West Bengal: ಪಶ್ಚಿಮ ಬಂಗಾಳ ಪಂಚಾಯತ್ ಚುನಾವಣೆ; ಹಿಂಸಾಚಾರದಲ್ಲಿ ಕನಿಷ್ಠ ನಾಲ್ವರು ಸಾವು

ಕೂಚ್‌ಬೆಹಾರ್ ಜಿಲ್ಲೆಯ ಫಲಿಮಾರಿ ಗ್ರಾಮ ಪಂಚಾಯಿತಿಯಲ್ಲಿ ಬಿಜೆಪಿ ಮತಗಟ್ಟೆ ಏಜೆಂಟ್ ಮಾಧಬ್ ಬಿಸ್ವಾಸ್ ಅವರನ್ನು ಹತ್ಯೆ ಮಾಡಲಾಗಿದೆ.

West Bengal: ಪಶ್ಚಿಮ ಬಂಗಾಳ ಪಂಚಾಯತ್ ಚುನಾವಣೆ; ಹಿಂಸಾಚಾರದಲ್ಲಿ ಕನಿಷ್ಠ ನಾಲ್ವರು ಸಾವು
ಸ್ವತಂತ್ರ ಅಭ್ಯರ್ಥಿಯ ಬೆಂಬಲಿಗನ ಹತ್ಯೆ ಖಂಡಿಸಿ ಪ್ರತಿಭಟನೆ (ಪಿಟಿಐ ಚಿತ್ರ)Image Credit source: PTI
Follow us
Ganapathi Sharma
|

Updated on: Jul 08, 2023 | 10:54 AM

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ (West Bengal) ನಡೆಯುತ್ತಿರುವ ಪಂಚಾಯತ್ ಚುನಾವಣೆ (Panchayat Election) ಸಂದರ್ಭ ಹಲವೆಡೆ ಸಂಭವಿಸಿದ ಹಿಂಸಾಚಾರದಲ್ಲಿ ಕನಿಷ್ಠ ನಾಲ್ವರು ಮೃತಪಟ್ಟಿದ್ದಾರೆ ಎಂದು ಅಧಕಾರಿಗಳು ಶನಿವಾರ ತಿಳಿಸಿದ್ದಾರೆ. ರಾಜ್ಯದ ಗ್ರಾಮೀಣ ಪ್ರದೇಶದ ಪಂಚಾಯತ್​ಗಳ 73,887 ಕ್ಷೇತ್ರಗಳಿಗೆ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, 5.67 ಕೋಟಿ ಜನರು ಸುಮಾರು 2.06 ಲಕ್ಷ ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಕೂಚ್‌ಬೆಹಾರ್ ಜಿಲ್ಲೆಯ ಫಲಿಮಾರಿ ಗ್ರಾಮ ಪಂಚಾಯಿತಿಯಲ್ಲಿ ಬಿಜೆಪಿ ಮತಗಟ್ಟೆ ಏಜೆಂಟ್ ಮಾಧಬ್ ಬಿಸ್ವಾಸ್ ಅವರನ್ನು ಹತ್ಯೆ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ. ಬಿಸ್ವಾಸ್ ಮತಗಟ್ಟೆಗೆ ಪ್ರವೇಶಿಸಲು ಪ್ರಯತ್ನಿಸಿದಾಗ ಅವರನ್ನು ಟಿಎಂಸಿ ಬೆಂಬಲಿಗರು ತಡೆದರು. ಪರಿಸ್ಥಿತಿ ಉಲ್ಬಣಗೊಂಡಿದ್ದು ಬಿಸ್ವಾಸ್ ಅವರನ್ನು ಹತ್ಯೆ ಮಾಡಲಾಗಿದೆ. ಆದರೆ, ಟಿಎಂಸಿ ಕಾರ್ಯಕರ್ತರು ಹತ್ಯೆ ಮಾಡಿದ್ದಾರೆ ಎಂಬ ಆರೋಪಗಳನ್ನು ಪಕ್ಷವು ಅಲ್ಲಗಳೆದಿದೆ.

ಉತ್ತರ 24 ಪರಗಣ ಜಿಲ್ಲೆಯ ಕದಂಬಗಚಿ ಪ್ರದೇಶದಲ್ಲಿ ಸ್ವತಂತ್ರ ಅಭ್ಯರ್ಥಿಯ ಬೆಂಬಲಿಗನನ್ನು ರಾತ್ರಿಯಿಡೀ ಥಳಿಸಿದ ಘಟನೆ ನಡೆದಿದೆ. ಪರಿಣಾಮವಾಗಿ ಆತ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು 41 ವರ್ಷದ ಅಬ್ದುಲ್ಲಾ ಎಂದು ಗುರುತಿಸಲಾಗಿದೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ, ಬೆಳಗ್ಗೆ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಭಾಸ್ಕರ್ ಮುಖರ್ಜಿ ತಿಳಿಸಿರುವುದಾಗಿ ‘ಪಿಟಿಐ’ ಸುದ್ದಿಸಂಸ್ಥೆ ವರದಿ ಮಾಡಿದೆ.

ಮುರ್ಷಿದಾಬಾದ್ ಜಿಲ್ಲೆಯ ಕಪಾಸ್‌ದಂಗ ​​ಪ್ರದೇಶದಲ್ಲಿ ನಡೆದ ಮತದಾನ ಸಂಬಂಧಿತ ಹಿಂಸಾಚಾರದಲ್ಲಿ ಟಿಎಂಸಿ ಕಾರ್ಯಕರ್ತನೊಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ಬಾಬರ್ ಅಲಿ ಎಂದು ಗುರುತಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುರ್ಷಿದಾಬಾದ್ ಜಿಲ್ಲೆಯ ರೆಜಿನಗರ ಮತ್ತು ಖಾರ್‌ಗ್ರಾಮ್‌ನಲ್ಲಿ ತನ್ನ ಇಬ್ಬರು ಕಾರ್ಯಕರ್ತರು ಮತ್ತು ಕೂಚ್‌ಬೆಹಾರ್ ಜಿಲ್ಲೆಯ ತುಫಂಗಂಜ್‌ನಲ್ಲಿ ಇನ್ನೊಬ್ಬ ವ್ಯಕ್ತಿಯನ್ನು ಕೊಲ್ಲಲಾಗಿದೆ ಎಂದು ಆಡಳಿತಾರೂಢ ಟಿಎಂಸಿ ಆರೋಪಿಸಿದೆ.

ಇದನ್ನೂ ಓದಿ: ಚೀನಾದೊಂದಿಗಿನ ಗಡಿ ಸಮಸ್ಯೆ, ಮಣಿಪುರದಲ್ಲಿನ ಜನಾಂಗೀಯ ಘರ್ಷಣೆಗಳ ಬಗ್ಗೆ ಮೋದಿ ಮೌನವೇಕೆ?: ಕಾಂಗ್ರೆಸ್

ಮತದಾನವು ಶಾಂತಿಯುತವಾಗಿ ಪ್ರಾರಂಭವಾಯಿತು. ಆದರೆ ಕಳೆದ ರಾತ್ರಿಯಿಂದ ಕಾಂಗ್ರೆಸ್, ಬಿಜೆಪಿ ಮತ್ತು ಸಿಪಿಐ(ಎಂ) ಪಕ್ಷಗಳ ಕಾರ್ಯಕರ್ತರು ಟಿಎಂಸಿ ಕಾರ್ಯಕರ್ತರ ಮೇಲೆ ದಾಳಿ ನಡೆಸುತ್ತಿದ್ದಾರೆ. ನಮ್ಮ ಮೂವರು ಕಾರ್ಯಕರ್ತರು ರೆಜಿನಗರ, ತುಫಂಗಂಜ್ ಮತ್ತು ಖಾರ್‌ಗ್ರಾಮ್‌ನಲ್ಲಿ ಸಾವನ್ನಪ್ಪಿದ್ದಾರೆ ಮತ್ತು ಡೊಮ್‌ಕಲ್‌ನಲ್ಲಿ ನಮ್ಮ ಇಬ್ಬರು ಕಾರ್ಯಕರ್ತರು ಗಾಯಗೊಂಡಿದ್ದಾರೆ. ಎಲ್ಲಿ ಕೇಂದ್ರ ಪಡೆಗಳು ಎಂದು ಟಿಎಂಸಿ ವಕ್ತಾರ ಕುನಾಲ್ ಘೋಷ್ ಪ್ರಶ್ನಿಸಿದ್ದಾರೆ.

ಮಾಲ್ಡಾ ಜಿಲ್ಲೆಯಲ್ಲಿ ಕಾಂಗ್ರೆಸ್ ಬೆಂಬಲಿಗರೊಂದಿಗೆ ನಡೆದ ಘರ್ಷಣೆಯಲ್ಲಿ ಟಿಎಂಸಿ ನಾಯಕನ ಸಹೋದರ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾಣಿಕ್ಚಕ್ ಪೊಲೀಸ್ ಠಾಣೆ ವ್ಯಾಪ್ತಿಯ ಜಿಶಾರತ್ತೋಲಾದಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಮಾಲೆಕ್ ಶೇಖ್ ಎಂದು ಗುರುತಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ