆ. ಮೈತ್ರಿ ಪಕ್ಷಗಳ ನಡುವೆ ಮಾತುಕತೆ ಮುಂದುವರಿಯಲಿದ್ದು, ಯಾವ ಕ್ಷೇತ್ರದಲ್ಲಿ ಯಾವ ಪಕ್ಷ ಗೆಲ್ಲುವ ಸಾಧ್ಯತೆ ಹೆಚ್ಚಿದೆಯೋ ಆ ಪಕ್ಷಕ್ಕೆ ಆ ಕ್ಷೇತ್ರವನ್ನು ಬಿಟ್ಟುಕೊಡಲಾಗುವುದು ಎಂದು ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದಾರೆ. ಮೈನ್‌ಪುರಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಜೊತೆಗಿನ ಚರ್ಚೆಗಳು ಇನ್ನೂ ಮುಂದುವರಿಯಲಿವೆ. ಎರಡೂ ಪಕ್ಷಗಳು ಪ್ರತಿ ಕ್ಷೇತ್ರದ ರಾಜಕೀಯ ಪರಿಸ್ಥಿತಿಯನ್ನು ಪರಿಶೀಲಿಸಲಿವೆ. ಯಾವ ಪಕ್ಷದ ಅಭ್ಯರ್ಥಿಗೆ ಗೆಲ್ಲುವ ಅವಕಾಶ ಹೆಚ್ಚಿದೆಯೋ ಆ ಪಕ್ಷವೇ ಅಲ್ಲಿ ಸ್ಪರ್ಧಿಸಲಿದೆ ಎಂದು ತಿಳಿಸಿದ್ದಾರೆ.
ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ 181 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಆಸಕ್ತಿ ತೋರಿದೆ ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ. ಆದರೆ ಈ ಬಗ್ಗೆ ಅಂತಿಮ ನಿರ್ಧಾರವಾಗಿಲ್ಲ. ಉತ್ತರ ಪ್ರದೇಶದಲ್ಲಿ ಒಟ್ಟು 403 ವಿಧಾನಸಭಾ ಕ್ಷೇತ್ರಗಳಿದ್ದು, ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷದ ನಡುವೆ ಸೀಟು ಹಂಚಿಕೆ ಹೇಗೆ ನಡೆಯಲಿದೆ ಎಂಬ ಕುತೂಹಲ ಹೆಚ್ಚಾಗಿದೆ.
ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಉತ್ತರ ಪ್ರದೇಶ ಚುನಾವಣೆಗೆ ಸಂಬಂಧಿಸಿದಂತೆ ಮಹತ್ವದ ಸಭೆ ನಡೆಯಲಿದೆ. ಸಭೆಯಲ್ಲಿ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಸೇರಿದಂತೆ ಉತ್ತರ ಪ್ರದೇಶ ಕಾಂಗ್ರೆಸ್‌ನ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ. 2027ರ ಚುನಾವಣೆಗೆ ಕ್ಷೇತ್ರವಾರು ಸಿದ್ಧತೆ, ಪಕ್ಷದ ಸಂಘಟನೆ, ಸೀಟು ಹಂಚಿಕೆ ಮತ್ತು ರಾಜ್ಯದ ರಾಜಕೀಯ ಪರಿಸ್ಥಿತಿಗಳ ಕುರಿತು ಚರ್ಚೆ ನಡೆಯುವ ನಿರೀಕ್ಷೆಯಿದೆ. ನವೆಂಬರ್ 17ರಂದು ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷದ ನಡುವೆ ಸೀಟು ಹಂಚಿಕೆ ಕುರಿತು ಮಾತುಕತೆ ನಡೆಯಲಿರುವುದರಿಂದ ಈ ಸಭೆ ಹೆಚ್ಚಿನ ಮಹತ್ವ ಪಡೆದುಕೊಂಡಿದೆ.
ಇದನ್ನೂ ಓದಿ: ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆ: 51 ಸ್ಥಾನಗಳಲ್ಲಿ ನ್ಯಾಷನಲ್ ಕಾನ್ಫರೆನ್ಸ್, 32 ಸ್ಥಾನಗಳಲ್ಲಿ ಕಾಂಗ್ರೆಸ್ ಸ್ಪರ್ಧೆ
ಉತ್ತರ ಪ್ರದೇಶದಲ್ಲಿ ಚುನಾವಣಾ ಸಿದ್ಧತೆ ಆರಂಭಿಸಿರುವ ಸಮಾಜವಾದಿ ಪಕ್ಷವು ತನ್ನ ಪಿಡಿಎ ತಂತ್ರಕ್ಕೆ ಹೆಚ್ಚಿನ ಒತ್ತು ನೀಡುತ್ತಿದೆ. ಪಿಡಿಎ ಎಂದರೆ ದಲಿತ ಮತ್ತು ಅಲ್ಪಸಂಖ್ಯಾತರು. ಈ ಮೂರು ಸಮುದಾಯಗಳ ಮತಗಳನ್ನು ಒಗ್ಗೂಡಿಸುವ ಮೂಲಕ ಬಿಜೆಪಿಗೆ ಪ್ರಬಲ ಪೈಪೋಟಿ ನೀಡುವುದು ಅಖಿಲೇಶ್ ಯಾದವ್ ಅವರ ತಂತ್ರವಾಗಿದೆ.
ಇದರ ಭಾಗವಾಗಿ ಭಾನುವಾರ ಆಗ್ರಾದಲ್ಲಿ ಸಮಾಜವಾದಿ ಪಕ್ಷ ದಲಿತ ಸಮಾವೇಶ ಆಯೋಜಿಸಿತ್ತು. ಈ ಸಮಾವೇಶದಲ್ಲಿ ಮಾತನಾಡಿದ ಅಖಿಲೇಶ್ ಯಾದವ್, ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಬಿಜೆಪಿ ತನ್ನ ರಾಜಕೀಯ ನೆಲೆಯನ್ನು ಕಳೆದುಕೊಳ್ಳುತ್ತಿದೆ ಎಂದು ಆರೋಪಿಸಿದರು. ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸುವುದಷ್ಟೇ ಅಲ್ಲ, ರಾಜಕೀಯವಾಗಿ ಅದರ ಪ್ರಭಾವವನ್ನು ಅಂತ್ಯಗೊಳಿಸುವುದು ತಮ್ಮ ಗುರಿ ಎಂದು ಹೇಳಿದರು.
ಇನ್ನೊಂದೆಡೆ, ಸಮಾಜವಾದಿ ಪಕ್ಷದ ದಲಿತ ಸಮಾವೇಶವನ್ನು ಸುಹೇಲ್‌ದೇವ್ ಭಾರತೀಯ ಸಮಾಜ ಪಕ್ಷದ (SBSP) ಮುಖ್ಯಸ್ಥ ಓಂ ಪ್ರಕಾಶ್ ರಾಜ್‌ಭರ್ ಟೀಕಿಸಿದ್ದಾರೆ. ಸಮಾಜವಾದಿ ಪಕ್ಷದ ಹಿಂದಿನ ಆಡಳಿತದಲ್ಲಿ ದಲಿತರ ಮೇಲೆ ದೌರ್ಜನ್ಯ ನಡೆದಿದೆ. ಅವರ ಭೂಮಿಯನ್ನು ಅಕ್ರಮವಾಗಿ ವಶಪಡಿಸಿಕೊಳ್ಳಲಾಗಿದೆ. ಪಕ್ಷದ ನಾಯಕರು ದಲಿತರಿಗೆ ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ಸೀಟು ಹಂಚಿಕೆ ಏಕೆ ಮಹತ್ವದ್ದು?
– ಉತ್ತರ ಪ್ರದೇಶದಲ್ಲಿ ಒಟ್ಟು 403 ವಿಧಾನಸಭಾ ಕ್ಷೇತ್ರಗಳಿವೆ.
– 2027ರ ಆರಂಭದಲ್ಲಿ ವಿಧಾನಸಭಾ ಚುನಾವಣೆ ನಡೆಯುವ ನಿರೀಕ್ಷೆಯಿದೆ.
– ಕಾಂಗ್ರೆಸ್ 181 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಬೇಡಿಕೆ ಇಟ್ಟಿದೆ ಎಂದು ಅಖಿಲೇಶ್ ಬಹಿರಂಗಪಡಿಸಿದ್ದಾರೆ.
– ನವೆಂಬರ್ 17ರಂದು ಉಭಯ ಪಕ್ಷಗಳ ನಡುವೆ ಅಧಿಕೃತ ಮಾತುಕತೆ ಆರಂಭವಾಗಲಿದೆ.
– ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವುದು ಕಾಂಗ್ರೆಸ್ ಮತ್ತು ಎಸ್‌ಪಿ ಮೈತ್ರಿಯ ಪ್ರಮುಖ ಗುರಿಯಾಗಿದೆ.
ಈ ಹಿಂದಿನ 2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷ ಒಟ್ಟಾಗಿ ಸ್ಪರ್ಧಿಸಿ ಉತ್ತಮ ಸಾಧನೆ ಮಾಡಿದ್ದವು. ಇದೀಗ ಅದೇ ಮೈತ್ರಿಯನ್ನು ವಿಧಾನಸಭಾ ಚುನಾವಣೆಯಲ್ಲೂ ಮುಂದುವರಿಸಲು ಎರಡೂ ಪಕ್ಷಗಳು ಸಿದ್ಧತೆ ನಡೆಸಿವೆ. ಆದರೆ 181 ಕ್ಷೇತ್ರಗಳ ಬೇಡಿಕೆಗೆ ಎಸ್‌ಪಿ ಒಪ್ಪಿಗೆ ನೀಡಿದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ