
ನ್ಯೂಜಿಲೆಂಡ್ ವಿರುದ್ಧ ವೆಲ್ಲಿಂಗ್ಟನ್‌ನಲ್ಲಿ ನಡೆದ ಮೂರನೇ ಟಿ20 ಪಂದ್ಯದಲ್ಲಿ ಸ್ಫೋಟಕ ಶತಕ ಸಿಡಿಸಿದ ಟೀಂ ಇಂಡಿಯಾದ ಯುವ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ, ಐಸಿಸಿ ಪುರುಷರ ಟಿ20 ಬ್ಯಾಟಿಂಗ್ ಶ್ರೇಯಾಂಕದಲ್ಲಿ ಮತ್ತೆ ನಂ.1 ಸ್ಥಾನವನ್ನು ಪಡೆದುಕೊಂಡಿದ್ದಾರೆ. ಮತ್ತೊಂದೆಡೆ, ಭಾರತ ತಂಡದ ನಾಯಕ ಶ್ರೇಯಸ್ ಅಯ್ಯರ್ ಬ್ಯಾಟಿಂಗ್‌ನಲ್ಲಿ ನಿರಂತರ ವೈಫಲ್ಯ ಅನುಭವಿಸುತ್ತಿದ್ದು, ನಾಲ್ಕು ಸ್ಥಾನ ಕುಸಿದು 9ನೇ ಸ್ಥಾನಕ್ಕೆ ಜಾರಿದ್ದಾರೆ(PC-BCCI x).
ಮಂಗಳವಾರ ನ್ಯೂಜಿಲೆಂಡ್ ವಿರುದ್ಧ ನಡೆದ ಮೂರನೇ ಟಿ20 ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಕೇವಲ 38 ಎಸೆತಗಳಲ್ಲಿ 113 ರನ್ ಸಿಡಿಸಿದ್ದರು. ಕೇವಲ 35 ಎಸೆತಗಳಲ್ಲಿ ಶತಕ ಪೂರೈಸಿದ ಎಡಗೈ ಬ್ಯಾಟರ್, ಭಾರತ ತಂಡಕ್ಕೆ ಆರು ವಿಕೆಟ್‌ಗಳ ಭರ್ಜರಿ ಗೆಲುವು ತಂದುಕೊಟ್ಟರು. ಈ ಗೆಲುವಿನೊಂದಿಗೆ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ 3-0 ಅಂತರದಲ್ಲಿ ಮುನ್ನಡೆ ಸಾಧಿಸಿ ಸರಣಿಯನ್ನು ತನ್ನದಾಗಿಸಿಕೊಂಡಿದೆ(PC-BCCI x).
ಅಭಿಷೇಕ್ ಅವರ ಈ ಸ್ಫೋಟಕ ಇನ್ನಿಂಗ್ಸ್ ಐಸಿಸಿ ಶ್ರೇಯಾಂಕದಲ್ಲೂ ದೊಡ್ಡ ಬದಲಾವಣೆಗೆ ಕಾರಣವಾಗಿದೆ. ಕಳೆದ ಜುಲೈನಲ್ಲಿ ಐರ್ಲೆಂಡ್ ವಿರುದ್ಧದ ಟಿ20 ಸರಣಿಯ ಬಳಿಕ ನಂ.1 ಸ್ಥಾನಕ್ಕೇರಿದ್ದ ಭಾರತದ ಮತ್ತೊಬ್ಬ ಬ್ಯಾಟರ್ ಇಶಾನ್ ಕಿಶನ್ ಅವರನ್ನು ಹಿಂದಿಕ್ಕಿ ಅಭಿಷೇಕ್ ಮತ್ತೆ ಅಗ್ರಸ್ಥಾನಕ್ಕೇರಿದ್ದಾರೆ. ಇಶಾನ್ ಕಿಶನ್ ಇದೀಗ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ(PC-BCCI x).
2025ರ ಜುಲೈನಲ್ಲಿ ಆಸ್ಟ್ರೇಲಿಯಾದ ಟ್ರಾವಿಸ್ ಹೆಡ್ ಅವರನ್ನು ಹಿಂದಿಕ್ಕುವ ಮೂಲಕ ಅಭಿಷೇಕ್ ಶರ್ಮಾ ಮೊದಲ ಬಾರಿಗೆ ಟಿ20 ಬ್ಯಾಟಿಂಗ್ ಶ್ರೇಯಾಂಕದಲ್ಲಿ ನಂ.1 ಸ್ಥಾನಕ್ಕೇರಿದ್ದರು. ಸುಮಾರು ಒಂದು ವರ್ಷದವರೆಗೆ ಅಗ್ರಸ್ಥಾನದಲ್ಲಿದ್ದ ಅವರು, ಬಳಿಕ ಇಶಾನ್ ಕಿಶನ್ ಅವರ ಸ್ಥಿರ ಪ್ರದರ್ಶನದಿಂದಾಗಿ ಎರಡನೇ ಸ್ಥಾನಕ್ಕೆ ಕುಸಿದಿದ್ದರು. ಈ ವರ್ಷದ ಟಿ20 ವಿಶ್ವಕಪ್‌ನಲ್ಲಿನ ಇಶಾನ್ ಅವರ ಪ್ರದರ್ಶನವೂ ಅವರಿಗೆ ಅಗ್ರಸ್ಥಾನ ಪಡೆಯಲು ನೆರವಾಗಿತ್ತು(PC-BCCI x).
ಅಭಿಷೇಕ್ ಶರ್ಮಾ ಮತ್ತೆ ನಂ.1 ಸ್ಥಾನಕ್ಕೇರಿರುವುದು ಸಂಭ್ರಮದ ಸುದ್ದಿಯಾದರೆ, ಭಾರತ ತಂಡದ ನಾಯಕ ಶ್ರೇಯಸ್ ಅಯ್ಯರ್ ಅವರ ಕಳಪೆ ಫಾರ್ಮ್ ಚಿಂತೆಗೆ ಕಾರಣವಾಗಿದೆ. ಈ ತಿಂಗಳ ಆರಂಭದಲ್ಲಿ ಲಕ್ನೋದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ನಡೆದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ಕೇವಲ 43 ಎಸೆತಗಳಲ್ಲಿ ಅಜೇಯ 102 ರನ್ ಸಿಡಿಸಿದ್ದರು. ಇದು ಅವರ ಟಿ20 ಅಂತಾರಾಷ್ಟ್ರೀಯ ವೃತ್ತಿಜೀವನದ ಚೊಚ್ಚಲ ಶತಕವಾಗಿತ್ತು. ಈ ಭರ್ಜರಿ ಪ್ರದರ್ಶನದ ಫಲವಾಗಿ ಅವರು ಟಿ20 ಬ್ಯಾಟಿಂಗ್ ಶ್ರೇಯಾಂಕದ ಅಗ್ರ ಐವರ ಪಟ್ಟಿಗೆ ಪ್ರವೇಶಿಸಿದ್ದರು(PC-BCCI x).
ಆದರೆ, ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಶ್ರೇಯಸ್ ಅದೇ ಲಯವನ್ನು ಮುಂದುವರಿಸಲು ಸಾಧ್ಯವಾಗಿಲ್ಲ. ಮೊದಲ ಪಂದ್ಯದಲ್ಲಿ 42 ರನ್ ಗಳಿಸಿದ್ದ ಅವರು, ನಂತರದ ಎರಡು ಪಂದ್ಯಗಳಲ್ಲಿ ಕ್ರಮವಾಗಿ 7 ಮತ್ತು 5 ರನ್ ಗಳಿಸಿ ನಿರಾಸೆ ಮೂಡಿಸಿದ್ದಾರೆ. ವೆಲ್ಲಿಂಗ್ಟನ್‌ನಲ್ಲಿ ನಡೆದ ಮೂರನೇ ಟಿ20 ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ 10 ಎಸೆತಗಳನ್ನು ಎದುರಿಸಿ ಕೇವಲ 5 ರನ್ ಗಳಿಸಿದರು. ನ್ಯೂಜಿಲೆಂಡ್ ನಾಯಕ ಮಿಚೆಲ್ ಸ್ಯಾಂಟ್ನರ್ ಅವರ ಬೌಲಿಂಗ್‌ನಲ್ಲಿ ವಿಕೆಟ್ ಒಪ್ಪಿಸಿದರು(PC-BCCI x).