ಕೇರಳದಲ್ಲಿ ಇನ್ನೂ 5 ದಿನ ಮಳೆಯ ಅಬ್ಬರ; ಹಲವೆಡೆ ಪ್ರವಾಹ ಭೀತಿ, ಆರೆಂಜ್ ಅಲರ್ಟ್ ಘೋಷಣೆ
Kerala Rain Updates: ತಿರುವನಂತಪುರಂನ ನೆಯ್ಯರ್ ನದಿಯಲ್ಲಿ ನೀರಿನ ಮಟ್ಟ ಅಪಾಯದ ಮಟ್ಟ ಮೀರಿರುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕೇರಳ-ಲಕ್ಷದ್ವೀಪ ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಸೂಚಿಸಿದೆ.
ತಿರುವನಂತಪುರಂ: ಕೇರಳದಲ್ಲಿ ಇಂದಿನಿಂದ 5 ದಿನಗಳ ಕಾಲ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ತಿರುವನಂತಪುರಂನಲ್ಲಿ ವ್ಯಾಪಕ ಮಳೆಯಿಂದ ಆರೆಂಜ್ ಅಲರ್ಟ್ (Orange Alert) ಘೋಷಿಸಲಾಗಿದೆ. ಕೇರಳದ ಕೊಲ್ಲಂ, ಪಥನಾಂತಿಟ್ಟ ಮತ್ತು ಆಲಪ್ಪುಳ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ (Yellow Alert) ನೀಡಲಾಗಿದೆ. ಮುಂದಿನ 24 ಗಂಟೆಗಳಲ್ಲಿ ಕೇರಳದ ಪ್ರತ್ಯೇಕ ಸ್ಥಳಗಳಲ್ಲಿ 115.6 ಮಿಮೀನಿಂದ 204.4 ಮಿಮೀ ಮಳೆಯಾಗುವ ಸಾಧ್ಯತೆಯಿದೆ.
ಧಾರಾಕಾರ ಮಳೆ ಮುಂದುವರಿದರೆ ಕಳೆದ ಕೆಲವು ದಿನಗಳಲ್ಲಿ ಭಾರೀ ಮಳೆಯಾದ ಪ್ರದೇಶಗಳಲ್ಲಿ ಭೂಕುಸಿತಗಳು, ಪ್ರವಾಹಗಳು ಉಂಟಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ. ರಾತ್ರಿಯ ವೇಳೆ ಗುಡ್ಡಗಾಡು ಪ್ರದೇಶಗಳಿಗೆ ಪ್ರಯಾಣಿಸಬಾರದು ಎಂದು ಎಚ್ಚರಿಕೆ ನೀಡಲಾಗಿದೆ.
ತಿರುವನಂತಪುರಂನ ನೆಯ್ಯರ್ ನದಿಯಲ್ಲಿ ನೀರಿನ ಮಟ್ಟ ಅಪಾಯದ ಮಟ್ಟ ಮೀರಿರುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕೇರಳ-ಲಕ್ಷದ್ವೀಪ ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಸೂಚಿಸಿದೆ. ಕರ್ನಾಟಕದಲ್ಲಿ ಮೀನುಗಾರಿಕೆಗೆ ಯಾವುದೇ ನಿಷೇಧ ಹೇರಿಲ್ಲ. ಕರ್ನಾಟಕದಲ್ಲಿ ಇಂದು 40-55 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.
ಇದನ್ನೂ ಓದಿ: Karnataka Rain: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಅಕ್ಟೋಬರ್ 9ರವರೆಗೆ ಮಳೆ
ಅಕ್ಟೋಬರ್ 5ರವರೆಗೆ ಪಶ್ಚಿಮ ಬಂಗಾಳದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಉಂಟಾಗುವ ಸಾಧ್ಯತೆಯಿದೆ. ಪಶ್ಚಿಮ ಬಂಗಾಳದ ಕರಾವಳಿ ಜಿಲ್ಲೆಗಳು ಮತ್ತು ಮೇದಿನಿಪುರದಲ್ಲಿ ಅಕ್ಟೋಬರ್ 4ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜೊತೆಗೆ ಪುರುಲಿಯಾ, ಬಂಕುರಾ, ಪಶ್ಚಿಮ ವರ್ಧಮಾನ್, ಪಶ್ಚಿಮ ಮೇದಿನಿಪುರ್, ಜಾರ್ಗ್ರಾಮ್, ಬಿರ್ಭುಮ್ ಮತ್ತು ಮುರ್ಷಿದಾಬಾದ್ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜಾರ್ಖಂಡ್‌ನ ಜಲಾನಯನ ಪ್ರದೇಶಗಳಲ್ಲಿ ನಿರಂತರ ಮಳೆಯಿಂದಾಗಿ 7 ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗುವ ಸಾಧ್ಯತೆಗಳಿವೆ ಎಂದು ಪಶ್ಚಿಮ ಬಂಗಾಳ ಸರ್ಕಾರ ಹೇಳಿದೆ.
ಇದನ್ನೂ ಓದಿ: Karnataka Rain: ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಈ 7 ಜಿಲ್ಲೆಗಳಲ್ಲಿ ಮಳೆ ಜೋರು, ಯೆಲ್ಲೋ ಅಲರ್ಟ್ ಘೋಷಣೆ
ಕರ್ನಾಟಕದಲ್ಲಿ ಮಳೆಯ ಆರ್ಭಟ:
ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಅಕ್ಟೋಬರ್ 9ರವರೆಗೆ ಒಣಹವೆ ಇರಲಿದ್ದು, ಅಕ್ಟೋಬರ್ 10ರ ನಂತರ ಮಳೆ ಮತ್ತೆ ಚುರುಕಾಗುವ ಸಾಧ್ಯತೆ ಇದೆ. ಅಕ್ಟೋಬರ್ 10ರ ಬಳಿಕ ಕರ್ನಾಟಕದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆ ಹೆಚ್ಚಾಗುವ ನಿರೀಕ್ಷೆಯಿದೆ. ಬೆಂಗಳೂರು, ಮೈಸೂರು, ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ ಮುಂದಿನ ವಾರ ಹೆಚ್ಚು ಮಳೆಯಾಗಲಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ