ಬಿರುಗಾಳಿ ಬ್ಯಾಟಿಂಗ್… ಹೊಸ ವಿಶ್ವ ದಾಖಲೆ ನಿರ್ಮಿಸಿದ ಅಭಿಷೇಕ್ ಶರ್ಮಾ
Abhishek Sharma's Record: ಆಸ್ಟ್ರೇಲಿಯಾ ವಿರುದ್ಧದ ದ್ವಿತೀಯ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ 4 ವಿಕೆಟ್ಗಳ ಸೋಲನುಭವಿಸಿದೆ. ಈ ಸೋಲಿನ ನಡುವೆಯೂ ಭಾರತ ತಂಡದ ಯುವ ಎಡಗೈ ದಾಂಡಿಗ ಅಭಿಷೇಕ್ ಶರ್ಮಾ ಭರ್ಜರಿ ದಾಖಲೆಯೊಂದನ್ನು ಬರೆದಿದ್ದಾರೆ. ಅದು ಕೂಡ ಅತ್ಯುತ್ತಮ ಸ್ಟ್ರೈಕ್ ರೇಟ್ನೊಂದಿಗೆ ಎಂಬುದು ವಿಶೇಷ.
Updated on: Nov 01, 2025 | 7:23 AM

ಟಿ20 ಕ್ರಿಕೆಟ್ನಲ್ಲಿ ಅಭಿಷೇಕ್ ಶರ್ಮಾ (Abhishek Sharma) ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ತನ್ನ ಸಿಡಿಲಬ್ಬರದ ಬ್ಯಾಟಿಂಗ್ನೊಂದಿಗೆ ಎಂಬುದು ವಿಶೇಷ. ಮೆಲ್ಬೋರ್ನ್ನ ಎಂಸಿಜಿ ಸ್ಟೇಡಿಯಂನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಅಭಿಷೇಕ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು.

ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಅಭಿಷೇಕ್ ಶರ್ಮಾ 37 ಎಸೆತಗಳಲ್ಲಿ 2 ಭರ್ಜರಿ ಸಿಕ್ಸ್ ಹಾಗೂ 8 ಫೋರ್ಗಳೊಂದಿಗೆ 68 ರನ್ ಚಚ್ಚಿದ್ದರು. ಈ ಸ್ಫೋಟಕ ಅರ್ಧಶತಕದೊಂದಿಗೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತೀ ಹೆಚ್ಚು ಸ್ಟ್ರೈಕ್ ರೇಟ್ ಹೊಂದಿರುವ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ.

ಇದಕ್ಕೂ ಮುನ್ನ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತ್ಯಧಿಕ ಸ್ಟ್ರೈಕ್ ರೇಟ್ ಹೊಂದಿದ ದಾಖಲೆ ಸಾಹಿಲ್ ಚೌಹನ್ ಹೆಸರಿನಲ್ಲಿತ್ತು. ಎಸ್ಟೋನಿಯಾ ದೇಶದ ಪರ ಈವರೆಗೆ 21 ಇನಿಂಗ್ಸ್ ಆಡಿರುವ ಸಾಹಿಲ್ 184.23 ರ ಸ್ಟ್ರೈಕ್ ರೇಟ್ನಲ್ಲಿ 479 ರನ್ ಕಲೆಹಾಕಿದ್ದಾರೆ. ಇದೀಗ ಸಾಹಿಲ್ ಬರೆದಿದ್ದ ವಿಶ್ವ ದಾಖಲೆಯನ್ನು ಅಭಿಷೇಕ್ ಶರ್ಮಾ ಮುರಿದಿದ್ದಾರೆ.

ಟೀಮ್ ಇಂಡಿಯಾ ಪರ ಈವರೆಗೆ 25 ಟಿ20 ಇನಿಂಗ್ಸ್ ಆಡಿರುವ ಅಭಿಷೇಕ್ ಶರ್ಮಾ 193.38 ಸ್ಟ್ರೈಕ್ ರೇಟ್ನಲ್ಲಿ ಬ್ಯಾಟ್ ಬೀಸಿ ಒಟ್ಟು 936 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತೀ ಹೆಚ್ಚು ಸ್ಟ್ರೈಕ್ ರೇಟ್ ಹೊಂದಿರುವ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಅಷ್ಟೇ ಅಲ್ಲದೆ ಆಸ್ಟ್ರೇಲಿಯಾದಲ್ಲಿ ಆಸ್ಟ್ರೇಲಿಯಾ ವಿರುದ್ಧ ಅತೀ ವೇಗದ ಅರ್ಧಶತಕ ಸಿಡಿಸಿದ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಕೂಡ ಅಭಿಷೇಕ್ ಶರ್ಮಾ ತಮ್ಮದಾಗಿಸಿಕೊಂಡಿದ್ದಾರೆ. ಎಂಸಿಜಿ ಮೈದಾನದಲ್ಲಿ ಕೇವಲ 23 ಎಸೆತಗಳಲ್ಲಿ ಹಾಫ್ ಸೆಂಚುರಿ ಪೂರೈಸಿ ಟೀಮ್ ಇಂಡಿಯಾದ ಯುವ ಎಡಗೈ ದಾಂಡಿಗ ಈ ದಾಖಲೆಯನ್ನು ನಿರ್ಮಿಸಿದ್ದಾರೆ.
