ಅಭಿಷೇಕ್ ಶರ್ಮಾ ಆರ್ಭಟಕ್ಕೆ ವಿರಾಟ್ ಕೊಹ್ಲಿ ದಾಖಲೆ ಧೂಳೀಪಟ
ABhishek Sharma Record: ಇಂಗ್ಲೆಂಡ್ ವಿರುದ್ಧದ 5ನೇ ಟಿ20 ಪಂದ್ಯದಲ್ಲಿ ಅಭಿಷೇಕ್ ಶರ್ಮಾ 135 ರನ್ಗಳ ಭರ್ಜರಿ ಸೆಂಚುರಿ ಸಿಡಿಸಿದ್ದಾರೆ. ಈ ಸೆಂಚುರಿಯೊಂದಿಗೆ ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಮೂಲಕ ಟಿ20 ಸರಣಿಯಲ್ಲಿ ಭಾರತದ ಪರ ಅತ್ಯಧಿಕ ರನ್ ಕಲೆಹಾಕಿದ ಎರಡನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.
Updated on: Feb 03, 2025 | 8:03 AM

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 5ನೇ ಟಿ20 ಪಂದ್ಯದಲ್ಲಿ ಅಭಿಷೇಕ್ ಶರ್ಮಾ ತೂಫಾನ್ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಅಭಿ ಕೇವಲ 17 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅಷ್ಟೇ ಅಲ್ಲದೆ ಕೇವಲ 37 ಎಸೆತಗಳಲ್ಲಿ ಸ್ಪೋಟಕ ಸೆಂಚುರಿ ಸಿಡಿಸಿ ಅಬ್ಬರಿಸಿದರು.

ಈ ಸೆಂಚುರಿಯೊಂದಿಗೆ ಟಿ20 ಕ್ರಿಕೆಟ್ನಲ್ಲಿ ಅತೀ ವೇಗದ ಶತಕ ಸಿಡಿಸಿದ 2ನೇ ಭಾರತೀಯ ಬ್ಯಾಟರ್ ಎನಿಸಿಕೊಂಡರು. ಇನ್ನು 135 ರನ್ಗಳ ಇನಿಂಗ್ಸ್ನೊಂದಿಗೆ ಭಾರತದ ಪರ ಟಿ20 ಪಂದ್ಯದಲ್ಲಿ ಗರಿಷ್ಠ ಸ್ಕೋರ್ಗಳಿಸಿದ ಬ್ಯಾಟರ್ ಎಂಬ ದಾಖಲೆಯನ್ನು ಸಹ ಬರೆದರು. ಈ ದಾಖಲೆಯೊಂದಿಗೆ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಅಭಿಷೇಕ್ ಶರ್ಮಾ ಕಲೆಹಾಕಿದ ಒಟ್ಟು ಸ್ಕೋರ್ 279 ರನ್ಗಳು.

ಇದಕ್ಕೂ ಮುನ್ನ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಭಾರತದ ಪರ ಅತ್ಯಧಿಕ ರನ್ ಕಲೆಹಾಕಿದ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿತ್ತು. 2021 ರಲ್ಲಿ ಕಿಂಗ್ ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಮೂರು ಅರ್ಧಶತಕಗಳೊಂದಿಗೆ 231 ರನ್ ಬಾರಿಸಿ ಇತಿಹಾಸ ನಿರ್ಮಿಸಿದ್ದರು.

ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ಅಭಿಷೇಕ್ ಶರ್ಮಾ ಯಶಸ್ವಿಯಾಗಿದ್ದಾರೆ. ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ 5 ಇನಿಂಗ್ಸ್ ಆಡಿರುವ ಅಭಿಷೇಕ್ ಕೇವಲ 127 ಎಸೆತಗಳಲ್ಲಿ 279 ರನ್ ಚಚ್ಚಿದ್ದಾರೆ. ಇದರ ನಡುವೆ 1 ಶತಕ ಹಾಗೂ 1 ಅರ್ಧಶತಕ ಕೂಡ ಮೂಡಿಬಂದಿವೆ. ಈ ಮೂಲಕ ಆಂಗ್ಲರ ವಿರುದ್ಧದ ಟಿ20 ಸರಣಿಯಲ್ಲಿ ಅತ್ಯಧಿಕ ರನ್ ಕಲೆಹಾಕಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಹಾಗೆಯೇ ಟಿ20 ಸರಣಿಯೊಂದರಲ್ಲಿ ಭಾರತದ ಪರ ಅತೀ ಹೆಚ್ಚು ರನ್ ಕಲೆಹಾಕಿದ 2ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಮತ್ತೋರ್ವ ಯುವ ದಾಂಡಿಗ ತಿಲಕ್ ವರ್ಮಾ. 2024 ರಲ್ಲಿ ಸೌತ್ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ತಿಲಕ್ 280 ರನ್ ಬಾರಿಸಿ ಈ ದಾಖಲೆ ನಿರ್ಮಿಸಿದ್ದಾರೆ. ಇದೀಗ 279 ರನ್ಗಳೊಂದಿಗೆ ಅಭಿಷೇಕ್ ಶರ್ಮಾ ಈ ದಾಖಲೆ ಪಟ್ಟಿಯಲ್ಲಿ ದ್ವಿತೀಯ ಸ್ಥಾನ ಅಲಂಕರಿಸಿದ್ದಾರೆ.



















