
ಲಕ್ನೋ: ದೇಶದೆಲ್ಲೆಡೆ ಕೊರೊನಾ ಸೋಂಕಿನ ಎರಡನೇ ಅಲೆ ಭೀತಿ ಹೆಚ್ಚಾಗುತ್ತಿದ್ದು, ಹಲವು ಗಣ್ಯರು ಸೋಂಕಿಗೆ ತುತ್ತಾಗಿದ್ದಾರೆ. ಇದೀಗ ಉತ್ತರ ಪ್ರದೇಶ ರಾಜ್ಯದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದ ಕೆಲ ದಿನಗಳಿಂದ ಹೋಂ ಐಸೋಲೇಶನ್ನಲ್ಲಿ ಇದ್ದು ಆರೋಗ್ಯದ ಬಗ್ಗೆ ನಿಗಾ ವಹಿಸುತ್ತಿದ್ದ ಯೋಗಿ ಆದಿತ್ಯನಾಥ್ ಅವರಿಗೆ ಇದೀಗ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ. ಈ ಬಗ್ಗೆ ಸ್ವತಃ ಯೋಗಿ ಆದಿತ್ಯನಾಥ್ ಅವರು ತಮ್ಮ ಅಧಿಕೃತ ಟ್ವಿಟರ್ ಖಾತೆ ಮೂಲಕ ಕೊರೊನಾ ಪಾಸಿಟಿವ್ ಬಂದಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.
ನನಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ. ಕೊವಿಡ್ ಪರೀಕ್ಷೆಯ ರಿಪೋರ್ಟ್ ಬಂದಿದ್ದು ಸೋಂಕು ದೃಢಪಟ್ಟಿದೆ. ನಾನು ಹೋಂ ಐಸೋಲೇಶನ್ನಲ್ಲಿ ಇದ್ದು ಸೂಕ್ತ ಚಿಕಿತ್ಸೆ ಪಡೆಯುತ್ತಿದ್ದೇನೆ. ಜೊತೆಗೆ, ಆಡಳಿತಕ್ಕೆ ಸಂಬಂಧಿಸಿದ ಎಲ್ಲಾ ಕೆಲಸ ಕಾರ್ಯಗಳನ್ನು ವರ್ಚುಯಲ್ ಆಗಿ ನಡೆಸಲಾಗುತ್ತಿದೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ದಯಮಾಡಿ ತಕ್ಷಣವೇ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.
ಅಖಿಲೇಶ್ ಯಾದವ್ಗೂ ಕೊರೊನಾ ಪಾಸಿಟಿವ್
ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಸಮಾಜವಾದಿ ಮುಖ್ಯಸ್ಥ ಅಖಿಲೇಶ್ ಯಾದವ್ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಅಖಿಲೇಶ್ ಯಾದವ್, ತಮಗೆ ಕೊರೊನಾ ಪಾಸಿಟಿವ್ ಬಂದಿರುವುದಾಗಿ ಹೇಳಿಕೊಂಡಿದ್ದಾರೆ. ಜೊತೆಗೆ, ತಮ್ಮ ಸಂಪರ್ಕಕ್ಕೆ ಬಂದವರಿಗೆ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.
ಇದನ್ನೂ ಓದಿ:
ಕುಂಭ ಮೇಳದಲ್ಲಿ ಮೂರನೇ ಶಾಹಿ ಸ್ನಾನ ಇಂದು, ಕೊವಿಡ್ ಮಾರ್ಗಸೂಚಿ ಪಾಲಿಸಿ: ಉತ್ತರಾಖಂಡ ಸಿಎಂ ತೀರತ್ ಸಿಂಗ್ ರಾವತ್ ಮನವಿ
Published On - 1:18 pm, Wed, 14 April 21