ಉತ್ತರಾಖಂಡ್ಗೆ ಹೊಸ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವ ಸಂಬಂಧ ಇಂದು ಡೆಹ್ರಾಡೂನ್ನಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಉತ್ತರಾಖಂಡ್ನ ಕೇಂದ್ರ ವೀಕ್ಷಕರಾದ ರಾಜನಾಥ್ ಸಿಂಗ್ ಮತ್ತು ಮೀನಾಕ್ಷಿ ಲೇಖಿ ಈ ಸಭೆಯಲ್ಲಿ ಪಾಲ್ಗೊಳ್ಳುವರು ಎಂದು ಬಿಜೆಪಿ ರಾಜ್ಯ ವಕ್ತಾರ ಶಾದಾಬ್ ಶಾಮ್ಸ್ ತಿಳಿಸಿದ್ದಾರೆ. ಇಂದು ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡಿ, ಮಂಗಳವಾರವೇ ಅವರು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿ, ಇನ್ನೂ ಹಲವು ಬಿಜೆಪಿ ಗಣ್ಯರು ಪಾಲ್ಗೊಳ್ಳಲಿದ್ದಾರೆ.
ಇಂದು ಉತ್ತರಾಖಂಡ್ನಲ್ಲಿ ಆಯ್ಕೆಯಾದ ಹೊಸ ಶಾಸಕರು ಇಂದು ವಿಧಾನಸಭೆಯಲ್ಲಿ ಬೆಳಗ್ಗೆ 11ಗಂಟೆಗೆ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಅದಾದ ಬಳಿಕ ಸಭೆ ನಡೆಯಲಿದೆ. ಇಂದು ಶಾಸಕರ ಪ್ರಮಾಣ ವಚನ ಕಾರ್ಯಕ್ರಮದ ಬಳಿಕ ಸಂಜೆ ಸಭೆ ನಡೆಯಲಿದೆ. ಆ ಸಭೆಯಲ್ಲಿ ಮುಂದಿನ ಮುಖ್ಯಮಂತ್ರಿ ಹೆಸರನ್ನು ಘೋಷಿಸಲಾಗುವುದು ಎಂದು ಉತ್ತರಾಖಂಡ್ ಬಿಜೆಪಿ ಮುಖ್ಯಸ್ಥ ಮದನ್ ಕೌಶಿಕ್ ತಿಳಿಸಿದ್ದಾರೆ.
ಹಿಂದಿನ ಅವಧಿಯಲ್ಲಿ ಉತ್ತರಾಖಂಡ್ನಲ್ಲಿ ಎರಡು ಬಾರಿ ಮುಖ್ಯಮಂತ್ರಿಯನ್ನು ಬದಲಾಯಿಸಲಾಗಿತ್ತು. ಬಳಿಕ ಪುಷ್ಕರ್ ಸಿಂಗ್ ಧಮಿಯವರನ್ನು ಸಿಎಂ ಆಗಿ ನೇಮಕ ಮಾಡಲಾಗಿತ್ತು. ಆದರೆ ಈ ಬಾರಿ ಚುನಾವಣೆಯಲ್ಲಿ ಅವರು ಕಾಂಗ್ರೆಸ್ ಅಭ್ಯರ್ಥಿ ಭುವನ್ ಚಂದ್ರ ಕಪ್ರಿ ಎದುರು 6 ಸಾವಿರಕ್ಕೂ ಅಧಿಕ ಮತಗಳಿಂದ ಸೋತಿದ್ದಾರೆ. ಹೀಗಾಗಿ ಅಲ್ಲಿ ಸಿಎಂ ಬದಲಾವಣೆ ಮಾಡಲು ಬಿಜೆಪಿ ನಿರ್ಧರಿಸಿದೆ. ಭಾನುವಾರ ಪುಷ್ಕರ್ ಸಿಂಗ್ ಧಮಿ, ಮದನ್ ಕೌಶಿಕ್ ಮತ್ತು ಮಾಜಿ ಕೇಂದ್ರ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದರು.
Published On - 9:09 am, Mon, 21 March 22