Abhishek Sharma: ಗುರುವಿನ ದಾಖಲೆಯನ್ನೇ ಮುರಿದ ಶಿಷ್ಯ
Abhishek Sharma - Yuvraj Singh: ಅಭಿಷೇಕ್ ಶರ್ಮಾ ಟೀಮ್ ಇಂಡಿಯಾದ ಮಾಜಿ ಆಲ್ರೌಂಡರ್ ಯುವರಾಜ್ ಸಿಂಗ್ ಗರಡಿ ಹುಡುಗ. ಪಂಜಾಬ್ ಮೂಲದ ಅಭಿಷೇಕ್ಗೆ ಯುವಿ ವಿಶೇಷ ತರಬೇತಿ ನೀಡಿದ್ದರು. ಅಲ್ಲದೆ ಈ ಬಾರಿಯ ಐಪಿಎಲ್ನಲ್ಲಿ ಭರ್ಜರಿ ಪ್ರದರ್ಶನದೊಂದಿಗೆ ಮಿಂಚಿದ್ದ ಅಭಿಷೇಕ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಬಳಿಕ ಯುವರಾಜ್ ಸಿಂಗ್ ಅವರಿಗೆ ಧನ್ಯವಾದ ಅರ್ಪಿಸಿದ್ದರು. ಇದೀಗ ತನ್ನ ಗುರುವಿನ ದಾಖಲೆಯನ್ನೇ ಮುರಿದು ಅಭಿಷೇಕ್ ಎಲ್ಲರ ಗಮನ ಸೆಳೆದಿದ್ದಾರೆ.
Updated on: Jul 08, 2024 | 8:31 AM

ಹರಾರೆಯಲ್ಲಿ ನಡೆದ ಝಿಂಬಾಬ್ವೆ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಅಭಿಷೇಕ್ ಶರ್ಮಾ (Abhishek Sharma) ಭರ್ಜರಿ ಶತಕ ಸಿಡಿಸಿ ಹಲವು ದಾಖಲೆ ಬರೆದಿದ್ದಾರೆ. ಈ ದಾಖಲೆಗಳ ನಡುವೆ ಯುವರಾಜ್ ಸಿಂಗ್ ಹೆಸರಿನಲ್ಲಿದ್ದ ವಿಶೇಷ ದಾಖಲೆಯೊಂದನ್ನು ಅಭಿಷೇಕ್ ತಮ್ಮದಾಗಿಸಿಕೊಂಡಿದ್ದಾರೆ. ಆ ದಾಖಲೆ ಯಾವುದು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಆರಂಭಿಕನಾಗಿ ಕಣಕ್ಕಿಳಿದ ಅಭಿಷೇಕ್ ಶರ್ಮಾ ಮೊದಲ ಓವರ್ನಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಹೊಡಿಬಡಿ ಆಟಕ್ಕೆ ಒತ್ತು ನೀಡಿದ್ದ ಯುವ ಎಡಗೈ ದಾಂಡಿಗ ಝಿಂಬಾಬ್ವೆ ಬೌಲರ್ಗಳ ಬೆಂಡೆತ್ತಿದರು. ಪರಿಣಾಮ ಕೇವಲ 46 ಎಸೆತಗಳಲ್ಲಿ 8 ಭರ್ಜರಿ ಸಿಕ್ಸ್ ಹಾಗೂ 7 ಫೋರ್ಗಳೊಂದಿಗೆ ಸ್ಪೋಟಕ ಶತಕ ಮೂಡಿಬಂತು.

ವಿಶೇಷ ಎಂದರೆ ಅಭಿಷೇಕ್ ಶರ್ಮಾ ತಮ್ಮ 100 ರನ್ಗಳಲ್ಲಿ 65 ರನ್ ಸಿಡಿಸಿರುವುದು ಸ್ಪಿನ್ನರ್ಗಳ ವಿರುದ್ಧ. ಅಂದರೆ ಸ್ಪಿನ್ ಬೌಲರ್ಗಳನ್ನೇ ಟಾರ್ಗೆಟ್ ಮಾಡಿದ್ದ ಅಭಿಷೇಕ್ 28 ಎಸೆತಗಳಲ್ಲಿ 65 ರನ್ ಕಲೆಹಾಕಿದ್ದರು. ಈ ಮೂಲಕ ಯುವರಾಜ್ ಸಿಂಗ್ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಂಡರು.

ಇದಕ್ಕೂ ಮುನ್ನ ಟಿ20 ಇನಿಂಗ್ಸ್ನಲ್ಲಿ ಸ್ಪಿನ್ನರ್ಗಳ ವಿರುದ್ಧ ಅತ್ಯಧಿಕ ರನ್ ಬಾರಿಸಿದ ದಾಖಲೆ ಯುವರಾಜ್ ಸಿಂಗ್ ಹೆಸರಿನಲ್ಲಿತ್ತು. 2012 ರಲ್ಲಿ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಸ್ಪಿನ್ನರ್ಗಳ ವಿರುದ್ಧ ಯುವರಾಜ್ ಸಿಂಗ್ 57 ರನ್ ಸಿಡಿಸಿ ಈ ವಿಶೇಷ ದಾಖಲೆ ನಿರ್ಮಿಸಿದ್ದರು.

ಇದೀಗ 12 ವರ್ಷಗಳ ಬಳಿಕ ಈ ದಾಖಲೆಯನ್ನು ಮುರಿಯುವಲ್ಲಿ ಅಭಿಷೇಕ್ ಶರ್ಮಾ ಯಶಸ್ವಿಯಾಗಿದ್ದಾರೆ. ಅದು ಕೂಡ ತಮ್ಮ ಗುರು ಯುವರಾಜ್ ಸಿಂಗ್ ಅವರ ದಾಖಲೆಯನ್ನೇ ಮುರಿಯುವ ಮೂಲಕ ಎಂಬುದು ವಿಶೇಷ.

ಇನ್ನು ಈ ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಬ್ಯಾಕ್ ಟು ಬ್ಯಾಕ್ ಮೂರು ಸಿಕ್ಸ್ ಸಿಡಿಸಿ ಶತಕ ಪೂರೈಸಿದ್ದರು. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲಿ 82 ರನ್ಗಳ ಬಳಿಕ ಹ್ಯಾಟ್ರಿಕ್ ಸಿಕ್ಸ್ ಸಿಡಿಸಿ ಶತಕ ಪೂರೈಸಿದ ಮೊದಲ ಭಾರತೀಯ ಬ್ಯಾಟರ್ ಎಂಬ ದಾಖಲೆಯನ್ನು ಅಭಿಷೇಕ್ ಶರ್ಮಾ ತಮ್ಮದಾಗಿಸಿಕೊಂಡಿದ್ದಾರೆ.
