
ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ಆ್ಯಶಸ್ ಸರಣಿಯಲ್ಲಿ ಈಗಾಗಲೇ ಎರಡು ಟೆಸ್ಟ್ ಪಂದ್ಯಗಳು ಮುಗಿದಿವೆ. ಈ ಎರಡೂ ಟೆಸ್ಟ್ ಪಂದ್ಯಗಳಲ್ಲಿ ಸೋತಿರುವ ಆತಿಥೇಯ ಇಂಗ್ಲೆಂಡ್ ಸರಣಿಯ ಮೂರನೇ ಟೆಸ್ಟ್ ಪಂದ್ಯಕ್ಕೆ 15 ಸದಸ್ಯರ ತಂಡವನ್ನು ಪ್ರಕಟಿಸಿದೆ.

ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಜುಲೈ 6 ರಿಂದ ಲೀಡ್ಸ್‌ನ ಹೆಡಿಂಗ್ಲಿಯಲ್ಲಿ ನಡೆಯಲಿದೆ. ಮೊದಲೆರಡು ಪಂದ್ಯಗಳನ್ನು ಗೆದ್ದಿರುವ ಆಸ್ಟ್ರೇಲಿಯಾ ತಂಡ ಐದು ಪಂದ್ಯಗಳ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ. ಇದೀಗ ಮೂರನೇ ಟೆಸ್ಟ್ ಪಂದ್ಯವನ್ನು ಆಸ್ಟ್ರೇಲಿಯಾ ಗೆಲ್ಲುವಲ್ಲಿ ಯಶಸ್ವಿಯಾದರೆ ಸರಣಿಯನ್ನು ತನ್ನ ತೆಕ್ಕೆಗೆ ಹಾಕಿಕೊಳ್ಳಲಿದೆ.

ಮೂರನೇ ಟೆಸ್ಟ್ ಪಂದ್ಯಕ್ಕೆ ಇಂಗ್ಲೆಂಡ್ ತಂಡದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಯುವ ಲೆಗ್ ಸ್ಪಿನ್ನರ್ ರೆಹಾನ್ ಅಹ್ಮದ್ ಹೆಡಿಂಗ್ಲಿಯಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ. ಮೂರನೇ ಟೆಸ್ಟ್‌ಗೆ ಸ್ಪಿನ್ ಆಲ್‌ರೌಂಡರ್ ಮೊಯಿನ್ ಅಲಿ 15 ಸದಸ್ಯರ ತಂಡದಲ್ಲಿ ಸೇರ್ಪಡೆಗೊಂಡಿದ್ದಾರೆ.

ಮೂರನೇ ಟೆಸ್ಟ್‌ಗೆ ಇಂಗ್ಲೆಂಡ್ ತಂಡ: ಬೆನ್ ಡಕೆಟ್, ಜ್ಯಾಕ್ ಕ್ರೌಲಿ, ಡ್ಯಾನ್ ಲಾರೆನ್ಸ್, ಓಲಿ ಪೋಪ್, ಬೆನ್ ಸ್ಟೋಕ್ಸ್ (ನಾಯಕ), ಜೇಮ್ಸ್ ಆಂಡರ್ಸನ್, ಜಾನಿ ಬೈರ್‌ಸ್ಟೋವ್ (ವಿಕೆಟ್ ಕೀಪರ್), ಸ್ಟುವರ್ಟ್ ಬ್ರಾಡ್, ಹ್ಯಾರಿ ಬ್ರೂಕ್, ಜೋ ರೂಟ್, ಜೋಶ್ ಟಾಂಗ್, ಓಲಿ ರಾಬಿನ್ಸನ್, ಮೊಯಿನ್ ಅಲಿ, ಕ್ರಿಸ್ ವೋಕ್ಸ್ ಮತ್ತು ಮಾರ್ಕ್ ವುಡ್.

ಇನ್ನು ಲಾರ್ಡ್ಸ್ ಟೆಸ್ಟ್ ಬಗ್ಗೆ ಹೇಳುವುದಾದರೆ ಮೊದಲ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ 416 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ತಂಡ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 325 ರನ್‌ಗಳಿಗೆ ಆಲೌಟ್ ಆಗಿತ್ತು.

ಆದಾಗ್ಯೂ, ಆತಿಥೇಯರು ಎರಡನೇ ಇನ್ನಿಂಗ್ಸ್‌ನಲ್ಲಿ ಪುಟಿದೇದ್ದು, ಆಸ್ಟ್ರೇಲಿಯಾವನ್ನು 279 ರನ್‌ಗಳಿಗೆ ಕಟ್ಟಿಹಾಕಿದರು. ಈ ಮೂಲಕ ಇಂಗ್ಲೆಂಡ್ ಎರಡನೇ ಇನ್ನಿಂಗ್ಸ್‌ನಲ್ಲಿ 371 ರನ್ಗಳ ಗುರಿ ಪಡೆಯಿತು. ಆದರೆ, ಪ್ರವಾಸಿ ತಂಡ 327 ರನ್‌ಗಳಿಗೆ ಆಲೌಟ್ ಆಯಿತು. ಈ ಮೂಲಕ ಎರಡನೇ ಟೆಸ್ಟ್ ಪಂದ್ಯವನ್ನು ಆಸ್ಟ್ರೇಲಿಯಾ 43 ರನ್ ಗಳಿಂದ ಗೆದ್ದುಕೊಂಡಿತು.

ಇದೀಗ ಮೊದಲ ಎರಡು ಟೆಸ್ಟ್‌ಗಳಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತ ನಂತರ, ಇಂಗ್ಲೆಂಡ್ ತಂಡವು 2023 ರ ಆ್ಯಶಸ್‌ನಲ್ಲಿ 0-2 ರಿಂದ ಹಿನ್ನಡೆಯಲ್ಲಿದೆ. ಹೀಗಿರುವಾಗ ಮುಂದಿನ ಪಂದ್ಯದಲ್ಲಿ ಇಂಗ್ಲೆಂಡ್ಗೆ ಗೆಲುವಿನ ಅನಿವಾರ್ಯತೆ ಎದುರಾಗಿದೆ.