ಉತ್ತರಾಖಂಡದಲ್ಲಿ ಬಸ್ ದುರಂತ; 100 ಮೀಟರ್ ಆಳದ ಕಂದಕಕ್ಕೆ ಉರುಳಿದ ಬಸ್, ಐವರು ಸಾವು

ಉತ್ತರಾಖಂಡದ ರಿಷಿಕೇಶ-ಬದ್ರಿನಾಥ್ ಹೆದ್ದಾರಿಯಲ್ಲಿ ಭೀಕರ ಬಸ್ ಅಪಘಾತ ಸಂಭವಿಸಿದೆ. 30-35 ಪ್ರಯಾಣಿಕರಿದ್ದ ಬಸ್ 100 ಮೀಟರ್ ಆಳದ ಕಂದಕಕ್ಕೆ ಉರುಳಿ ಐವರು ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ. ಎಸ್‌ಡಿಆರ್‌ಎಫ್ ಮತ್ತು ಪೊಲೀಸರು ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕನ ನಿಯಂತ್ರಣ ತಪ್ಪಿದ್ದೇ ಅಪಘಾತಕ್ಕೆ ಕಾರಣ ಎಂದು ಶಂಕಿಸಲಾಗಿದೆ.

ಉತ್ತರಾಖಂಡದಲ್ಲಿ ಬಸ್ ದುರಂತ; 100 ಮೀಟರ್ ಆಳದ ಕಂದಕಕ್ಕೆ ಉರುಳಿದ ಬಸ್, ಐವರು ಸಾವು
ಬಸ್

Updated on: Nov 17, 2026 | 8:07 AM

ರಿಷಿಕೇಶ, ನವೆಂಬರ್ 17: ಉತ್ತರಾಖಂಡದ ರಿಷಿಕೇಶ-ಬದ್ರಿನಾಥ  ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸುಮಾರು 30ರಿಂದ 35 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು ಸೇತುವೆಯಿಂದ ಸುಮಾರು 100 ಮೀಟರ್ ಆಳದ ಕಂದಕಕ್ಕೆ ಉರುಳಿದೆ. ಘಟನೆಯಲ್ಲಿ ಐವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಸ್ಥಳದಲ್ಲಿ ಎಸ್‌ಡಿಆರ್‌ಎಫ್ ಮತ್ತು ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಉತ್ತರಾಖಂಡದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ. ರಿಷಿಕೇಶದಿಂದ ಶ್ರೀನಗರದ ಕಡೆಗೆ ತೆರಳುತ್ತಿದ್ದ ಪ್ರಯಾಣಿಕರ ಬಸ್ಸೊಂದು ಮಂಗಳವಾರ ಬೆಳಗ್ಗೆ ರಿಷಿಕೇಶ-ಬದ್ರಿನಾಥ್ ರಾಷ್ಟ್ರೀಯ ಹೆದ್ದಾರಿಯ ಗುಲಾರ್ ಬಜಾರ್ ಬಳಿ ಕಂದಕಕ್ಕೆ ಬಿದ್ದಿದೆ. ಬೆಳಗಿನ ಜಾವ ಸುಮಾರು 5.30ರ ವೇಳೆಗೆ ಈ ಅಪಘಾತ ಸಂಭವಿಸಿದೆ. ಬಸ್ಸಿನಲ್ಲಿ ಸುಮಾರು 30ರಿಂದ 35 ಪ್ರಯಾಣಿಕರು ಇದ್ದರು ಎನ್ನಲಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ಸೇತುವೆಯ ಕೆಳಗೆ ಸುಮಾರು 100 ಮೀಟರ್ ಆಳದ ಕಂದಕಕ್ಕೆ ಉರುಳಿದೆ. ಅಪಘಾತದ ತೀವ್ರತೆಗೆ ಬಸ್ ಸಂಪೂರ್ಣವಾಗಿ ಜಖಂಗೊಂಡಿದೆ.

Loading...

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ಮತ್ತು ಸ್ಥಳೀಯ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿದ್ದಾರೆ. ಬ್ಯಾಸಿ ಮತ್ತು ಧಲ್ವಾಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯ ಎಸ್‌ಡಿಆರ್‌ಎಫ್ ತಂಡಗಳು ರಕ್ಷಣಾ ಕಾರ್ಯಾಚರಣೆ ಆರಂಭಿಸಿವೆ.

ಇದನ್ನೂ ಓದಿ:

ಕೆಎಸ್​ಆರ್​ಟಿಸಿ ಬಸ್ ರೂಪದಲ್ಲಿ ಬಂದ ಮೃತ್ಯು! ಭೀಕರ ಅಪಘಾತದಲ್ಲಿ ಯುವಕರಿಬ್ಬರು ಸಾವು

 

ಪ್ರಾಥಮಿಕ ಮಾಹಿತಿಯ ಪ್ರಕಾರ, ಸುಮಾರು 20 ಗಾಯಾಳುಗಳನ್ನು ರಕ್ಷಿಸಿ ಆಂಬ್ಯುಲೆನ್ಸ್‌ಗಳ ಮೂಲಕ ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ಐವರು ಮೃತಪಟ್ಟಿರುವುದಾಗಿ ವರದಿಯಾಗಿದೆ. ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿರುವ ಸಾಧ್ಯತೆಯಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

ರಕ್ಷಣಾ ಕಾರ್ಯಾಚರಣೆಗೆ ಹೆಚ್ಚುವರಿ ತಂಡ
ಅಪಘಾತದ ತೀವ್ರತೆಯನ್ನು ಗಮನದಲ್ಲಿಟ್ಟುಕೊಂಡು ಎಸ್‌ಡಿಆರ್‌ಎಫ್ ಕಮಾಂಡೆಂಟ್ ಅರ್ಪಣ್ ಯದುವಂಶಿ ಅವರ ಸೂಚನೆಯಂತೆ ಹೆಚ್ಚುವರಿ ರಕ್ಷಣಾ ತಂಡಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ. ಕಂದಕದ ಆಳ ಮತ್ತು ಗುಡ್ಡಗಾಡು ಪ್ರದೇಶವಾಗಿರುವುದರಿಂದ ರಕ್ಷಣಾ ಕಾರ್ಯಾಚರಣೆಯಲ್ಲಿ ಸವಾಲು ಎದುರಾಗಿದೆ.

ಪೊಲೀಸರು, ಎಸ್‌ಡಿಆರ್‌ಎಫ್ ಸಿಬ್ಬಂದಿ ಮತ್ತು ಸ್ಥಳೀಯ ರಕ್ಷಣಾ ತಂಡಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿವೆ. ಗಾಯಾಳುಗಳಿಗೆ ತಕ್ಷಣ ವೈದ್ಯಕೀಯ ನೆರವು ಒದಗಿಸುವ ವ್ಯವಸ್ಥೆ ಮಾಡಲಾಗಿದೆ. ಬಸ್ ರಸ್ತೆ ಬಿಟ್ಟು ಕಂದಕಕ್ಕೆ ಉರುಳಲು ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಚಾಲಕನ ನಿಯಂತ್ರಣ ತಪ್ಪಿದ್ದೇ ಅಥವಾ ತಾಂತ್ರಿಕ ದೋಷವೇ ಎಂಬ ಬಗ್ಗೆ ತನಿಖೆಯ ಬಳಿಕ ಮಾಹಿತಿ ಲಭ್ಯವಾಗಬೇಕಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
Loading...
Unable to load recommendations.
Follow Us