- TV9 Kannada Photo gallery Amit shah thanks to devanahalli vijayapura people who gathered for rod show participated BJP meeting in Bengaluru
ಪ್ರತಿಕೂಲ ಹವಾಮಾನದ ನಡುವೆಯೂ ಬೃಹತ್ ಸಂಖ್ಯೆಯಲ್ಲಿ ಬಂದವರಿಗೆ ಕೃತಜ್ಞ; ಅಮಿತ್ ಶಾ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರದಲ್ಲಿ ನಡೆಯಬೇಕಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರೋಡ್ ಶೋ ಮಳೆಯಿಂದಾಗಿ ರದ್ದಾಗಿದೆ. ಆದಾಗ್ಯೂ ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದಕ್ಕೆ ಸಚಿವರು ಕೃತಜ್ಞತೆ ವ್ಯಕ್ತಪಡಿಸಿದ್ದಾರೆ.
Updated on: Apr 21, 2023 | 8:36 PM

ದೇವನಹಳ್ಳಿಯಲ್ಲಿ ನಡೆಯಬೇಕಾಗಿದ್ದ ಕೇಂದ್ರ ಗೃಹ ಸಚಿವರು ಹಾಗೂ ಸಹಕಾರ ಸಚಿವರಾದ ಅಮಿತ್ ಶಾ ಅವರ ಬೃಹತ್ ರೋಡ್ ಶೋ ಕಾರ್ಯಕ್ರಮವು ಭಾರಿ ಮಳೆಯ ಕಾರಣದಿಂದಾಗಿ ಮುಂದೂಡಲ್ಪಟ್ಟಿದೆ. ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ರಾಜ್ಯ ಬಿಜೆಪಿ ಘಟಕ ಟ್ವೀಟ್ ಮಾಡಿದೆ.

ಇದಕ್ಕೆ ಪ್ರತಿಕ್ರಿಯಿಸಿ ಟ್ವೀಟ್ ಮಾಡಿರುವ ಅಮಿತ್ ಶಾ, ಭಾರೀ ಮಳೆಯಿಂದಾಗಿ ದೇವನಹಳ್ಳಿ ಜನತೆಯೊಂದಿಗಿರಲು ಸಾಧ್ಯವಾಗಿಲ್ಲ. ಪ್ರತಿಕೂಲ ಹವಾಮಾನದ ಸಂದರ್ಭದಲ್ಲೂ ಭಾರಿ ಸಂಖ್ಯೆಯಲ್ಲಿ ಸೇರಿದ ಜನಸ್ತೋಮಕ್ಕೆ ಕೃತಜ್ಞನಾಗಿದ್ದೇನೆ. ಪ್ರಚಾರಕ್ಕಾಗಿ ದೇವನಹಳ್ಳಿಗೆ ಶೀಘ್ರದಲ್ಲೇ ಭೇಟಿ ನೀಡುತ್ತೇನೆ. ಕರ್ನಾಟಕದ ಜನರ ಉತ್ಸಾಹವು ಬಿಜೆಪಿಯು ಬೃಹತ್ ಗೆಲುವು ಸಾಧಿಸಲಿದೆ ಎಂಬುದನ್ನು ಪ್ರತಿಬಿಂಬಿಸುತ್ತಿದೆ ಎಂದು ಉಲ್ಲೇಖಿಸಿದ್ದಾರೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅಮಿತ್ ಶಾ, ಸ್ಥಳಕ್ಕೆ ತೆರಳುವ ಮೊದಲು ವಿಮಾನ ನಿಲ್ದಾಣದಲ್ಲಿ ಕಾಯುತ್ತಿದ್ದರು. ಆದರೆ ಮಳೆಯಿಂದಾಗಿ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿಯು ರೋಡ್ ಶೋ ರದ್ದುಗೊಳಿಸಲು ನಿರ್ಧರಿಸಿತ್ತು.

ಅಮಿತ್ ಶಾ ಅವರ ಭೇಟಿಗೆ ಮುಂಚಿತವಾಗಿ ದೇವನಹಳ್ಳಿ ಪಟ್ಟಣ ಮತ್ತು ಸುತ್ತಮುತ್ತಲಿನ ಪ್ರದೇಶಗಳು ಕೇಸರಿ ಬಣ್ಣದಿಂದ ಕಂಗೊಳಿಸುತ್ತಿತ್ತು. ರಸ್ತೆಯ ಇಕ್ಕೆಲುಗಳಲ್ಲಿ ಬ್ಯಾರಿಕೇಡ್ ಹಾಕಿ ಕೇಸರಿ ಬಾವುಟಗಳ ಕಟ್ಟಲಾಗಿತ್ತು.

ರೋಡ್ ಶೋ ನಡೆಯುವ ರಸ್ತೆಯಲ್ಲಿ ಅಂಗಡಿ ಮುಂಗಟ್ಟುಗಳು ಬಂದ್ ಮಾಡಿಸಲಾಗಿತ್ತು. ಅಂಗಡಿ ಮುಗಟ್ಟುಗಳ ಮುಂದೆ ಸಾವಿರಾರು ಜನ ನಿಲ್ಲಲು ವ್ಯವಸ್ಥೆ ಸಹ ಮಾಡಲಾಗಿತ್ತು. ಆದರೆ ಕೊನೇ ಕ್ಷಣದಲ್ಲಿ ರೋಡ್ ಭಾರೀ ಮಳೆ ಸುರಿಯಿತು. ಇದರಿಂದಾಗಿ ರೋಡ್ ಶೋ ರದ್ದಾಗಿದ್ದರಿಂದ ಕಾರ್ಯಕರ್ತರಿಗೆ ನಿರಾಸೆಯಾಯಿತು.

ಬಿಜೆಪಿ ತನ್ನ ಎಲ್ಲಾ 224 ಅಭ್ಯರ್ಥಿಗಳ ಹೆಸರುಗಳನ್ನು ಘೋಷಿಸಿದ ನಂತರ ಅಮಿತ್ ಶಾ ಇದೇ ಮೊದಲ ಬಾರಿಗೆ ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಪಕ್ಷದ ಹಿರಿಯ ನಾಯಕರ ಜತೆ ಶಾ ಸಭೆ ನಡೆಸಲಿದ್ದಾರೆ.

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.
Read More



